ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದ ಸಿಎಂ : ಮನೆ ಹಾನಿಯಾದವರಿಗೆ 10 ಸಾವಿರ ರೂ ಪರಿಹಾರ

ಗ್ರಾಮಮಟ್ಟದಲ್ಲಿ ಟಾಸ್ಕ್ ಫೋರ್ಸ್ ರಚಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ
ಮಳೆಯಿಂದ 12 ಜನರು ಹಾಗೂ 65 ಜಾನುವಾರುಗಳ ಸಾವು.
ರಕ್ಷಣೆ ಮತ್ತು ಪರಿಹಾರ ಕಾರ್ಯಗಳಿಗೆ 13 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಬಳಿ 735.59 ಕೋಟಿ ರೂ ಲಭ್ಯ.
ಬೆಂಗಳೂರು : ಕಳೆದ ಮೂರು ನಾಲ್ಕು ದಿನಗಳಿಂದ ಕರಾವಳಿ, ಮಲೆನಾಡು ಮತ್ತು ಬಯಲುಸೀಮೆ ಪ್ರದೇಶಗಳಲ್ಲಿ ವಾಡಿಕೆ ಮಳೆಗಿಂತ ಹೆಚ್ಚು ಮಳೆಯಾಗಿದೆ ಹಾಗಾಗಿ ಜನ ಜಾನುವಾರಗಳಿಗೆ ತೊಂದರೆ ಯಾಗಿರುವುದು ಕಂಡುಬಂದಿದೆ. ಹಾಗಾಗಿ 13 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾಹಿತಿ ಪಡೆಯಲಾಯಿತು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಪ್ರವಾಹ ಪರಿಸ್ಥಿತಿ ಕುರಿತು 13 ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾಹಿತಿ ಪಡೆದ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
ವಿಡಿಯೋ ಕಾನ್ಫರೆನ್ಸ್ ಮೂಲಕ ಮಾಹಿತಿ : ರಾಜ್ಯದ 13 ಜಿಲ್ಲೆಗಳಲ್ಲಿ ತೀವ್ರವಾದ ಪ್ರವಾಹ ಬಂದಿದೆ. 17 ತಾಲ್ಲೂಕಿನಲ್ಲಿ ಮಳೆ ಹೆಚ್ಚಾಗಿ ಬಿದ್ದಿದೆ. ಜೂನ್ 1 ರಿಂದ ಇಲ್ಲಿಯವರೆಗೂ 12 ಜನರು ಹಾಗೂ 65 ಜಾನುವರಗಳು ಸಾವನ್ನಪ್ಪಿದೆ. ಭೂ ಕುಸಿತವಾಗಿರುವ ಸ್ಥಳಗಳಿಂದ ಜನರನ್ನು ಸುರಕ್ಷಿತವಾಗಿ ಮತ್ತೊಂದು ಪ್ರದೇಶಕ್ಕೆ ಸ್ಥಳಾಂತರ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ಮನೆ ಹಾನಿಯಾದವರಿಗೆ 10 ಸಾವಿರ ರೂ ಪರಿಹಾರ :
ಮಳೆಯಿಂದ ಮನೆ ಹಾನಿಯಾದಲ್ಲಿ ಮೊದಲು 10 ಸಾವಿರ ತುರ್ತು ಪರಿಹಾರ ಕೂಡಲೇ ನೀಡಲಾಗುವುದು. ನಂತರ ಹಾನಿ ಪ್ರಮಾಣವನ್ನು ನಿಯಮಾನುಸಾರ ಅಂದಾಜು ಮಾಡಿ, ವರ್ಗೀಕರಿಸಿ, ರಾಜೀವ್ ಗಾಂಧಿ ವಸತಿ ನಿಗಮದ ತಂತ್ರಾಂಶದಲ್ಲಿ ಅಪ್ ಲೋಡ್ ಮಾಡಿ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲು ಸೂಚನೆಯನ್ನು ನೀಡಲಾಗಿದೆ ಎಂದರು.
ರಕ್ಷಣಾ ತಂಡಗಳನ್ನು ಬಳಸಿಕೊಳ್ಳಲು ಸೂಚನೆ :
ಕಂದಾಯ, ಪೊಲೀಸ್, ಅಗ್ನಿಶಾಮಕ ಇಲಾಖೆ, ಮತ್ತು ಇತರ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡುವಂತೆ ಸೂಚಿಸಲಾಯಿತು.ಎಸ್.ಡಿ.ಆರ್.ಎಫ್. ಎನ್.ಡಿ.ಆರ್.ಎಫ್ ತಂಡಗಳನ್ನು ರಕ್ಷಣಾ ಕಾರ್ಯಕ್ಕೆ ಬಳಸಿಕೊಳ್ಳವಂತೆ ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚಿಸಿದರು.
ಜಿಲ್ಲಾಧಿಕಾರಿಗಳಿಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚನೆ :
ಸಭೆಯಲ್ಲಿ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದು, ಪ್ರವಾಹ ಮುನ್ನೆಚ್ಚರಿಕೆ ಕುರಿತು ಹಲವು ಮಹತ್ವದ ಸೂಚನೆಗಳನ್ನು ನೀಡಿದ್ದಾರೆ, ರಕ್ಷಣೆ ಮತ್ತು ಪರಿಹಾರ ಕಾರ್ಯಗಳಿಗೆ ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಬಳಿ ಒಟ್ಟು 735.59 ಕೋಟಿ ರೂ. ಲಭ್ಯವಿದೆ ಎಂದು ಸಿಎಂ ಮಾಹಿತಿ ನೀಡಿದರು.
