ದಾವಣಗೆರೆ
ನಗರದ ಎ.ಆರ್.ಜಿ. ಕಲಾ ಮತ್ತು ವಾಣಿಜ್ಯ ಕಾಲೇಜಿನ ಸ್ನಾತಕೋತ್ತರ ಕೇಂದ್ರದಲ್ಲಿ ಎಂ.ಕಾಂ ವಿದ್ಯಾರ್ಥಿಗಳಿಗೆ ಮಾ.26 ರಂದು ಮತದಾನ ಜಾಗೃತಿ ಅಭಿಯಾನದ ಅಂಗವಾಗಿ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಪ್ರೊ ಮಲ್ಲಿಕಾರ್ಜುನ ಆರ್. ಹಲಸಂಗಿಯವರು ವಿದ್ಯಾರ್ಥಿಗಳಿಗೆ ಸಂವಿಧಾನಿಕ ವ್ಯವಸ್ಥೆಯಲ್ಲಿ ಮತದಾನದ ಮಹತ್ವವನ್ನು ವಿವರಿಸಿ, ಬಲಿಷ್ಠ ರಾಷ್ಟ್ರದ ನಿರ್ಮಾಣಕ್ಕಾಗಿ ಯುವಕರು ಅತಿ ಹೆಚ್ಚು ಸಂಖ್ಯೆಯಲ್ಲಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ ಹಾಗೂ ತಮ್ಮ ನೆರೆಹೊರೆಯವರನ್ನು ಈ ಪ್ರಕ್ರಿಯೆಯಲ್ಲಿ ಭಾಗವಹಿಸಲು ಪ್ರೇರೆಪಿಸಬೇಕೆಂದು ಕರೆ ಕೊಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ನಾತಕೋತ್ತರ ಕೇಂದ್ರದ ಸಂಯೋಜಕರಾದ ಪ್ರೊ. ಕೆ.ಎಸ್. ಬಸವರಾಜಪ್ಪ ಇವರು ಸ್ವೀಪ್ ಕಾರ್ಯಕ್ರಮದ ಯಶಸ್ಸು ದೇಶದ ಯಶಸ್ಸು. ದೇಶದ ಉನ್ನತಿಗಾಗಿ ಪ್ರಜೆಗಳಾದ ನಾವು ಕಡ್ಡಾಯವಾಗಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ ನಮ್ಮ ಹಕ್ಕು ಮತ್ತು ಕರ್ತವ್ಯವನ್ನು ನಿರ್ವಹಿಸಬೇಕೆಂದು ಕರೆ ನೀಡಿದರು.
ಪ್ರಾಮಾಣಿಕ ಮತದಾನ ಕುರಿತಾಗಿ ಕಾಲೇಜಿನ ನೋಡಲ್ ಅಧಿಕಾರಿಯಾದ ಡಾ. ಜೆ.ಕೆ. ಮಲ್ಲಿಕಾರ್ಜುನಪ್ಪನವರು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ದೇಶದ ಯುವಕರು ಸಂಪೂರ್ಣ ಸಂಖ್ಯೆಯಲ್ಲಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವುದಲ್ಲದೇ ತಮ್ಮ ಸುತ್ತಮುತ್ತಲಿನ ಮತದಾರರು ಕಡ್ಡಾಯವಾಗಿ ಮತದಾನ ಮಾಡುವಂತೆ ಪ್ರೇರೇಪಿಸುವುದು ಅವಶ್ಯ ಎಂದರು. ಸ್ನಾತಕೋತ್ತರ ಕೇಂದ್ರದ ಪ್ರಾಧ್ಯಾಪಕರುಗಳಾದ ಪ್ರೊ ಅನಿತಾಕುಮಾರಿ, ಪ್ರೊ ಲೋಕೇಶ್ ರೆಡ್ಡಿ ಒಳಗೊಂಡಂತೆ ಈ ಸಂದರ್ಭದಲ್ಲಿ ಎಲ್ಲಾ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಹಾಜರಿದ್ದರು. ಕಾಲೇಜಿನ ಕಾರ್ಯಕ್ರಮದ ಕ್ಯಾಂಪಸ್ ರಾಯಬಾರಿಗಳಾದ ಟಿ. ಷಣ್ಮುಖ ಮತ್ತು ತೋರಣಕುಮಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರೆಂದು ಪ್ರಕಟಣೆ ತಿಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
