ತೈಲ ದರ ಕಡಿತಕ್ಕೆ ಒತ್ತಾಯಿಸಿ ರೈತರ ಪ್ರತಿಭಟನೆ

0
17

ದಾವಣಗೆರೆ:

   ಪದೇ, ಪದೇ ಇಂಧನ ದರ ಹೆಚ್ಚುತ್ತಿರುವುದನ್ನು ಖಂಡಿಸಿ ಹಾಗೂ ಏರಿಕೆಯಾಗಿರುವ ದರವನ್ನು ಕಡಿತಗೊಳಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಹುಚ್ಚವ್ವನಹಳ್ಳಿ ಮಂಜುನಾಥ ಬಣ)ಯ ಕಾರ್ಯಕರ್ತರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

 

 ನಗರದ ಜಯದೇವ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಇಂಧನ ಬೆಲೆ ಏರಿಕೆಗೆ ಕಾರಣವಾಗಿರುವ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಪ್ರಧಾನಿ ಮೋದಿ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

  ಈ ಸಂದರ್ಭದಲ್ಲಿ ಮಾತನಾಡಿದ ಸೇನೆಯ ರಾಜ್ಯಾಧ್ಯಕ್ಷ ಹುಚ್ಚವನಹಳ್ಳಿ ಮಂಜುನಾಥ್, ಇಂಧನ ಬೆಲೆ ನಿಯಂತ್ರಿಸುವಲ್ಲಿ ಕೇಂದ್ರ ಸರಕಾರ ಸಂಪೂರ್ಣ ವಿಫಲವಾಗಿದೆ. ತೈಲ ಬೆಲೆ ಹೆಚ್ಚಳದಿಂದ ಸಾರ್ವಜನಿಕರಿಗೆ, ಬಡ ಮತ್ತು ಮಧ್ಯಮ ವರ್ಗದವರು ತೀವ್ರ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ರೈತರು ಜೀವನ ಸಾಗಿಸುವುದೇ ಕಷ್ಟಕರವಾಗಿದೆ ಎಂದು ಕಿಡಿಕಾರಿದರು.

  ಹೆಚ್ಚಿಸಿರುವ ತೈಲಬೆಲೆಯನ್ನು ಕೂಡಲೇ ಕಡಿಮೆ ಮಾಡಬೇಕು, ಕೇಂದ್ರ ಸರ್ಕಾರ ತನ್ನ ನೀತಿಯನ್ನು ಸರಿಪಡಿಸಿ ಸಾರ್ವಜನಿಕರಿಗೆ, ಬಡವರಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಬೇಕು. ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆದರ ನಿಯಂತ್ರಿಸಬೇಕು. ಸಮಾಜದಲ್ಲಿ ಎಲ್ಲರಂತೆ ಗೌರವಯುತವಾಗಿ ಬದುಕಲು ಅವಕಾಶ ಕಲ್ಪಿಸಿಕೊಡಬೇಕೆಂದು ಆಗ್ರಹಿಸಿದರು.

 ಪ್ರತಿಭಟನೆಯಲ್ಲಿ ಸೇನೆಯ ಜಿಲ್ಲಾ ಕಾರ್ಯದರ್ಶಿ ಗುಮ್ಮನೂರು ಬಸವರಾಜ್, ತಾಲೂಕು ಅಧ್ಯಕ್ಷ ಆಲೂರು ಪರಶುರಾಮ್, ಹುಚ್ಚವನಳ್ಳಿ ಪ್ರಕಾಶ್, ಯರನಾಯಕನಹಳ್ಳಿ ರುದ್ರಪ್ಪ, ಕಲ್ಲಿಕೇರಿ ಅಣ್ಣಪ್ಪ, ಪಾಮೇನಹಳ್ಳಿ ಗೌಡ್ರು ರಾಜಶೇಖರ್ ಮತ್ತಿತರರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here