ಜಿಲ್ಲಾ ಬಿಜೆಪಿ ಘಟಕದಿಂದ ರಾಜ್ಯಪಾಲರಿಗೆ ಮನವಿ

ಹಾವೇರಿ :

        ರಾಜ್ಯದಲ್ಲಿನ ಸಮ್ಮಿಶ್ರ ಸರ್ಕಾರ ಮಾಧ್ಯಮವೂ ಸೇರಿದಂತೆ ರಾಜ್ಯದ ರಾಜಕೀಯ ಎದುರಾಳಿಗಳನ್ನು ಹತ್ತಿಕ್ಕಲು ಸೇಡಿನ ಕ್ರಮಗಳನ್ನು ಕೈಗೊಳ್ಳುತ್ತಿರುವ ಧೋರಣೆಯನ್ನು ಖಂಡಿಸಿ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಧರಣಿನಿರತ ಬಿಜೆಪಿ ಜಿಲ್ಲಾ ಘಟಕ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

         ಪ್ರಧಾನಿ ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವಂತೆ ಕರೆ ನೀಡಿದ ಮಾಜಿ ಶಾಸಕರಾದ ಬೇಳೂರು ಗೋಪಾಲಕೃಷ್ಣ ಅವರ ವಿರುದ್ಧ ಬಿಜೆಪಿ ದೂರು ನೀಡಿದ್ದರೂ ಈವರೆಗೂ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ.ಜೆಡಿಎಸ್ ಶಾಸಕರಾದ ನಾರಾಯಣಗೌಡ ಅವರು ಜನಪ್ರಿಯ ನಟರಾದ ಯಶ್ ಮತ್ತು ದರ್ಶನ್ ಅವರಿಗೆ ನೇರವಾಗಿ ಬೆದರಿಕೆ ಹಾಕಿದ್ದರು. ಈ ಎರಡೂ ಪ್ರಕರಣಗಳಲ್ಲಿ ಜನರ ನಡುವೆ ದ್ವೇಷದ ವಾತಾವರಣ ಮೂಡಿಸಿ ಸಾಮಾಜಿಕ ಸಾಮರಸ್ಯ ಕೆಡಿಸುವಂತಹ ಗಂಭೀರ ಅಪಾಯವಿದ್ದರೂ ಈ ಬಗ್ಗೆ ಕ್ರಮ ಕೈಗೊಳ್ಳದ ರಾಜ್ಯ ಸರ್ಕಾರ ಪಕ್ಷಪಾತಿ ಧೋರಣೆ ತೋರುತ್ತಿದೆ ಎಂದು ಶಾಸಕರಾದ ಸಿ.ಎಂ. ಉದಾಸಿ ಆಪಾಧಿಸಿದರು.

       ಮಹೇಶ್ ವಿಕ್ರಮ್ ಹೆಗಡೆ,ಶ್ರುತಿ ಬೆಳ್ಳಕ್ಕಿ, ಶಾರದಾ ಡೈಮಂಡ್, ಹೇಮಂತ್‍ಕುಮಾರ್ ಮತ್ತು ಅಜಿತ್ ಶೆಟ್ಟಿ ಹೇರಂಜಿ ಅವರ ಮೇಲೆ ನಿರಾಧಾರವಾದ ಪ್ರಕರಣಗಳನ್ನು ದಾಖಲಿಸಿ ಮಾನಸಿಕ ಕಿರುಕಳ ನೀಡಲಾಗಿದೆ. ಇವರೆಲ್ಲರೂ ಬಿಜೆಪಿ ಬಗ್ಗೆ ಅಭಿಮಾನ ಹೊಂದಿದವರು. ಅದೇ ಕಾರಣಕ್ಕೆ ಅಭಿವ್ಯಕ್ತಿ ಸ್ವಾತ್ರಂತ್ರ್ಯವನ್ನು ಹತ್ತಿಕ್ಕಿ ಇವರ ವಿರುದ್ಧ ಸೇಡಿನ ಕ್ರಮ ಜರುಗಿಸಲಾಗಿದೆ.

       ಹೇಮಂತ್‍ಕುಮಾರ್ ಪ್ರಕರಣ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣವಾದರು ಕ್ರಮವಿಲ್ಲವಾಗಿದೆ.ಪ್ರಜಾತಂತ್ರ ವ್ಯವಸ್ಥೆಯಲ್ಲಿ ಎಲ್ಲರ ಹಕ್ಕು, ಸ್ವಾತಂತ್ರ್ಯವನ್ನು ರಕ್ಷಿಸುವ ಜವಾಬ್ದಾರಿಯನ್ನು ನಿಭಾಯಿಸುವಂತೆ ರಾಜ್ಯ ಸರ್ಕಾರಕ್ಕೆ ತಾಕೀತು ಮಾಡಬೇಕೆಂದು ಹಾಗೂ ರಾಜಕೀಯ ದ್ವೇಷವನ್ನು ಬದಿಗಿಟ್ಟು ಆಡಳಿತ ನಡೆಸಲು ಸರ್ಕಾರಕ್ಕೆ ಸೂಚಿಸುವಂತೆ ಮನವಿಯಲ್ಲಿ ಸೂಚಿಸಿದ್ದಾರೆ.

       ಪ್ರತಿಭಟನೆಯಲ್ಲಿ ವಿರುಪಾಕ್ಷಪ್ಪ ಬಳ್ಳಾರಿ, ಮಾಜಿ ಶಾಸಕರಾದ ಯು.ಬಿ. ಬಣಕಾರ, ಜಿಲ್ಲಾ ಪ್ರಧಾನಕಾರ್ಯದರ್ಶಿಯಾದ ಸಿದ್ದರಾಜ ಕಲಕೋಟಿ ಮಾತನಾಡಿದರು. ಡಾ|| ಬಸರಾಜ ಕೇಲಗಾರ, ಮಂಜುನಾಥ ಓಲೇಕಾರ, ವಿರುಪಾಕ್ಷಪ್ಪ ಕಡ್ಲಿ, ಶಿವರಾಜ ಹರಿಜನ, ನೀಲಪ್ಪ ಈಟೇರ, ಸತೀಶ ಸಂದಿಮನಿ, ಗಿರೀಶ ಶೆಟ್ಟರ, ಪರಮೇಶ್ವರ ಮೇಗಳಮನಿ, ಶಿವಲಿಂಗಪ್ಪ ತಲ್ಲೂರ ಪಕ್ಷದ ಮುಖಂಡರು ಕಾರ್ಯಕರ್ತರು ಪಾಲ್ಗೊಂಡಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link