ಆಧುನಿಕ ಕೃಷಿ ಪದ್ದತಿಗಳನ್ನು ಅಳವಡಿಸಿಕೊಳ್ಳಲು ರೈತರಿಗೆ ಕರೆ :ಕೃಷಿ ವಿಜ್ಞಾನಿ ದೇಸಾಯಿ

ಗುಬ್ಬಿ: 
     ಕೃಷಿ ಅಭ್ಯುದಯಕ್ಕೆ ಪೂರಕವಾದ ಹೊಸ ಆವಿಷ್ಕಾರಗಳನ್ನು ಕೃಷಿ ಇಲಾಖೆಯಿಂದ ರೂಪಿಸಲಾಗುತ್ತಿದ್ದು ರೈತರು ಆಧುನಿಕ ಕೃಷಿ ಪದ್ದತಿಯನ್ನು ಅಳವಡಿಸಿಕೊಂಡು ಉತ್ತಮ ಗುಣಮಟ್ಟದ ಬೆಳೆಗಳನ್ನು ಬೆಳೆಯುವುದರ ಜೊತೆಗೆ ಆರ್ಥಿಕವಾಗಿ ಪ್ರಗತಿ ಹೊಂದುವಂತೆ ಕೃಷಿ ವಿಜ್ಞಾನಿ ದೇಸಾಯಿ ಕರೆ ನೀಡಿದರು.

   ಪಟ್ಟಣದ ಕೃಷಿ ಕಚೇರಿ ಆವರಣದಲ್ಲಿ ಕೃಷಿ ಇಲಾಖೆ, ಕೃಷಿ ವಿಜ್ಞಾನ ಕೇಂದ್ರ, ತಾಲ್ಲೂಕು ಪಂಚಾಯ್ತಿ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಏರ್ಪಡಿಸಿದ್ದ ಕೃಷಿ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಹಜ ಮತ್ತು ಸಾವಯುವ ಕೃಷಿ ಮಾಡುವುದರಿಂದ ಸಾಕಷ್ಟು ಉತ್ತಮ ಪೌಷ್ಟಿಕಾಂಶದ ಆಹಾರ ಪಡೆಯಬಹುದಾಗಿದೆ ಎಂದು ತಿಳಿಸಿದರು.

    ರಾಸಾಯನಿಕ ಗೊಬ್ಬರಗಳಿಗೆ ಹೆಚ್ಚು ಹಣ ಸುರಿಯುವ ಬದಲಿಗೆ ಹಸಿರೆಲೆ ಗೊಬ್ಬರವನ್ನು ತಮ್ಮ ತೋಟ ಹೊಲಗಳಿಗೆ ಬಳಕೆ ಮಾಡುವ ಮೂಲಕ ಕಡಿಮೆ ಖರ್ಚಿನಲ್ಲಿ ಕೃಷಿ ಮಾಡುವಂತಹ ಕೆಲಸಗಳಿಗೆ ನಮ್ಮ ರೈತರು ಮುಂದಾಗಬೇಕಾಗಿದೆ. ಮಣ್ಣಿನಲ್ಲಿ ಪೌಷ್ಟಿಕಾಂಶವನ್ನು ಉಳಿಸಿಕೊಂಡಾಗ ಮಾತ್ರ ಮುಂದಿನ ದಿನದಲ್ಲಿ ಕೃಷಿ ಮತ್ತು ತೋಟದ ಬೆಳೆಗಳನ್ನು ಬೆಳೆಯಲು ಸಾಧ್ಯವಾಗುತ್ತದೆ ಎಂದು ತಿಳಿಸಿದ ಅವರು, ಯಾವುದೇ ಒಂದು ಬೆಳೆ ಬೆಳೆಯಬೇಕು ಎಂದರೆ ಸುಮಾರು ೧೬ ಪೋಷಕಾಂಶಗಳು ಅಗತ್ಯವಾಗಿ ಬೇಕಾಗಿತ್ತು. ಆದರೆ ಈಗ ೧೯ ರಿಂದ ೨೧ ಪೋಷಕಾಂಶಗಳ ಅಗತ್ಯವಿದೆ. ಈ ನಿಟ್ಟಿನಲ್ಲಿ ರೈತರು ಕೃಷಿ ಇಲಾಖೆಯವರು ನೀಡುವ ಮಾಹಿತಿಯನ್ನು ಸರಿಯಾಗಿ ತಿಳಿದುಕೊಂಡು ಅವರ ಮಾರ್ಗದರ್ಶನ ಪಡೆದು ಕೃಷಿ ಮಾಡಿದರೆ ಒಳ್ಳೆಯದು ಎಂದು ತಿಳಿಸಿದರು.

