ಜಿಲ್ಲಾಮಟ್ಟದ ಸಮನ್ವಯ ಸಮಿತಿ ಮತ್ತು ಪರಿಶೀಲನಾ ಸಮಿತಿ ಸಭೆ

ಬಳ್ಳಾರಿ:

  ಕೌಟುಂಬಿಕ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ತಾತ್ಕಾಲಿಕ ಆಶ್ರಯ ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿರುವ ಎಲ್ಲ ತಾಲೂಕು ಕೇಂದ್ರಗಳಲ್ಲಿ ತಾತ್ಕಾಲಿಕ ಪುನರ್‍ವಸತಿ ಕೇಂದ್ರಗಳನ್ನು ತೆರೆಯುವುದಕ್ಕೆ ಅಗತ್ಯ ಕ್ರಮಕೈಗೊಳ್ಳಬೇಕು. ಸಾಧ್ಯವಾದರೇ ಇದಕ್ಕೆ ಡಿಎಂಎಫ್ ಹಣ ಬಳಸಿಕೊಳ್ಳುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಸ್.ಬಿ.ಹಂದ್ರಾಳ್ ಅವರು ಸೂಚನೆ ನೀಡಿದರು.
ನಗರದ ಜಿಪಂ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ 2018-19ನೇ ಸಾಲಿನ 2ನೇ ತ್ರೈಮಾಸಿಕ ಜಿಲ್ಲಾಮಟ್ಟದ ಮಾನವ ಅಕ್ರಮ ಸಾಗಾಣಿಕೆ ತಡೆ ಕುರಿತ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಮತ್ತು ಪರಿಶೀಲನಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.
ಕೌಟುಂಬಿಕ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ತಾತ್ಕಾಲಿಕ ಆಶ್ರಯ ನೀಡುವುದು ಹಾಗೂ ಅಗತ್ಯವಿದ್ದಲ್ಲಿ ಪೊಲೀಸರಿಂದ ರಕ್ಷಣೆ ಹಾಗೂ ವೈದ್ಯಕೀಯ ಚಿಕಿತ್ಸೆಯನ್ನು ಸಮರ್ಪಕವಾಗಿ ಒದಗಿಸಬೇಕು. ನೊಂದ ಮಹಿಳೆಯರಿಗೆ ಉಚಿತ ಕಾನೂನು ನೆರವನ್ನು ನಮ್ಮ ಕಾನೂನು ಸೇವಾ ಪ್ರಾಧಿಕಾರ ಒದಗಿಸಲಿದೆ ಎಂದರು.

  2017-18ನೇ ಸಾಲಿನಲ್ಲಿ ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಕಾಯ್ದೆ ಅಡಿ 194 ಪ್ರಕರಣಗಳು ದಾಖಲಾಗಿವೆ. ಸಮಾಲೋಚನೆಯಿಂದ 180 ಪ್ರಕರಣಗಳು ಇತ್ಯರ್ಥಗೊಳಿಸಲಾಗಿದೆ. 14 ಪ್ರಕರಣಗಳು ನ್ಯಾಯಾಲಯದಲ್ಲಿ ಬಾಕಿ ಇವೆ. 2018-19ನೇ ಸಾಲಿನಡಿ 70 ಪ್ರಕರಣಗಳು ದಾಖಲಾಗಿದ್ದು, 61 ಪ್ರಕರಣಗಳನ್ನು ಸಮಾಲೋಚನೆ ಮೂಲಕ ಇತ್ಯರ್ಥಪಡಿಸಲಾಗಿದೆ. ನ್ಯಾಯಾಲಯದಲ್ಲಿ 06 ಮತ್ತು 3 ಪ್ರಕರಣಗಳು ಸಂರಕ್ಷಣಾಧಿಕಾರಿಗಳಲ್ಲಿ ಬಾಕಿ ಇವೆ ಎಂದು ಸಭೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ಉಷಾ ತಿಳಿಸಿದರು.
*ತಾಲೂಕುಮಟ್ಟದಲ್ಲಿ ಗೆಳತಿ ವಿಶೇಷ ಚಿಕಿತ್ಸಾ ಘಟಕ ಕ್ರಮಕೈಗೊಳ್ಳಿ: ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಒಂದೇ ಸೂರಿನಡಿ ಸಮಗ್ರ ಸೌಲಭ್ಯ ಒದಗಿಸುವ ಮಹಿಳಾ ವಿಶೇಷ ಚಿಕಿತ್ಸಾ ಘಟಕ ಗೆಳತಿ ವಿಶೇಷ ಚಿಕಿತ್ಸಾ ಘಟಕ ಈಗಾಗಲೇ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಅದರಂತೆ ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಲ್ಲಿ ಈ ಘಟಕ ಆರಂಭಿಸುವ ನಿಟ್ಟಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ನ್ಯಾ.ಹಂದ್ರಾಳ್ ಅವರು ಹೇಳಿದರು.
ತಾಲೂಕುಮಟ್ಟದಲ್ಲಿ ಗೆಳತಿ ಚಿಕಿತ್ಸಾ ವಿಶೇಷ ಘಟಕಕ್ಕೆ ಅಗತ್ಯ ಸೌಲಭ್ಯಗಳು ಕಲ್ಪಿಸುವ ನಿಟ್ಟಿನಲ್ಲಿ ಕೆಲ ಸಮಸ್ಯೆಗಳು ಇರುವುದು ನಮ್ಮ ಗಮನಕ್ಕೆ ಬಂದಿದ್ದು,ಅವುಗಳೆಲ್ಲವುಗಳನ್ನು ನಿವಾರಿಸಿಕೊಂಡು ಈ ಘಟಕ ಪರಿಣಾಮಕಾರಿಯಾಗಿ ನಿರ್ವಹಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಮುಂದಾಗಬೇಕು ಎಂದರು.

