ಬೆಂಗಳೂರು:
‘ಅನ್ನಭಾಗ್ಯ’ ಯೋಜನೆಯಡಿ ಬಡಕುಟುಂಬದ ಪ್ರತಿ ವ್ಯಕ್ತಿಗೆ ತಲಾ 5 ಕೆ.ಜಿ ಅಕ್ಕಿ ಹಾಗೂ ತಲಾ 170 ರೂ. ನಗದು ವರ್ಗಾವಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಚಾಲನೆ ನೀಡಿದ್ದಾರೆ.
ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ‘ಅನ್ನಭಾಗ್ಯ’ ಯೋಜನೆಯಡಿ 170 ರೂಪಾಯಿ ನಗದು ವರ್ಗಾವಣೆಗೆ ಚಾಲನೆ ನೀಡಿದರು. ನಗದು ವರ್ಗಾವಣೆಗೆ ಚಾಲನೆ ನೀಡಿ ಮಾತನಾಡಿದ ಸಿಎಂ, ನಮ್ಮ 5 ಗ್ಯಾರಂಟಿಗಳಲ್ಲಿ ಪ್ರಮುಖವಾದದ್ದು ಅನ್ನಭಾಗ್ಯ ಯೋಜನೆ.
ದೇಶದಲ್ಲಿ ಆಹಾರ ಭದ್ರತೆ ಕಾಯ್ದೆ ಜಾರಿಗೆ ತಂದಿದ್ದು ಯುಪಿಎ ಸರ್ಕಾರ. ಮನಮೋಹನ್ ಸಿಂಗ್ ನೇತೃತ್ವದ ಸರ್ಕಾರ ಈ ಕಾಯ್ದೆ ಜಾರಿಗೆ ತಂದಿದ್ದು. ರಾಜ್ಯದ 4.42 ಕೋಟಿ ಜನರಿಗೆ ಉಚಿತವಾಗಿ ಅಕ್ಕಿ ಕೊಡುತ್ತಿದ್ದೇವೆ. ಮೊದಲ ಸಂಪುಟದಲ್ಲೇ 5 ಗ್ಯಾರಂಟಿ ಜಾರಿಗೆ ತೀರ್ಮಾನ ಮಾಡಿದ್ದೆವು ಎಂದರು.
ಮುಂದಿನ 15 ದಿನಗಳಲ್ಲಿ 1.28 ಕೋಟಿ ಪಡಿತರ ಕುಟುಂಬಗಳಿಗೆ ನೇರವಾಗಿ ನಗದು ವರ್ಗಾವಣೆ ಆಗಲಿದೆ. ಈ ಯೋಜನೆಗ ಅನುಷ್ಠಾನಕ್ಕಾಗಿ ಪ್ರಸ್ತುತ ಬಜೆಟ್‌ನಲ್ಲಿ 10 ಸಾವಿರ ಕೋಟಿ ಹಣ ನಿಗದಿ ಮಾಡಲಾಗಿದೆ.