  ಗಾಂಧಿ ಕೃಷಿ ವಿಜ್ಞಾನ ಕೇಂದ್ರದ ನಿವೃತ್ತ ಕೃಷಿ ವಿಜ್ಞಾನಿ ಶಶಿಕಾಂತ್ ಮಾತನಾಡಿ, ರೈತರು ಹಳೆ ಪದ್ದತಿಯಲ್ಲಿ ಬೇಸಾಯ ಮಾಡುವುದರಿಂದ ಉತ್ತಮ ಗುಣಮಟ್ಟದ ಆಹಾರ ಧಾನ್ಯಗಳನ್ನು ಪಡೆಯಲು ಸಾಧ್ಯವಿಲ್ಲ. ಆದ್ದರಿಂದ ಕೃಷಿ ಇಲಾಖೆ ಹೊರತಂದಿರುವ ಆಧುನಿಕ ಕೃಷಿ ವಿಧಾನಗಳನ್ನು ಅಳವಡಿಸಿಕೊಂಡು ಉತ್ತಮ ಪೌಷ್ಟಿಕಾಂಶದ ಮತ್ತು ಅಧಿಕ ಇಳುವರಿ ಕೊಡುವ ಬೆಳೆಗಳನ್ನು ಬೆಳೆಯುವುದರಿಂದ ತಮ್ಮ ಆರ್ಥಿಕ ಗುಣಮಟ್ಟವನ್ನು ಹೆಚ್ಚಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ತಿಳಿಸಿದ ಅವರು, ರೈತರು ಅಧಿಕ ಇಳುವರಿ ಪಡೆಯಲು ಮತ್ತು ಶೀಘ್ರವಾಗಿ ಬೆಳೆ ಬೆಳೆಯಲು ಅತ್ಯಧಿಕ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರಗಳನ್ನು ಬಳಸುತ್ತಿರುವುದರಿಂದ ಭೂಫಲವತ್ತತೆ ಕಡಿಮೆಯಾಗುತ್ತಿದ್ದು ಮುಂದಿನ ದಿನಗಳಲ್ಲಿ ಯಾವುದೇ ಬೆಳೆಯನ್ನು ಬೆಳೆಯಲು ಸಾಧ್ಯವಾಗದಂತಹ ಪರಿಸ್ಥಿತಿ ಉಂಟಾಗಲಿದೆ. ಆದ್ದರಿಂದ ರೈತರು ಸಾವಯವ ಮತ್ತು ಸಹಜ ಕೃಷಿ ಬೇಸಾಯ ಪದ್ದತಿಗಳನ್ನು ಅಳವಡಿಸಿಕೊಳ್ಳುವಂತೆ ತಿಳಿಸಿದರು.

      ಜಿಲ್ಲಾ ಪಂಚಾಯ್ತಿ ಸದಸ್ಯ ಜಿ.ಹೆಚ್.ಜಗನ್ನಾಥ್ ಮಾತನಾಡಿ, ರೈತರು ಉತ್ತಮ ಬೆಳೆಗಳನ್ನು ಬೆಳೆಯಲು ಅನುಕೂಲವಾಗುವಂತೆ ಕೃಷಿ ಇಲಾಖೆ ವತಿಯಿಂದ ರೈತರಿಗೆ ಕೃಷಿ ಅಭಿವೃದ್ಧಿಯ ಬಗ್ಗೆ ಮಾಹಿತಿ ಮಾರ್ಗದರ್ಶನ ನೀಡುವುದರ ಜೊತೆಗೆ ಇಲಾಖೆಯಿಂದ ದೊರೆಯುವ ಎಲ್ಲಾ ರೀತಿಯ ಸೌಲಭ್ಯಗಳನ್ನು ವಿತರಿಸುತ್ತಿದ್ದು ರೈತರು ಇಲಾಖೆಯ ಸೌಲಭ್ಯಗಳನ್ನು ಪಡೆದುಕೊಂಡು ಆರ್ಥಿಕವಾಗಿ ಅಭಿವೃದ್ಧಿ ಹೊಂದುವಂತೆ ತಿಳಿಸಿದರು.

