ದಾವಣಗೆರೆ:
ಹಿರಿಯರಾದ ಶಾಮನೂರು ಶಿವಶಂಕರಪ್ಪನವರು ಅನಗತ್ಯ ಟೀಕೆ, ಆರೋಪ ಮಾಡುವುದನ್ನು ಬಿಟ್ಟು, ಜಿಲ್ಲೆಯ ಅಭಿವೃದ್ಧಿಗೆ ಸಹಕರಿಸಲಿ ಎಂದು ಸಂಸದ ಜಿ.ಎಂ.ಸಿದ್ದೇಶ್ವರ್ ಸಲಹೆ ನೀಡಿದ್ದಾರೆ.
ನಗರದ ಅರುಣ ವೃತ್ತದ ಬಳಿಯ ಹಳೇ ವಾಣಿ ಹೋಂಡ ಶೋ ರೂಮ್ನಲ್ಲಿ ಬಿಜೆಪಿ ಲೋಕಸಭಾ ಚುನಾವಣಾ ಕಾರ್ಯಾಲಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಸದರಾಗಿ ಅಭಿವೃದ್ಧಿಯ ದೃಷ್ಟಿಯಿಂದ ನಾವು ನಮ್ಮ ಕೆಲಸವನ್ನು ಮಾಡುತ್ತಿದ್ದೇವೆ. ಆದರೆ, ಶಾಸಕ ಶಾಮನೂರು ಶಿವಶಂಕರಪ್ಪನವರು ನನ್ನ ಮತ್ತು ಬಿಜೆಪಿ ವಿರುದ್ಧ ಅನಗತ್ಯ ಟೀಕೆ, ಆರೋಪ ಮಾಡುತ್ತಿರುವುದು ಒಳ್ಳೆಯದಲ್ಲ. ಇವುಗಳನ್ನು ಬಿಟ್ಟು ಜಿಲ್ಲೆಯ ಅಭಿವೃದ್ಧಿಗೆ ಸಹಕರಿಸಲಿ ಎಂದರು.
ಕಾಂಗ್ರೆಸ್ಗೆ ಎಸ್ಎಸ್ ಹೈಕಮಾಂಡ್:
ನಮ್ಮ ಪಕ್ಷದಲ್ಲಿ ವರಿಷ್ಠರು ಯಾರಿಗೆ ಟಿಕೆಟ್ ಕೊಡುತ್ತಾರೋ, ಅವರೇ ಲೋಕಸಭಾ ಅಭ್ಯರ್ಥಿಯಾಗಲಿದ್ದಾರೆ. ಆದರೆ, ಕಾಂಗ್ರೆಸ್ ಪಕ್ಷಕ್ಕೆ ಶಾಮನೂರು ಶಿವಶಂಕರಪ್ಪನವರೇ ಹೈಕಮಾಂಡ್ ಆಗಿರಬಹುದು. ಅದಕ್ಕೆ ಅವರ ಟಿಕೇಟ್ ಅವರೇ ಘೋಷಿಸಿಕೊಂಡಿರಬಹುದು ಎಂದು ಲೇವಡಿ ಮಾಡಿದರು.
ಬಿಜೆಪಿ ಸಾಧನೆಗಳ ಮನವರಿಕೆ:
ಬಿಜೆಪಿ ರಾಷ್ಟ್ರೀಯ ಮತ್ತು ರಾಜ್ಯಾಧ್ಯಕ್ಷರ ಸೂಚನೆಯ ಮೇರೆಗೆ ಇಂದು ಲೋಕಸಭಾ ಚುನಾವಣಾ ಕಾರ್ಯಾಲಯ ಮತ್ತು ಕಾಲ್ ಸೆಂಟರ್ ಆರಂಭಿಸಿ, ಮೋದಿ ನೇತೃತ್ವದ ಕೇಂದ್ರ ಸರ್ಕಾರದ 4 ವರ್ಷದ ಯೋಜನೆಗಳನ್ನು ಗ್ರಾಮೀಣದ ಪ್ರದೇಶದ ಬೂತ್ ಮಟ್ಟಕ್ಕೆ ತಲುಪಿಸುವ ಕಾರ್ಯಕ್ಕೆ ಚಾಲನೆ ನೀಡಲಾಗುತ್ತಿದೆ. ಅಲ್ಲದೆ, ನಮ್ಮ ಪಕ್ಷದ 6 ಜನ ಶಾಸಕರು, 2 ಕ್ಷೇತ್ರದಗಳ ಪರಾಜಿತ ಅಭ್ಯರ್ಥಿಗಳು ಹಾಗೂ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಮೋದಿ ನೇತೃತ್ವದ ಕೇಂದ್ರ ಸರ್ಕಾರದ, ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಹಿಂದಿನ ಸರ್ಕಾರದ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೈಗೊಂಡಿರುವ ಸಾಧನೆ-ಕೊಡುಗೆಗಳನ್ನು ಜನರಿಗೆ ಮನವರಿಕೆ ಮಾಡಿಕೊಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
26 ಸ್ಥಾನಗಳಲ್ಲಿ ಗೆಲುವು:
ತಾವು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುವ ಸಂದರ್ಭದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ದೇಶದ ಪ್ರಧಾನಿ ಮಾಡಬೇಕೆಂಬ ತೀರ್ಮಾನವನ್ನು ಜನತೆ ಮಾಡಿರುವುದು ತಮ್ಮ ಗಮನಕ್ಕೆ ಬಂದಿದ್ದು, ಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ 25ರಿಂದ 26 ಜನ ಬಿಜೆಪಿ ಸಂಸದರು ಸಂಸತ್ತು ಪ್ರವೇಶ ಮಾಡಲಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದರು.
