ಬೆಂಗಳೂರು:
ಕರ್ನಾಟಕ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದು ಈ ಅವಿಸ್ಮರಣೀಯ ಕ್ಷಣಕ್ಕೆ ಇಡೀ ರಾಜ್ಯದ ಜನತೆ ಕಾತರದಿಂದ ಕಾಯುತ್ತಿದೆ ಮತ್ತು ಈ ಕ್ಷಣವನ್ನು ಕಣ್ತುಂಬಿಕೊಳ್ಳಲ್ಲು ಹಲವಾರು ರಾಜಕೀಯ ಧೂರೀಣರು ಮತ್ತು ಅತಿರಥಮಹಾರಥರು ಆಗಮಿಸಿರುವುದು ವಿಶೇಷ.
ಬೆಂಗಳೂರಿನ ಪ್ರಸಿದ್ಧ ಕಂಠೀರವ ಕ್ರೀಡಾಂಗಣದಲ್ಲಿ ಇಂದು ಮಧ್ಯಾಹ್ನ 12.30ಕ್ಕೆ ರಾಜ್ಯದ ಸಿಎಂ ಆಗಿ ಎರಡನೇ ಬಾರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಆಗಿ ಕನಕಪುರದ ಬಂಡೆ ಎಂದೇ ಖ್ಯಾತರಾದ ಡಿಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.ಈರ್ವರಿಗೂ ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೊಟ್ ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ.
ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೇರಿದಂತೆ 10 ಮಂದಿ ಶಾಸಕರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇವರಲ್ಲಿ ಇಂದು 8 ಶಾಸಕರು ಮಾತ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಎಂ.ಬಿ. ಪಾಟೀಲ್, ಡಾ.ಜಿ.ಪರಮೇಶ್ವರ್, ಕೆ.ಎಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ರಾಮಲಿಂಗಾರೆಡ್ಡಿ, ಜಮೀರ್ ಅಹ್ಮದ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಸೇಂಟ್ ಜೋಸೆಫ್ ಕಾಲೇಜು ಮೈದಾನದಲ್ಲಿ ಗಣ್ಯರ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ಇತರೆ ವಾಹನ ಬಿಬಿಎಂಪಿ ಮುಖ್ಯ ಕಚೇರಿ ಆವರಣ, ಬಾದಾಮಿ ಹೌಸ್, ಯುನೈಟೆಡ್ ಮಿಷನ್ ಕಾಲೇಜು ಮೈದಾನದಲ್ಲಿ ನಿಲ್ಲಿಸಲು ಅವಕಾಶ ನೀಡಲಾಗಿದೆ. ಕಸ್ತೂರಬಾ ರಸ್ತೆ, ಮಲ್ಯ ಆಸ್ಪತ್ರೆ ರಸ್ತೆಯಲ್ಲಿ ವಾಹನ ನಿಲುಗಡೆ ನಿಷೇಧ ಹೇರಲಾಗಿದ್ದು, ಅರಮನೆ ಮೈದಾನದಲ್ಲಿ ಸಾರ್ವಜನಿಕರ ವಾಹನಗಳ ನಿಲುಗಡೆಗೆ ಸೂಚನೆ ನೀಡಲಾಗಿದೆ.
ಮಧ್ಯಾಹ್ನ ಹೊತ್ತಿಗೆ ಕಂಠೀರವ ಕ್ರೀಡಾಂಗಣ ಸುತ್ತಮುತ್ತ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆಯಿದೆ. ಈ ಹಿನ್ನೆಲೆ ನಗರದಲ್ಲಿ ವಾಹನ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಬೆಳಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಕೆಲವು ರಸ್ತೆಗಳು ಬಂದ್ ಆಗಿರಲಿವೆ. ಕ್ವೀನ್ಸ್ ವೃತ್ತದಿಂದ ಸಿದ್ದಲಿಂಗಯ್ಯ ವೃತ್ತದವರೆಗೆ ವಾಹನಗಳಿಗೆ ನಿರ್ಬಂಧ ಹೇರಲಾಗಿದೆ. ಇದರ ಜೊತೆಗೆ ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಮೇ 20 ಮತ್ತು 21ರಂದು ನಡೆಯಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಗೆ ತೊಂದರೆಯಾಗಲಿದೆ.
ಇಂದು ಸಿಇಟಿ ಪರೀಕ್ಷೆ ಸಮಯದಲ್ಲಿಯೇ ಸಿಎಂ-ಡಿಸಿಎಂ ಪ್ರಮಾಣ ವಚನ ಕಾರ್ಯಕ್ರಮ ಇರುವುದರಿಂದ ಅಭ್ಯರ್ಥಿಗಳಿಗೆ ಯಾವುದೇ ಸಮಸ್ಯೆಯಾಗಬಾರದೆಂದು ಮತ್ತು ಕೊನೆಗಳಿಗೆಯಲ್ಲಿ ಟ್ರಾಫಿಕ್ ನಲ್ಲಿ ಸಿಕ್ಕಿಹಾಕಿಕೊಳ್ಳಬಾರದೆಂದು ಬೆಳಗ್ಗೆ 8.30ರೊಳಗೆ ಪರೀಕ್ಷಾ ಕೇಂದ್ರಗಳಿಗೆ ತಲುಪುವಂತೆ ಸೂಚಿಸಲಾಗಿದೆ.
ಸಿಇಟಿ ಬರೆಯುವ ವಿದ್ಯಾರ್ಥಿಗಳಿಗೆ ಸಮಸ್ಯೆ ಆಗದಂತೆ ಕ್ರಮಕ್ಕೆ ಸೂಚನೆ ನೀಡಿದ್ದು ಪರೀಕ್ಷಾ ಕೇಂದ್ರಗಳಿಗೆ ತೆರಳುವವರು ಮುಂಚಿತವಾಗಿ ತೆರಳಲು ಟ್ವೀಟ್ ಮೂಲಕ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ವಿದ್ಯಾರ್ಥಿಗಳಿಗೆ ಸಹಾಯ ಬೇಕಿದ್ದಲ್ಲಿ ಪೊಲೀಸರನ್ನು ಸಂಪರ್ಕಿಸಲು ಮನವಿ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