ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ಆಗ್ರಹ

0
17

ಹುಳಿಯಾರು:

       ಹುಳಿಯಾರು ಪಟ್ಟಣದ ನಾನಾ ಕಡೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು,ಜನಸಾಮಾನ್ಯರು ಒಬ್ಬಂಟಿಯಾಗಿ ಓಡಾಡುವುದು ಕಷ್ಟಕರವಾಗಿದ್ದು ಪಟ್ಟಣ ಪಂಚಾಯ್ತಿ ಅಧಿಕಾರಿಗಳು ಇವುಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥ ಮೂರ್ತಿನಾಯ್ಕ ಆಗ್ರಹಿಸಿದ್ದಾರೆ.

        ಗಲ್ಲಿ ಗಲ್ಲಿಗಳಲ್ಲಿ ತಿರುಗಾಡುತ್ತಿರುವ ಬೀದಿ ನಾಯಿಗಳ ಹಿಂಡು ವಾಹನ ಸವಾರರ ಮೇಲೆ ದಾಳಿ ಮಾಡುತ್ತವೆ. ಕೆಲ ನಾಯಿಗಳು ಬೈಕ್, ಕಾರುಗಳ ಹಿಂದೆ ಓಡಿ ಬರುತ್ತಿರುವ ಪರಿಣಾಮ ವಾಹನ ಸವಾರರು ಆತಂಕ ಪಡಬೇಕಾಗಿದೆ. ರಸ್ತೆಯಲ್ಲಿ ಚಿಕ್ಕ ಮಕ್ಕಳು, ವಯೋವೃದ್ಧರು ಸಂಚಾರ ಮಾಡಲು ಹಿಂದೇಟು ಹಾಕುವಂತಾಗಿದೆ. ರಾತ್ರಿ ವೇಳೆ ವಾರ್ಡ್, ಕಾಲೊನಿ ನಿವಾಸಿಗಳ ನಿದ್ದೆಗೆಡಿಸುತ್ತಿರುವ ಬಿಡಾಡಿ ನಾಯಿಗಳು ಉಪಟಳ ಹೆಚ್ಚಾಗಿದೆ.

         ಬೀದಿ ನಾಯಿಗಳ ಹಾವಳಿ ತಪ್ಪಿಸುವಂತೆ ಗ್ರಾಪಂ ಆಡಳಿತಕ್ಕೆ ಈ ಹಿಂದೆ ಸ್ಥಳೀಯರು ಮನವಿ ಸಲ್ಲಿಸಿದ್ದಾರೆ. ಆದರೆ, ಯಾವುದೇ ಕ್ರಮ ಕೈಗೊಳ್ಳದ ಪರಿಣಾಮ ಈಗ ಪಟ್ಟಣದ ಅನೇಕ ಕಡೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ.

       ಐಬಿ ರಸ್ತೆ, ಮಸೀದಿ ರಸ್ತೆಗಳಲ್ಲಿ ಮಾಂಸದಂಗಡಿಗಳು ಇವೆ. ಈ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬೀದಿ ನಾಯಿಗಳು ಕಾಣಿಸುತ್ತವೆ. ಅಂಗಡಿದಾರರು ಸಾರ್ವಜನಿಕ ಸ್ಥಳ, ಕಸದ ತೊಟ್ಟಿಯಲ್ಲಿ ಮಾಂಸದ ತ್ಯಾಜ್ಯ ಹಾಕುವುದರಿಂದ ನಾಯಿಗಳು ಚೆಲ್ಲಾಟ ಹೆಚ್ಚಾಗಿದೆ ಎಂದು ಆರೋಪಿಸಿದ್ದಾರೆ.

        ಸಂತಾನ ತಡೆ ಚಿಕಿತ್ಸೆ ಮಾಡುವುದರಿಂದ ಬೀದಿ ನಾಯಿಗಳ ಹಾವಳಿ ನಿಯಂತ್ರಣ ಮಾಡಬಹುದು. ಆದರೆ, ಈ ಕಾರ್ಯಕ್ಕೆ ಗ್ರಾಮ ಪಂಚಾಯ್ತಿ ಮುಂದಾಗುತ್ತಿಲ್ಲ. ಆದ್ದರಿಂದ ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು ಈಗ ಗ್ರಾಪಂ ಆಡಳಿತ ಹೋಗಿ ಪಟ್ಟಣ ಪಂಚಾಯ್ತಿಯಾಗಿ ಮೇಲ್ದರ್ಜೆಗೇರಿದ್ದು ಈಗಲಾದರೂ ಅಧಿಕಾರಿಗಳು ನಾಯಿಗಳನ್ನು ಹಿಡಿಸುವ ಅಥವ ಸಂತಾನ ಹರಣ ಚಿಕಿತ್ಸೆ ಮಾಡಿಸುವ ಮೂಲಕ ನಿಯಂತ್ರಣ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

LEAVE A REPLY

Please enter your comment!
Please enter your name here