ದಾವಣಗೆರೆ:
ಮರಳು ಮಾಫಿಯಾಕ್ಕೆ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಬಲಿಯಾಗಿರುವುದನ್ನು ಖಂಡಿಸಿ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಕಾರ್ಯಕರ್ತರು ಸೋಮವಾರ ನಗರದ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾಕಾರರು, ಕಳೆದ ಡಿ.22ರಂದು ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಚೀಕಲಪರ್ವಿ ಗ್ರಾಮ ಲೆಕ್ಕಾಧಿಕಾರಿ ಸಾಹೇಬ್ ಪಟೇಲ್ ಎಂಬುವರು ಕರ್ತವ್ಯ ನಿರತರಾಗಿದ್ದ ಸಂದರ್ಭದಲ್ಲಿ ಅಕ್ರಮ ಮರಳು ತುಂಬಿದ ಟಿಪ್ಪರ್ ಚಲಾಯಿಸಿ ಕೊಲೆ ಮಾಡಲಾಗಿದೆ. ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಮೃತರ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕೆಂದು ಪ್ರತಿಭಟನಾನಿರತರು ಒತ್ತಾಯಿಸಿದರು.
ಮೃತ ಸಾಹೇಬ್ ಪಟೇಲ್ ಕುಟುಂಬಕ್ಕೆ ತಕ್ಷಣವೇ ಸರ್ಕಾರದಿಂದ 50 ಲಕ್ಷ ರೂ. ಪರಿಹಾರದ ಜೊತೆಗೆ ಪಿಂಚಣಿಯ ಪೂರ್ಣ ವೇತನ ನೀಡಬೇಕು. ಮಕ್ಕಳ ವಿದ್ಯಾಭ್ಯಾಸದ ಸಂಪೂರ್ಣ ಜವಾಬ್ದಾರಿಯನ್ನು ಸರ್ಕಾರವೇ ವಹಿಸಬೇಕು. ತಪ್ಪಿತಸ್ಥರ ವಿರುದ್ಧ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು. ಜೀವಕ್ಕೆ ಭದ್ರತೆ ಇಲ್ಲದ ಕೆಲಸಗಳಿಗೆ ಗ್ರಾಮ ಲೆಕ್ಕಾಧಿಕಾರಿಗಳನ್ನು ನಿಯೋಜಿಸಬಾರದು. ಸರ್ಕಾರ ಬೇಡಿಕೆಗಳಿಗೆ ಸ್ಪಂದಿಸದಿದ್ದಲ್ಲಿ ರಾಜ್ಯಾದ್ಯಂತ ಕೆಲಸ ಸ್ಥಗಿತಗೊಳಿಸಿ, ಅನಿರ್ಧಿಷ್ಟಾವಧಿ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಅವರು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಹಾಲೇಶಪ್ಪ, ಗ್ರಾಮ ಲೆಕ್ಕಾಧಿಕಾರಿ ಸಂಘದ ಕುಬೇರ ನಾಯ್ಕ, ಮಂಜುನಾಥ್ ಮತ್ತಿತರರು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