ಕೂಡಲೇ ರಸ್ತೆ ಸರಿಪಡಿಸಿ:
ಮಳೆಯಿಂದ ಹಾನಿಗೊಳಗಾದ ರಸ್ತೆ ದುರಸ್ತಿಯನ್ನು ಆದ್ಯತೆ ಮೇರೆಗೆ ಕೈಗೊಂಡು ಸಂಚಾರ ಸಂಪರ್ಕ ಸಮರ್ಪಕವಾಗಿರುವಂತೆ ಎಚ್ಚರ ವಹಿಸಬೇಕು. ಭೂಕುಸಿತವಾದಲ್ಲಿ ಕೂಡಲೇ ರಸ್ತೆ ತೆರವುಗೊಳಿಸಬೇಕು
ಸಭೆಯಲ್ಲಿ ಕೈಗೊಂಡ ಪ್ರಮುಖ ತೀರ್ಮಾನಗಳು :
ಕಡಲ ಕೊರೆತ ಆದಲ್ಲಿ ತುರ್ತು ಕಾಮಗಾರಿ ಕೂಡಲೇ ಕೈಗೊಂಡು ಹೆಚ್ಚಿನ ಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸಲು ತಿಳಿಸಬೇಕು.
ಗ್ರಾಮ ಮಟ್ಟದ ಟಾಸ್ಕ್‍ ಫೋರ್ಸ್ ರಚಿಸಿ, ನೇರ ಸಂಪರ್ಕ ಹೊಂದಲು ತಿಳಿಸಲಾಗಿದೆ.
ನಿಯಂತ್ರಣ ಕೊಠಡಿ ಸ್ಥಾಪಿಸಿ, ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು
ಪೊಲೀಸರು ಸೇವೆಗೆ ದಿನದ 24 ಗಂಟೆಯೂ ಲಭ್ಯವಿರಬೇಕು.
ವಿದ್ಯುತ್ ಕಂಬಗಳು ಬಿದ್ದು ಹೋದಲ್ಲಿ ಕೂಡಲೇ ಸರಿಪಡಿಸಿ, ವಿದ್ಯುತ್ ಸರಬರಾಜು ಅಡಚಣೆಯಾಗದಂತೆ ನೋಡಿಕೊಳ್ಳಲು ತಿಳಿಸಲಾಗಿದೆ.
ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ ಸಾಕಷ್ಟು ಅನುದಾನ ಲಭ್ಯವಿದ್ದು, ಪರಿಹಾರ ಕಾರ್ಯಗಳಿಗೆ ಸದ್ಬಳಕೆ ಮಾಡುವಂತೆ ಸೂಚಿಸಲಾಗಿದೆ.
ಮಾರ್ಗಸೂಚಿಯನ್ವಯ ಪರಿಹಾರ ನೀಡಿ. ತೊಡಕುಗಳಿದ್ದಾಗ, ವಿಶೇಷ ಸಂದರ್ಭದಲ್ಲಿ ವಿಪತ್ತು ನಿರ್ವಹಣೆ ವಿಭಾಗದ ಅಧಿಕಾರಿಗಳ ಮಾರ್ಗದರ್ಶನದೊಂದಿಗೆ ಕೆಲಸ ನಿರ್ವಹಿಸುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ  ಸೂಚಿಸಿದ್ದಾರೆ.
ಮುಖ್ಯಾಂಶಗಳು:
13 ಪ್ರವಾಹಪೀಡಿತ ಜಿಲ್ಲೆಗಳು.
17 ತಾಲ್ಲೂಕುಗಳು 37 ಗ್ರಾಮಗಳಲ್ಲಿ ಹೆಚ್ಚು ಹಾನಿ.
ಬಾಧಿತರ ಜನಸಂಖ್ಯೆ 495ಕ್ಕೆ ಏರಿಮೆ
ಪ್ರವಾಹದಿಂದ ರಕ್ಷಿಸಲಾದ ಜನರ ಸಂಖ್ಯೆ 90ಕ್ಕೆ ಏರಿಕೆ
4 ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ.
90 ಜನರು ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿದ್ದಾರೆ.
ಮಳೆಯಿಂದ 12 ಜನರು ಮೃತರಾಗಿದ್ದಾರೆ.
65 ಜಾನುವಾರುಗಳ ಜೀವಹಾನಿಯಾಗಿದೆ.
ಈ ಸಭೆಯಲ್ಲಿ ಸಚಿವರಾದ ಗೋವಿಂದ ಎಂ. ಕಾರಜೋಳ, ವಿ.ಸೋಮಣ್ಣ, ಎಸ್.ಟಿ. ಸೋಮಶೇಖರ್, ಗೋಪಾಲಯ್ಯ, ಸುನಿಲ್ ಕುಮಾರ್, ನಾರಾಯಣಗೌಡ, ಕೋಟ ಶ್ರೀನಿವಾಸ ಪೂಜಾರಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಅಭಿವೃದ್ಧಿ ಆಯುಕ್ತರು ಹಾಗೂ ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.