ಒಂದೂವರೆ ಲಕ್ಷ ಅಂತರದ ಗೆಲುವು:
ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ 6 ಚುನಾವಣೆಗಳ ಪೈಕಿ ಬಿಜೆಪಿ ಐದು ಬಾರಿ ಗೆಲುವು ಸಾಧಿಸಿದೆ. ಜಿಲ್ಲೆಯ ಜನತೆ ಈ ಬಾರಿಯೂ ಬಿಜೆಪಿಗೆ ಆಶೀರ್ವಾದ ಮಾಡಲಿದ್ದಾರೆ. ದಾವಣಗೆರೆ ಕ್ಷೇತ್ರದಿಂದ ಈ ಬಾರಿ ಯಾರಿಗೇ ಬಿಜೆಪಿ ಟಿಕೆಟ್ ನೀಡಿದರೂ ಒಂದೂವರೆ ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇವೆ ಎಂದರು.
ಪಂಚ ಕ್ಷೇತ್ರಗಳಲ್ಲೂ ನಮ್ದೆ ಹವಾ:
ಬಳ್ಳಾರಿ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಅತ್ಯಧಿಕ ಮತಗಳಿಂದ ಜಯಗಳಿಸಲಿದ್ದಾರೆ. ಮಂಡ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಒಪ್ಪಂದ ಮಾಡಿಕೊಂಡಿರುವುದರಿಂದ ಆ ಪಕ್ಷಗಳ ಕಾರ್ಯಕರ್ತರಲ್ಲಿ ಅಸಮಾಧಾನ ಹೆಚ್ಚಿದೆ. ಹೀಗಾಗಿ ಮಂಡ್ಯದಲ್ಲಿಯೂ ಬಿಜೆಪಿ ಈ ಬಾರಿ ವಿಜಯ ಪತಾಕೆ ಹಾರಿಸಲಿದೆ. ಅಲ್ಲದೆ, ರಾಮನಗರ ಮತ್ತು ಜಮಖಂಡಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲೂ ಬಿಜೆಪಿ ಜಯಗಳಿಸಲಿದ್ದು, ಪಂಚ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂದರು.
ಸುದ್ದಿಗೋಷ್ಠಿಯಲ್ಲಿ ಶಾಸಕರುಗಳಾದ ಎಸ್.ಎ.ರವೀಂದ್ರನಾಥ್, ಪ್ರೊ.ಎನ್.ಲಿಂಗಣ್ಣ, ಮಾಡಾಳು ವಿರೂಪಾಕ್ಷಪ್ಪ, ಎಸ್.ವಿ.ರಾಮಚಂದ್ರಪ್ಪ, ಜಿಲ್ಲಾ ಬಿಜೆಪಿ ಅಧ್ಯಕ್ಷ ಯಶವಂತರಾವ್ ಜಾಧವ್, ಪ್ರಧಾನ ಕಾರ್ಯದರ್ಶಿ ಬಿ.ರಮೇಶ ನಾಯ್ಕ, ಮುಖಂಡರಾದ ಪ್ರೊ.ನರಸಿಂಹಪ್ಪ, ಹೇಮಂತಕುಮಾರ್, ಶಿವರಾಜ ಪಾಟೀಲ್, ಪ್ರಕಾಶ್, ಪಾಲಿಕೆ ಸದಸ್ಯ ಡಿ.ಕೆ.ಕುಮಾರ್ ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