ಬೆಂಗಳೂರು:
ರಾಜ್ಯದಲ್ಲಿ ಒಂದೆಡೆ ಬೇಸಿಗೆ ಬಿಸಿಲಿಳ ಝಳ ಹೆಚ್ಚಾಗತೊಡಗಿದ್ದರೆ, ಮತ್ತೊಂದೆಡೆ ಲೋಕಸಭಾ ಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗೇರತೊಡಗುತ್ತಿದೆ. ನಾಮಪತ್ರ ಸಲ್ಲಿಕೆ ಕಾರ್ಯ ಪ್ರಾರಂಭ ವಾಗಿದ್ದು, ಅಲಲ್ಲಿ ಪ್ರಮುಖ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ತಮ್ಮ ಉಮೇದುವಾರಿಗೆ ಸಲ್ಲಿಸುತ್ತಿದ್ದಾರೆ.
ಈ ನಡುವೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಕೆಪಿಸಿಸಿ ಅಧ್ಯಕ್ಷರು ಆಗಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶುಕ್ರವಾರ ತಮ್ಮ ನಿವಾಸದಲ್ಲಿ ಬಿ-ಫಾರಂ ವಿತರಿಸಿದರು. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರ ವಿರುದ್ಧ ಸ್ಪರ್ಧಿಸುತ್ತಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಪುತ್ರಿ ಸೌಮ್ಯರೆಡ್ಡಿ ಸೇರಿದಂತೆ ಹಲವು ಬಿ-ಫಾರಂ ಪಡೆದರು.
ತುಮಕೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ, ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್ ಚಂದ್ರಪ್ಪ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ, ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರಿಗೆ ಡಿಕೆ ಶಿವಕುಮಾರ್ ಬಿ-ಫಾರಂ ವಿತರಿಸಿದರು.