ರೇಣುಕಸ್ವಾಮಿ ಕೇಸ್‌ : ನ್ಯಾಯಾಲಯಕ್ಕೆ ಇಂದು “ಡಿ-ಗ್ಯಾಂಗ್‌” ಹಾಜರುಪಡಿಸುವ ಸಾಧ್ಯತೆ….!

ಬೆಂಗಳೂರು:

    ಚಿತ್ರದುರ್ಗದ ನಿವಾಸಿ 33 ವರ್ಷದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ದರ್ಶನ್ ಮತ್ತು ಇತರ ಆರೋಪಿಗಳನ್ನು ಪೊಲೀಸರು ಶನಿವಾರವೇ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ಬಂಧಿತ ಆರೋಪಿಗಳ ಆರು ದಿನಗಳ ಪೊಲೀಸ್ ಕಸ್ಟಡಿ ಭಾನುವಾರಕ್ಕೆ ಕೊನೆಗೊಳ್ಳಲಿದೆ.

    ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸುವ ಬಗ್ಗೆ ಇನ್ನೂ ನಿರ್ಧಾರ ತೆಗೆದುಕೊಳ್ಳಬೇಕಾಗಿದೆ ಎಂದು ಮೂಲಗಳು ತಿಳಿಸಿವೆ.

    ನಾಳೆ ಭಾನುವಾರವಾಗಿರುವುದರಿಂದ ನ್ಯಾಯಾಲಯ ಮುಚ್ಚಿರುತ್ತದೆ. ಹೀಗಾಗಿ, ಕೊಲೆ ಪ್ರಕರಣದ ಎಲ್ಲ ಆರೋಪಿಗಳನ್ನು ಮ್ಯಾಜಿಸ್ಟ್ರೇಟ್ ನಿವಾಸಕ್ಕೆ ಹಾಜರುಪಡಿಸಬೇಕಾಗುತ್ತದೆ. ಹೀಗಾಗಿ, ಸದ್ಯ ಪೊಲೀಸ್ ಕಸ್ಟಡಿಯಲ್ಲಿರುವ ನಟ ದರ್ಶನ್, ಅವರ ಗೆಳತಿ ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳನ್ನು ಇಂದೇ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸುವ ಸಾಧ್ಯತೆಯಿದೆ’ ಎಂದು ಮೂಲಗಳು ತಿಳಿಸಿವೆ.

    ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಹಾಗೂ ಅವರ ಆಪ್ತ ಸ್ನೇಹಿತೆ ಪವಿತ್ರಾ ಗೌಡ ಸೇರಿದಂತೆ 13 ಮಂದಿಯನ್ನು ಕಾಮಾಕ್ಷಿಪಾಳ್ಯ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಸಂತ್ರಸ್ತ ಪವಿತ್ರಾ ಗೌಡ ಅವರಿಗೆ ಸಾಮಾಜಿಕ ಮಾಧ್ಯಮದಲ್ಲಿ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದರಿಂದ ಮತ್ತು ಆಕ್ಷೇಪಾರ್ಹ ಕಾಮೆಂಟ್‌ಗಳನ್ನು ಪೋಸ್ಟ್ ಮಾಡಿದ್ದರಿಂದಲೇ ಕೊಲೆ ನಡೆದಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. 

    ಇನ್ನೂ ಮೂವರು ಶಂಕಿತ ಆರೋಪಿಗಳಾದ ರವಿ, ಜಗದೀಶ್ ಮತ್ತು ಅನುಕುಮಾರ್ ಚಿತ್ರದುರ್ಗದಲ್ಲಿ ಪೊಲೀಸರ ಮುಂದೆ ಶರಣಾಗಿದ್ದಾರೆ.

    ಸ್ಥಳ ಮಹಜರು, ವಿಚಾರಣೆ ಮತ್ತು ಸಾಕ್ಷ್ಯಾಧಾರಗಳನ್ನು ಕಲೆ ಹಾಕುವುದು ಸೇರಿದಂತೆ ಹೆಚ್ಚಿನ ತನಿಖಾ ಪ್ರಕ್ರಿಯೆಗಳು ಬಹುತೇಕ ಪೂರ್ಣಗೊಂಡಿದ್ದು, ಒಂದು ದಿನ ಮೊದಲೇ ನ್ಯಾಯಾಲಯಕ್ಕೆ ಹಾಜರುಪಡಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎಂದು ತನಿಖೆಗೆ ಹತ್ತಿರವಿರುವ ಮತ್ತೊಂದು ಪೊಲೀಸ್ ಮೂಲ ತಿಳಿಸಿದೆ. 

    ಸಂತ್ರಸ್ತನ ಮೇಲೆ ಹಲ್ಲೆ ಮಾಡಲು ಬಳಸಿದ ವಸ್ತುಗಳು, ಸಿಸಿಟಿವಿ ದೃಶ್ಯಾವಳಿಗಳು, ಅಪರಾಧದಲ್ಲಿ ಬಳಸಿದ ವಾಹನಗಳು ಮತ್ತು ಇತರ ವಸ್ತುಗಳನ್ನು ತನಿಖಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap