ಬೆಂಗಳೂರು
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಆನ್ ಲೈನ್ ಮತ್ತು ಆಫ್ ಲೈನ್ ಎರಡೂ ನಮೂನೆಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ?ಮುಖ್ಯಮಂತ್ರಿಗಳ ಜತೆ ಮಾತನಾಡಿ ಗೃಹಲಕ್ಷಿ÷್ಮ ಯೋಜನೆ ಜಾರಿಯನ್ನು ನಾನೇ ಸದ್ಯಕ್ಕೆ ತಡೆದಿದ್ದೇನೆ. ಗೃಹಜ್ಯೋತಿ ಯೋಜನೆ ಅರ್ಜಿ ವಿಚಾರವಾಗಿ ಸರ್ವರ್ ಸಮಸ್ಯೆಇದೆ. ಗೃಹಲಕ್ಷ್ಮಿ ಯೋಜನೆಯಲ್ಲಿ ಮನೆಯೊಡತಿಯೇ ಸ್ವಯಂ ಅರ್ಜಿ ಸಲ್ಲಿಸುವಂತೆ ಸರಳೀಕರಣ ಮಾಡಲಾಗುತ್ತಿದೆ. ಇದಕ್ಕಾಗಿ ಆಲ್ ಲೈನ್ ಹಾಗೂ ಆಫ್ ಲೈನ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.
ಈ ವಿಚಾರವಾಗಿ ಇಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರು ಹಾಗೂ ಅಧಿಕಾರಿಗಳ ಜೊತೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು. ಈ ಯೋಜನೆಗಳಿಗೆ ಆನ್ ಲೈನ್ ಅರ್ಜಿ ಸಲ್ಲಿಕೆಗೆ ಕೆಲವರು 200-300 ರೂ. ಹಣ ವಸೂಲಿ ಮಾಡುತ್ತಿದ್ದಾರೆ. ಈ ಬಗ್ಗೆ ನಮಗೆ ದೂರು ಬಂದಿದೆ. ಈ ಅರ್ಜಿ ತುಂಬಲು ಏಜೆನ್ಸಿಗಳಾಗಲಿ ಅಥವಾ ಯಾರೇ ಲಂಚ ಪಡೆದರೆ ಅವರ ಪರವಾನಿಗೆ ರದ್ದಾಗುತ್ತದೆ, ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ ಎಂಬ ಎಚ್ಚರಿಕೆ ನೀಡುತ್ತಿದ್ದೇನೆ.
ಈ ಯೋಜನೆಗಳಿಗೆ ನೋಂದಣಿ ಮಾಡಿಕೊಳ್ಳಲು ಹೋಗುವವರು ಯಾರಿಗೂ ಲಂಚ ನೀಡುವ ಅಗತ್ಯವಿಲ್ಲ. ಯಾರಾದರೂ ಲಂಚ ಕೇಳಿದರೆ ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡಿ ದೂರು ನೀಡಿ. ನಾವು ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಲಂಚ ಮುಕ್ತ ರಾಜ್ಯ ನಮ್ಮ ಗುರಿ? ಎಂದು ತಿಳಿಸಿದರು.
ಬೆಂಗಳೂರು ನಗರದ ಅಭಿವೃದ್ಧಿಗೆ ರಾಜಕೀಯ ಮೀರಿ ಕೆಲಸ ಮಾಡುತ್ತೇನೆ. ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಅವರ ಸಲಹೆ, ಅಭಿಪ್ರಾಯ ಪಡೆಯಲಿದ್ದೇನೆ. ಈ ಹಿಂದೆ ಜಗದೀಶ್ ಶೆಟ್ಟರ್, ದೇವೇಗೌಡರು, ಎಸ್.ಎಂಕೃಷ್ಣ, ಬಿ.ಎಸ್ ಯಡಿಯೂರಪ್ಪ ಸೇರಿದಂತೆ ಅನೇಕ ಮಾಜಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದೇನೆ. ಸಾಧ್ಯವಾದರೆ ಕುಮಾರಸ್ವಾಮಿ ಅವರನ್ನು ಭೇಟಿ ಮಾಡುತ್ತೇನೆ. ಎಲ್ಲರ ಅನುಭವ ಅವರ ವಿಚಾರಧಾರೆ ಕೇಳಿ ಪಡೆಯುತ್ತೇನೆ. ಇದರಲ್ಲಿ ರಾಜಕಾರಣ ಯಾಕೆ? ಎಂದು ಪ್ರಶ್ನಿಸಿದರು.
ಅನ್ನಭಾಗ್ಯ ಯೋಜನೆ ತಡವಾಗಿಯಾದರೂ ಸರಿ ಜಾರಿ ಮಾಡುತ್ತೇವೆ. ಈ ಯೋಜನೆಯ ಜಾರಿ ವಿಚಾರವಾಗಿ ಬಡವರು, ಫಲಾನುಭವಿಗಳು ಹೋರಾಟ ಮಾಡುತ್ತಿಲ್ಲ. ಬದಲಿಗೆ ಹೊಟ್ಟಿ ತುಂಬಿರುವ ಕೆಲವರು ಹೋರಾಟ ಮಾಡುತ್ತೇವೆ ಎನ್ನುತ್ತಿದ್ದಾರೆ. ಈ ಸರ್ಕಾರದಿಂದ ನಮಗೆ ಸಹಾಯವಾಗುತ್ತಿದೆ ಎಂದು ಬಡವರು ಸಂತೋಷದಿAದ ಇದ್ದಾರೆ. ನಮ್ಮ ಅಕ್ಕ ತಂಗಿಯರು ನಮ್ಮ ಶಕ್ತಿ ಯೋಜನೆಯಿಂದ ದೇವಸ್ಥಾನಗಳಿಗೆ ಭೇಟಿ ನೀಡಿ ಧರ್ಮಯಾತ್ರೆ ಮಾಡುತ್ತಿದ್ದಾರೆ ಎಂದರು.
