ಚಿತ್ರದುರ್ಗ:
ಇಲ್ಲಿನ ಪ್ರಗತಿಕೃಷ್ಣ ಗ್ರಾಮೀಣಬ್ಯಾಂಕ್ ಪ್ರಾದೇಶಿಕ ಕಛೇರಿಯಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಜಿಲ್ಲಾಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿ.ಸತ್ಯಭಾಮರವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಪ್ರಗತಿಕೃಷ್ಣ ಗ್ರಾಮೀಣ ಬ್ಯಾಂಕ್ ನ ವತಿಯಿಂದ ಮಹಿಳಾ ದಿನಾಚರಣೆ ಆಯೋಜಿಸಿರುವುದು ಸಂತೋಷಕರ ಎಂದರು ಹಾಗೂ ಇಂದು ಮಹಿಳೆಯರು ಶಿಕ್ಷಣ ಸಾಹಿತ್ಯ ಸಂಗೀತ ಕ್ರೀಡೆ ಅಲ್ಲದೇ ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ ಮಾಡುತ್ತಿರುವುದು ಕಂಡುಬಂದಿದೆ ಇನ್ನೂ ಹೆಚ್ಚು ಹೆಚ್ಚು ಮಹಿಳೆಯರು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದರು.
ಬಸವೇಶ್ವರ ವೈದ್ಯಕೀಯ ಕಾಲೇಜಿನ ಡಾ.ವಿ.ಲತಾ ಮಾತನಾಡಿ ಆರೋಗ್ಯವೇ ಭಾಗ್ಯ ಪ್ರತಿಯೊಬ್ಬರೂ ಸಹಾ ತಮ್ಮ ಆರೋಗ್ಯದ ಕಡೆ ಗಮನಹರಿಸಬೇಕು ಆರೋಗ್ಯದಲ್ಲಿ ಏನಾದರೂ ಏರುಪೇರು ಕಂಡುಬಂದಲ್ಲಿ ತಕ್ಷಣ ವೈದ್ಯರ ಸಲಹೆ ಪಡೆಯಬೇಕು ಎಂದರು. ಬಿಎಸ್ಸಿ ಪದವಿಯಲ್ಲಿ ಚಿನ್ನದ ಪದಕ ಪಡೆದ ಬಹುಮುಖ ಪ್ರತಿಭೆ ಎಂ.ಆರ್.ಅಮೃತಲಕ್ಷ್ಮಿಯವರಿಗೆ ಆತ್ಮೀಯವಾಗಿ ಸನ್ಮಾನಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಎಂ.ಆರ್.ಅಮೃತಲಕ್ಷ್ಮಿಯವರು ಪ್ರಗತಿಕೃಷ್ಣ ಗ್ರಾಮೀಣ ಬ್ಯಾಂಕ್ ವತಿಯಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸುತ್ತಿದ್ದು ಈ ಸಂದರ್ಭದಲ್ಲಿ ನನ್ನನ್ನು ಗುರುತಿಸಿ ಸನ್ಮಾನಿಸುತ್ತಿರುವುದು ಸಂತೋಷ ತಂದಿದೆ ಎಂದರು ಅಲ್ಲದೇ ಶಿಕ್ಷಣವೇ ಶಕ್ತಿ ವಿದ್ಯಾರ್ಥಿಗಳು ಚೆನ್ನಾಗಿ ಓದಬೇಕು ಹಾಗೂ ಪೋಷಕರು ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ಸಹಕಾರ ನೀಡಬೇಕು ಎಂದರು.
ಪ್ರಗತಿಕೃಷ್ಣ ಗ್ರಾಮೀಣ ಬ್ಯಾಂಕ್‍ನ ಪ್ರಾದೇಶಿಕ ಕಛೇರಿಯ ಸಹಾಯಕ ಮಹಾ ಪ್ರಬಂಧಕರಾದ ಜಿ.ಆರ್.ಮಂಜುನಾಥ್ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಬ್ಯಾಂಕ್ ನ ವತಿಯಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸುತ್ತಿರುವುದು ಹಾಗೂ ಪ್ರತಿಭಾವಂತ ವಿದ್ಯಾರ್ಥಿನಿ ಎಂ.ಆರ್.ಅಮೃತಲಕ್ಷ್ಮಿಯವರಿಗೆ ಸನ್ಮಾನಿಸಲು ಸಂತೋಷವಾಗುತ್ತಿದೆ ಎಂದರು. ನಬಾರ್ಡ್ ಡಿ.ಡಿ.ಎಂ ರವರಾದ ಮಾಲಿನಿ ಸುವರ್ಣ, ಸರ್ಕಾರಿ ಮಹಿಳಾ ಕಾಲೇಜಿನ ಪ್ರಾಧ್ಯಾಪಕಿ ಪ್ರೊ.ತಾರಿಣಿ ಶುಭದಾಯಿನಿ ಮಾತನಾಡಿದರು. ಸರ್ಕಾರಿ ವಿಜ್ಞಾನ ಕಾಲೇಜಿನ ಪ್ರಾಧ್ಯಾಪಕರಾದ ಡಾ.ಎನ್.ಬಿ.ಗಟ್ಟಿ ಮತ್ತು ಜಿಲ್ಲೆಯ ಪ್ರಗತಿಕೃಷ್ಣ ಗ್ರಾಮೀಣ ಬ್ಯಾಂಕ್ ನ ಅಧಿಕಾರಿವರ್ಗದವರು ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