  ‘ಗೆಳತಿ’ಗೆ ಸಂಬಂಧಿಸಿದ ಸಮಸ್ಯೆಗಳನ್ನು ಪಟ್ಟಿ ಮಾಡಿ ನಮಗೆ ನೀಡಿ; ಅವುಗಳನ್ನು ಬಗೆಹರಿಸಲು ಯತ್ನಿಸಲಾಗುವುದು ಎಂದು ಹೇಳಿದ ಅವರು, ಈ ಚಿಕಿತ್ಸಾ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಒಂದು ದಿನದ ಕಾರ್ಯಾಗಾರ ಏರ್ಪಡಿಸುವಂತೆ ಅವರು ಸೂಚಿಸಿದರು.
*ಜನ್ಮದಿನಾಂಕ ಪ್ರಮಾಣಪತ್ರ ಪಡೆದು ಮದುವೆ ಕಾರ್ಡ್ ಮುದ್ರಿಸಿ: ಮದುವೆ ಸಂದರ್ಭದಲ್ಲಿ ಹುಡುಗ-ಹುಡುಗಿಯರ ಜನ್ಮದಿನಾಂಕದ ಪ್ರಮಾಣಪತ್ರ ಪಡೆದುಕೊಂಡು ಮದುವೆ ಆಮಂತ್ರಣ ಪತ್ರಿಕೆಯನ್ನು ಮುದ್ರಿಸುವ ನಿಟ್ಟಿನಲ್ಲಿ ಅಗತ್ಯ ಸೂಚನೆಗಳನ್ನು ಪ್ರಿಂಟಿಂಗ್ ಪ್ರೆಸ್ ಮಾಲೀಕರಿಗೆ ನೀಡುವಂತೆ ತಿಳಿಸಿದ ಹಂದ್ರಾಳ್ ಅವರು, ಕಾರ್ಡ್ ಕೆಳಗೆ ಪ್ರೀಂಟಿಂಗ್ ಪ್ರೆಸ್ ಹೆಸರು ಇರಬೇಕು ಎಂದರು.
ಸಾಮೂಹಿಕ ವಿವಾಹಗಳು ನಡೆಯುವ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ನಿಯಮಗಳನ್ನು ಸಮರ್ಪಕವಾಗಿ ಪಾಲಿಸುವಂತೆ ಅವರು ತಿಳಿಸಿದರು.
ಮಹಿಳೆಯರು ಮತ್ತು ಮಕ್ಕಳ ಸಾಗಾಣಿಕೆ, ಗ್ರಾಪಂ ಮಟ್ಟದಲ್ಲಿ ಕಾವಲು ಸಮಿತಿ ಸಭೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಸಭೆಯಲ್ಲಿ ಸುಧೀರ್ಘವಾಗಿ ಚರ್ಚಿಸಲಾಯಿತು.
ಸಭೆಯಲ್ಲಿ ಜಿಪಂ ಉಪಕಾರ್ಯದರ್ಶಿ ಮುಕ್ಕಣ್ಣ, ಡಿವೈಎಸ್ಪಿ ಸುರೇಶ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

Recent Articles

spot_img

Related Stories

Share via
Copy link