ಅವರ ಖುಷಿ ನೋಡಲಾಗದೇ, ಒಂದು ಕಾಳು ಅಕ್ಕಿ ಕಡಿಮೆ ಕೊಟ್ಟರೂ ಹೋರಾಟ ಮಾಡುತ್ತೇನೆ ಎಂದು ಸಂಕಟಪಡುತ್ತಿದ್ದಾರೆ. ಯಡಿಯೂರಪ್ಪನವರು ಧರಣಿ ಮಾಡುವುದರಲ್ಲಿ ಸಮರ್ಥರು. ಈಗಲೂ ಅವರು ವಿಧಾನಸಭೆಗೆ ಬಂದು ಹೋರಾಟ ಮಾಡಲಿ. ಅನ್ನಭಾಗ್ಯ ಯೋಜನೆ ಜಾರಿ ವಿಚಾರಪವಾಗಿ ಮುನಿಯಪ್ಪ ಅವರು ಕೇಂದ್ರ ಸಚಿವ ಪಿಯೂಶ್ ಗೋಯಲ್ ಅವರ ಜತೆ ಮಾತನಾಡಲಿದ್ದಾರೆ. ಮುಖ್ಯಮಂತ್ರಿಗಳು ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಈ ವಿಚಾರವಾಗಿ ಮಾತನಾಡಿದ್ದು, ಈ ಸಂದರ್ಭದಲ್ಲಿ ಅವರು ಕೇಂದ್ರ ಸಚಿವರ ಜತೆ ಮಾತನಾಡುವ ಭರವಸೆ ನೀಡಿದ್ದಾರೆ.
ವಿದ್ಯುತ್ ಬೆಲೆ ಏರಿಕೆ ವಿರುದ್ಧ ಹೋರಾಟದ ಬಗ್ಗೆ ಕೇಳಿದಾಗ, ?ನಾವು ಎಲ್ಲಿ ವಿದ್ಯುತ್ ಬೆಲೆ ಏರಿಕೆ ಮಾಡಿದ್ದೇವೆ? ಅವರದೇ ಸರ್ಕಾರ ಇದ್ದಾಗ ವಿದ್ಯುತ್ ಬೆಲೆ ಏರಿಕೆ ಮಾಡಿದ್ದಾರೆ. ಚುನಾವಣೆ ಫಲಿತಾಂಶ ಬರುವುದಕ್ಕೂ ಮುನ್ನವೇ ಅವರು ವಿದ್ಯುತ್ ಬೆಲೆ ಏರಿಕೆ ಮಾಡಿದ್ದಾರೆ. ವಿದ್ಯುತ್ ದರ ಪರಿಷ್ಕರಣ ಸಮಿತಿ ಬೆಲೆ ನಿಗದಿಯಲ್ಲಿ ಸ್ವಂತ ಅಧಿಕಾರ ಹೊಂದಿದೆ ಎಂದು ಡಿ.ಕೆ. ಶಿವಕುಮಾರ್ ಸಮರ್ಥಿಸಿಕೊಂಡರು.
ಬಿಜೆಪಿಯವರು ಎಷ್ಟು ಹೊಸ ಬಿಲ್ ಗಳನ್ನು ಸೃಷ್ಟಿಸಿ ಹಣ ನೀಡಿದ್ದಾರೆ ಎಂದು ಹೇಳಿದರೆ ಎಷ್ಟು ಜನ ಮನೆಗೆ ಹೋಗುತ್ತಾರೆ ಗೊತ್ತಿದೆಯೇ? ಸಾವಿರಾರು ಕೋಟಿ ನೀಡಲಾಗಿದೆ. ಈ ವಿಚಾರಗಳು ಬೊಮ್ಮಾಯಿ ಹಾಗೂ ಯಡಿಯೂರಪ್ಪ ಅವರಿಗೆ ತಿಳಿದಿದೆ. ರಾಜ್ಯದಲ್ಲಿ ವಿದ್ಯುತ್ ಗೆ ಎಷ್ಟು ಖರ್ಚಾಗುತ್ತದೆ ಎಂದು ನನಗೆ ಗೊತ್ತಿದೆ. ನನ್ನ ಅವಧಿಯಲ್ಲಿ ರಾಜ್ಯದಲ್ಲಿ ಹೆಚ್ಚುವರಿ ವಿದ್ಯುತ್ ಉತ್ಪಾದನೆ ಮಾಡಿ ಅದನ್ನು ಬೇರೆ ರಾಜ್ಯಗಳಿಗೆ ನೀಡಿರುವ ಬಗ್ಗೆ ರಾಜ್ಯಪಾಲರು ತಮ್ಮ ಭಾಷಣದಲ್ಲಿ ಹೇಳಿದ್ದಾರೆ. ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಇಲ್ಲದೆ 3500 ಕೋಟಿ ಮೊತ್ತದ ವಿದ್ಯುತ್ ಹೇಗೆ ಮಾರಲಾಯಿತು? ಎಂದು ಪ್ರಶ್ನಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