ರಾಜ್ಯದಲ್ಲಿ ಇನ್ನೂ ಐದು ದಿನಗಳು ಭಾರೀ ಮಳೆ ಸಾಧ್ಯತೆ
ರಕ್ಷಣಾ ಹಾಗೂ ಪರಿಹಾರ ಕಾರ್ಯಕ್ಕೆ ಸೂಚನೆ: ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು : ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಂಗಳವಾರ ಭಾರಿ ಮಳೆಯಾಗಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವರುಣನ ಆರ್ಭಟ ಜೋರಾಗಿದ್ದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಮಧ್ಯಕರ್ನಾಟಕದ ದಾವಣಗೆರೆ ಹಾಗೂ ಉತ್ತರ ಕರ್ನಾಟಕದ ಧಾರವಾಡ, ಹಾವೇರಿ, ಗದಗ, ಬೆಳಗಾವಿ, ಬಳ್ಳಾರಿ, ಕೊಪ್ಪಳ ಜಿಲ್ಲೆಗಳಲ್ಲಿ ಮಳೆಯಾಗಿದ್ದು, ರಾಜ್ಯದ ಉಳಿದೆಡೆ ತುಂತುರು ಮಳೆ ಹಾಗೂ ಮೋಡ ಕವಿದ ವಾತಾವರಣವಿದೆ.
ತತ್ತರಿಸಿದ ಕರಾವಳಿ, ಮಲೆನಾಡು:
ಮಳೆಗೆ ಕರಾವಳಿ ಹಾಗೂ ಮಲೆನಾಡು ತತ್ತರಿಸಿದೆ, ತಗ್ಗು ಪ್ರದೇಶದ ಶಾಲಾ ಕಾಲೇಜು, ಮನೆಗಳು ಜಲಾವೃತಗೊಂಡಿದೆ. ರಸ್ತೆಗೆ ಗುಡ್ಡ ಕುಸಿದು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಮುಡಿಪು- ವಿಟ್ಲದ ನಡುವೆ ಕುಡ್ತಮುಗೇರು ಎಂಬಲ್ಲಿ ರಸ್ತೆ ಮೇಲೆ ಪ್ರವಾಹದ ನೀರು ನುಗ್ಗಿ ಸಂಚಾರ ಅಸ್ತವ್ಯಸ್ತವಾಗಿದೆ.
ತಗ್ಗು ಪ್ರದೇಶದಲ್ಲಿದ್ದ 20ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿ ಹಾನಿಯಾಗಿದೆ. ಉಡುಪಿ ನಗರದಲ್ಲೂ 30ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಮಡಿಕೇರಿ – ಭಾಗಮಂಡಲ ರಸ್ತೆ ಮೇಲೆ ನೀರು ಹರಿಯುತ್ತಿದೆ. ಇದರಿಂದ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದ್ದು, ಬೋಟ್‍ನ ಸಹಾಯದ ಮೂಲಕ ಸಾರ್ವಜನಿಕರನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕರಾವಳಿಯ ಐದು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ:
ಮಳೆ ಆರ್ಭಟ ತೀವ್ರವಾಗಿರುವುದರಿಂದ ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಶಾಲೆಗಳಿಗೆ ಬುಧವಾರ ರಜೆ ಘೋಷಿಸಲಾಗಿದೆ.
ಭಾರಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ರಕ್ಷಣಾ ಹಾಗೂ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ, ಕರಾವಳಿ ಮತ್ತು ಕೊಡಗು ಭಾಗಗಳಲ್ಲಿ ಮನೆಗಳಿಗೆ ಹಾನಿಯುಂಟಾಗಿರುವುದರಿಂದ ಎಸ್.ಡಿ.ಆರ್.ಎಫ್ ಮತ್ತು ಎನ್.ಡಿ.ಆರ್.ಎಫ್ ತಂಡವನ್ನು ನಿಯೋಜಿಸಿ ರಕ್ಷಣಾ ಕಾರ್ಯವನ್ನು ಮೊದಲು ಆದ್ಯತೆಯ ಮೇಲೆ ಕೈಗೊಳ್ಳಬೇಕು. ರಕ್ಷಣಾ ಕಾರ್ಯದ ನಂತರ ಪರಿಹಾರ ಕಾರ್ಯ ನಡೆಯಲಿದೆ ಎಂದರು.
-ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