ಅರಣ್ಯ ಭೂಮಿ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಿ

ದಾವಣಗೆರೆ:

  ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ಬಗರ್‍ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ, ಸಾಗುವಳಿ ಚೀಟಿ ನೀಡಬೇಕೆಂದು ಆಗ್ರಹಿಸಿ, ಕರ್ನಾಟ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಹುಚ್ಚವ್ವನಹಳ್ಳಿ ಮಂಜುನಾಥ್ ಬಣ)ಯ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ನಗರದ ಜಯದೇವ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಎಸಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ್, ದಾವಣಗೆರೆ, ಚನ್ನಗಿರಿ ತಾಲ್ಲೂಕುಗಳ ಗ್ರಾಮಗಳಾದ ಗುಡಾಳು, ಗುಮ್ಮನೂರು, ಹುಚ್ಚವ್ವನಹಳ್ಳಿ, ಆಲೂರು, ಗಿರಿಯಾಪುರ, ದಾಗಿನಕಟ್ಟೆ, ಯಲೋದಹಳ್ಳಿ, ಜಿ.ಬಿ.ಹಳ್ಳಿ, ಕಂಚಗಾರನಹಳ್ಳಿ ಗ್ರಾಮಗಳಲ್ಲಿ ನೂರಾರು ಎಕರೆ ಪ್ರದೇಶದಲ್ಲಿ ಅರಣ್ಯಭೂಮಿಯಲ್ಲಿ ಸಾಗುವಳಿ ಮಾಡಿಕೊಂಡು ನೂರಾರು ಕುಟುಂಬಗಳು ಜೀವನ ನಡೆಸುತ್ತಿವೆ. ಈ ಸಾಗುವಳಿದಾರರು ಈಗಾಗಲೇ ಉಪಸಮಿತಿಗೆ ನಾಲ್ಕು ವರ್ಷಗಳಿಂದಲೇ ಅರ್ಜಿ ಸಲ್ಲಿಸಿದ್ದಾರೆ. ಆದರೆ ಅರ್ಜಿ ಬಂದಿಲ್ಲವೆಂದು ಅರಣ್ಯ ಇಲಾಖೆ ಅಧಿಕಾರಿಗಳು ಹೇಳುತ್ತಿದ್ದಾರೆ ಎಂದು ಆರೋಪಿಸಿದರು.

  ರೈತರ ಜಮೀನುಗಳು ಅರಣ್ಯ ಇಲಾಖೆಗೆ ಸೇರಿಲ್ಲ ಎಂಬುದನ್ನು ಸೇರಿಸಿ, ಈ ನೂರಾರೂ ರೈತರನ್ನು ಅರಣ್ಯ ಭೂಮಿಯಿಂದ ಒಕ್ಕಲೆಬ್ಬಿಸಲು ಅರಣ್ಯ ಇಲಾಖೆ ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ. ಜಿಲ್ಲಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಹಲವಾರು ಬಾರಿ ಸೂಚನೆ ನೀಡಿದರು ಸಹ ಅರಣ್ಯ ಇಲಾಖೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ, ಇದರಿಂದಾಗಿ ರೈತರು ಅತಂತ್ರ ಸ್ಥಿತಿ ತಲುಪಿದ್ದಾರೆ ಎಂದು ಅಸಮಧಾನ ವ್ಯಕ್ತಪಡಿಸಿದರು.
ತಕ್ಷಣವೇ ಸಂಬಂದಪಟ್ಟ ಅಧಿಕಾರಿಗಳು ಅರಣ್ಯ ಭೂಮಿ ಸಾಗುವಳಿದಾರರಿಗೆ ಹಕ್ಕುಪತ್ರ, ಸಾಗುವಳಿ ಚೀಟಿ ನೀಡಬೇಕು. ಇಲ್ಲದಿದ್ದರೆ, ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳಿಸುವುದಾಗಿ ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಅರಸನಾಳು ಸಿದ್ದಪ್ಪ, ಪ್ರಧಾನ ಕಾರ್ಯದರ್ಶಿ ಗುಮ್ಮನೂರು ಬಸವರಾಜ್, ಆಲೂರು ಪರಶುರಾಮ್, ರವಿಕುಮಾರ್, ಚಿರಂಜೀವಿ, ಪ್ರಕಾಶ್, ಉಮೇಶ್, ಹುಚ್ಚನಹಳ್ಳಿ ಪ್ರಕಾಶ್, ದುರುಗಪ್ಪ, ಶಶಿನಾಯ್ಕ, ಕೆಂಚಪ್ಪ, ನಾಗಪ್ಪ, ಹನುಮಂತಪ್ಪ ಮತ್ತಿತರರು ಪಾಲ್ಗೊಂಡಿದ್ದರು.

Recent Articles

spot_img

Related Stories

Share via
Copy link