    ಸಹಾಯಕ ಕೃಷಿ ನಿರ್ದೇಶಕ ಕೆಂಪಚೌಡಯ್ಯ ಮಾತನಾಡಿ, ರೈತರ ಅಭ್ಯುದಯಕ್ಕೆ ರಾಜ್ಯ ಸರ್ಕಾರ ಹಲವಾರು ಮಹತ್ವದ ಯೋಜನೆಗಳನ್ನು ಜಾರಿಗೊಳಿಸಿದೆ. ರೈತರು ಇಲಾಖೆಯ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಕೃಷಿ ಅಭಿವೃದ್ಧಿಯನ್ನು ಉತ್ತಮಪಡಿಸಿಕೊಳ್ಳುವಂತೆ ತಿಳಿಸಿದ ಅವರು, ಕಾಲ ಕಾಲಕ್ಕೆ ರೈತರಿಗೆ ಅಗತ್ಯವಿರುವ ಬಿತ್ತನೆ ಬೀಜಗಳು ಮತ್ತು ಕೃಷಿ ಪರಿಕರಗಳನ್ನು ರಿಯಾಯಿತಿ ದರದಲ್ಲಿ ತಾಲ್ಲೂಕಿನ ರೈತ ಸಂಪರ್ಕ ಕೇಂದ್ರಗಳಲ್ಲಿ ವಿತರಿಸುತ್ತಿದ್ದು, ರೈತರು ಅಗತ್ಯ ಸೌಲಭ್ಯಗಳನ್ನು ಪಡೆದುಕೊಂಡು ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದರು.

    ಇದೇ ಸಂದರ್ಭದಲ್ಲಿ ರೈತರಿಗೆ ಅಗತ್ಯವಿರುವ ಹಲವು ಕೃಷಿ ಯಂತ್ರೊಪಕರಣಗಳು ಹಾಗೂ ಕೃಷಿ ವಸ್ತು ಪ್ರದರ್ಶನವನ್ನು ಏರ್ಪಡಿಸಲಾಗಿತ್ತು.
ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯತಿ ಸದಸ್ಯರಾದ ಜಿ.ಕಲ್ಪನ, ಕರೆತಿಮ್ಮಯ್ಯ, ಎಪಿಎಂಸಿ ಅಧ್ಯಕ್ಷ ಜಿ.ಟಿ.ರೇವಣ್ಣ, ಸದಸ್ಯ ವಿ.ವೀರಭದ್ರಯ್ಯ, ಕೃಷಿ ಇಲಾಖೆಯ ಜಿಲ್ಲಾ ನಿರ್ದೇಶಕ ಉಮೇಶ್, ಕೃಷಿಕ ಸಮಾಜದ ಅಧ್ಯಕ್ಷ ಸಿದ್ದರಾಮಣ್ಣ, ಮುಖಂಡರಾದ ಗಂಗಾಧರಪ್ಪ, ನಟರಾಜು, ತೋಟಗಾರಿಕೆ ಇಲಾಖೆ ಅಧಿಕಾರಿ ರಾಜಪ್ಪ, ರೇಷ್ಮೆ ಇಲಾಖೆಯ ಅಧಿಕಾರಿ ರಂಗನಾಥ್, ಕೃಷಿ ಅಧಿಕಾರಿಗಳಾದ ಶಿವಣ್ಣ, ರವಿ, ಗ್ರಾಮ ಪಂಚಾಯ್ತಿ ಅಧ್ಯಕ್ಷ ಬಸವರಾಜು ಸೇರಿದಂತೆ ತಾಲ್ಲೂಕಿನ ವಿವಿಧ ಭಾಗಗಳಿಂದ ಆಗಮಿಸಿದ್ದ ರೈತರು ಭಾಗವಹಿಸಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link