ಸಚಿವ ಸ್ಥಾನ ಹಂಚಿಕೆ ಪಟ್ಟಿಯನ್ನು ಬದಲಾಯಿಸಿದ ಕುಮಾರಸ್ವಾಮಿ

0
37

ಬೆಂಗಳೂರು

      ರಾಜ್ಯದ ನಿಗಮ ಮಂಡಳಿ ನೇಮಕಾತಿಯಲ್ಲಿ ಅಸಮಾಧಾನ ವಿಚಾರ ತಾರಕಕ್ಕೇರಿದ್ದು, ಕಾಂಗ್ರೆಸ್-ಜೆಡಿಎಸ್ ಮೈತ್ರಿಯಲ್ಲಿ ಬಿರುಕಿಗೆ ಕಾರಣವಾಗಿದೆ. ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ವಿರುದ್ಧ ತೊಡೆತಟ್ಟಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು, ನಿಗಮ ಮಂಡಳಿ ನೇಮಕಾತಿ ಸಂದರ್ಭದಲ್ಲಿ ಐವರು ಶಾಸಕರ ನೇಮಕಾತಿಗೆ ತಡೆಯೊಡ್ಡುವ ಮೂಲಕ ಸಮ್ಮಿಶ್ರ ಸರ್ಕಾರದಲ್ಲಿ ತಮ್ಮ ಶಕ್ತಿ ಪ್ರದರ್ಶನ ಮಾಡಿದ್ದಾರೆ.

        ಕಾಂಗ್ರೆಸ್ ಹೈಕಮಾಂಡ್ ನೀಡಿದ ಸಚಿವ ಸ್ಥಾನ ಹಂಚಿಕೆ ಪಟ್ಟಿಯನ್ನು ಕುಮಾರಸ್ವಾಮಿ ಬದಲಾಯಿಸಿದ್ದಾರೆ. ಈ ಬಗ್ಗೆ ರಾಜ್ಯ ಕಾಂಗ್ರೆಸ್ ಮುಖಂಡರು, ಹೈಕಮಾಂಡ್‍ಗೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಮಸ್ಯೆ ಬಗೆಹರಿಸಲು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅಖಾಡಕ್ಕೆ ಇಳಿದಿದ್ದಾರೆ.

       ಪಕ್ಷ ಸೂಚಿಸಿರುವವರನ್ನು ನೇಮಕಮಾಡಲು ಒಂದು ವೇಳೆ ಕುಮಾರಸ್ವಾಮಿ ಒಪ್ಪದಿದ್ದಲ್ಲಿ ಸಮನ್ವಯ ಸಮಿತಿ ಸಭೆ ಕರೆಯುವಂತೆ ಸಿದ್ದರಾಮಯ್ಯ ಅವರಿಗೆ ವೇಣುಗೋಪಾಲ್ ಸೂಚಿಸಲಿದ್ದು, ಶನಿವಾರ ಅಥವಾ ಭಾನುವಾರ ಸಮನ್ವಯ ಸಮಿತಿ ಸಭೆ ನಡೆಯುವ ಸಾಧ್ಯತೆಯಿದೆ ಎನ್ನಲಾಗಿದೆ.

      ಈ ವಿಷಯದಲ್ಲಿ ಉಭಯ ಪಕ್ಷಗಳ ನಾಯಕರು ಈಗಾಗಲೇ ಬಹಿರಂಗ ಹೇಳಿಕೆ ನೀಡುವ ಮೂಲಕ ಸಮ್ಮಿಶ್ರ ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದನ್ನು ಜಗಜ್ಜಾಹೀರು ಮಾಡಿದ್ದಾರೆ. ಈ ಮಧ್ಯೆ ಇಂಗ್ಲಿಷ್ ಮಾಧ್ಯಮ ಶಾಲೆ ತೆರೆಯುವ ವಿಚಾರದಲ್ಲಿಯೂ ಉಭಯ ಪಕ್ಷಗಳ ನಡುವೆ ಆರೋಪ-ಪ್ರತ್ಯಾರೋಪಗಳಿಗೆ ಕಾರಣವಾಗಿವೆ. ಒಟ್ಟಿನಲ್ಲಿ ನಿಗಮ ಮಂಡಳಿ ನೇಮಕಾತಿ ಹಾಗೂ ಇತರ ವಿಷಯಗಳಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ವೇಣುಗೋಪಾಲ್ ಯಾವ ರೀತಿ ಶಮನಗೊಳಿಸಲಿದ್ದಾರೆ ಎಂಬುದನ್ನು ಕಾದುನೋಡಬೇಕಾಗಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

LEAVE A REPLY

Please enter your comment!
Please enter your name here