ನಿತ್ಯದ ಸಮಸ್ಯೆಗಳ ಪರಿಹಾರಕ್ಕೆ ಕಾನೂನಿನ ನೆರವು ಪಡೆಯಿರಿ

0
42

ಹಾವೇರಿ:

      ಜನಸಾಮಾನ್ಯರು ಪ್ರತಿ ದಿನ ಹಲವಾರು ರೀತಿಯ ಕಷ್ಟಗಳನ್ನು ಎದುರಿಸುತ್ತಾರೆ. ಕೆಲವು ಸಂದರ್ಭದಲ್ಲಿ ಮೋಸಕ್ಕೂ ಸಹ ಒಳಗಾಗುತ್ತಾರೆ. ಇಂಥ ಸಂದರ್ಭದಲ್ಲಿ ಯಾವ ರೀತಿಯಾಗಿ ಕಾನೂನಿನ ನೆರವು ಪಡೆದುಕೊಳ್ಳಬಹುದು ಎಂಬುದು ಎಲ್ಲರಿಗೂ ತಿಳಿದಿರಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀಮತಿ ಎಸ್.ಎಚ್.ರೇಣುಕಾದೇವಿ ಅವರು ಹೇಳಿದರು.

      ಮಂಗಳವಾರ ಜಿಲ್ಲಾ ನ್ಯಾಯಾಲಯ ಸಂಕೀರ್ಣಗಳ ಆವರಣದಲ್ಲಿ ಕಾನೂನು ಸಾಕ್ಷರತಾ ರಥಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

      ಕಾನೂನು ಅರಿವಿನ ಕೊರತೆಯಿಂದಾಗಿ ಬಹಳಷ್ಟು ಮಂದಿ ಕಾನೂನು ನೆರವು ಪಡೆಯಲು ಸಾಧ್ಯವಾಗುವುದಿಲ್ಲ. ಹೀಗಾಗಿ, ಸಾರ್ವಜನಿಕರಲ್ಲಿ ಕಾನೂನು ಅರಿವು ಮೂಡಿಸುವುದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಉದ್ದೇಶವಾಗಿದೆ. ಕಾನೂನು ಸಾಕ್ಷರತಾ ರಥದ ಮೂಲಕ ವಿವಿಧ ಗ್ರಾಮಗಳಿಗೆ ಸಂಚರಿಸಿ ಜನರಿಗೆ ಕಾನೂನುಗಳ ನೆರವಿನ ಬಗ್ಗೆ ತಿಳುವಳಿಕೆ ನೀಡಲಾಗುತ್ತಿದೆ. ಇದರ ಪ್ರಯೋಜನವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ಹೇಳಿದರು.

      ನಾಲ್ಕು ದಿನಗಳವರೆಗೆ ಹಾವೇರಿ ತಾಲೂಕಿನಲ್ಲಿ ಕಾನೂನು ಸಾಕ್ಷರತಾ ರಥ ಸಂಚರಿಸಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಬಾಲ್ಯ ವಿವಾಹ ಮತ್ತು ಬಾಲ ಕಾರ್ಮಿಕ ನಿಷೇಧ ಕಾಯ್ದೆ, ಅಸಂಘಟಿತ ಕಾರ್ಮಿಕರಿಗೆ ಇರುವ ಯೋಜನೆ, ಗ್ರಾಹಕರ ಹಿತರಕ್ಷ ಣಾ ಕಾಯ್ದೆ, ಮಕ್ಕಳ ಹಕ್ಕುಗಳು, ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ, ಐ.ಸಿ.ಡಿ.ಎಸ್. ಯೋಜನೆ, ಹೆಣ್ಣು ಮಕ್ಕಳ ಅಕ್ರಮ ಸಾಗಣೆ ನಿಷೇಧ ಕಾಯ್ದೆ ಮತ್ತು ಕಡ್ಡಾಯ ಶಿಕ್ಷಣ ಕಾಯ್ದೆ, ತಂಬಾಕು ದೂಮಪಾನ ದುಷ್ಪರಿಣಾಮ, ಕಾನೂನು ಸೇವಾ ಪ್ರಾಧಿಕಾರದಿಂದ ಸಿಗಬಹುದಾದ ಸೌಲಭ್ಯಗಳ ಕುರಿತು ಸಾರ್ವಜನಿಕರಲ್ಲಿ ಮಾಹಿತಿ ನೀಡಲಾಗುತ್ತಿದೆ ಎಂದು ವಿವರಿಸಿದರು.

      ಈ ಸಂದರ್ಭದಲ್ಲಿ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಸಿ.ಸದಾನಂದಸ್ವಾಮಿ, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎ.ವಿ.ಪಾಟೀಲ, ಹಿರಿಯ ಸಿವಿಲ್ ನ್ಯಾಯಾದೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀಮತಿ ವೈ.ಎಲ್.ಲಾಡಖಾನ್, ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ವಾಸುದೇವ ಆರ್.ಗುಡಿ, ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಶ್ರೀಮತಿ ಲಕ್ಷ್ಮೀ ಎನ್.ಗರಗ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಅಶೋಕ ನೀರಲಗಿ, ಕಾರ್ಯದರ್ಶಿ ದೇವರಾಜ ನಾಯ್ಡು ಹಾಗೂ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here