ತುಮಕೂರು
ಮುಸ್ಲಿಂ ಬಾಂಧವರ ಪವಿತ್ರ ಹಬ್ಬಗಳಲ್ಲೊಂದಾದ ಬಕ್ರೀದ್ ಹಬ್ಬವನ್ನು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು.
ತುಮಕೂರು ನಗರದ ಕುಣಿಗಲ್ ರಸ್ತೆಯಲ್ಲಿರುವ ಈದ್ಗಾ ಮೊಹಲ್ಲಾದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಜಮಾಯಿಸಿದ ಮುಸ್ಲಿಂ ಬಾಂಧವರು ಬೆಳಗ್ಗೆ 10 ಗಂಟೆಗೆ ಸರಿಯಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ನಂತರ ಮಾತನಾಡಿದ ಮಾಜಿ ಶಾಸಕರಾದ ಎಸ್. ಷಫಿಅಹಮದ್ ಹಾಗೂ ಡಾ. ರಫೀಕ್‍ಅಹಮದ್ ಅವರು, ನಾಡಿನ ಸಂಪ್ರದಾಯದಂತೆ ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬವನ್ನು ಮಸೀದಿಗಳು ಹಾಗೂ ಈದ್ಗಾ ಮೊಹಲ್ಲಾಗಳಿಗೆ ತೆರಳಿ ಪ್ರಾರ್ಥನೆ ಸಲ್ಲಿಸುವ ಮೂಲಕ ವಿಜೃಂಭಣೆಯಿಂದ ಆಚರಿಸುತ್ತಿದ್ದಾರೆ ಎಂದರು.
ನಗರದ ಎಲ್ಲ ನಾಗರಿಕರಿಗೂ ಬಕ್ರೀದ್ ಹಬ್ಬದ ಶುಭಾಶಯಗಳನ್ನು ಕೋರಿದ ಅವರು, ಬಕ್ರೀದ್ ಹಬ್ಬ ಶಾಂತಿ-ಸೌಹಾರ್ದತೆಯ ಸಂಕೇತವಾಗಿದ್ದು, ಹಿಂದೂ-ಮುಸ್ಲಿಂ ಬಾಂಧವರು ಸೌಹಾರ್ದತೆಯಿಂದ ಹಬ್ಬಗಳನ್ನು ಆಚರಿಸಿಕೊಂಡು ಹೋಗುತ್ತಿರುವುದು ನಾಡಿನ ಶಾಂತಿಯ ಪ್ರತೀಕವಾಗಿದೆ ಎಂದರು.
ಈದ್ಗಾ ಮೊಹಲ್ಲಾದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್‍ಕುಮಾರ್, ಎಸ್ಪಿ ಡಾ. ದಿವ್ಯಾ ವಿ.ಗೋಪಿನಾಥ್, ಅಡಿಷನಲ್ ಎಸ್ಪಿ ಡಾ. ಶೋಭಾರಾಣಿ, ಡಿವೈಎಸ್ಪಿ ನಾಗರಾಜು ಮತ್ತಿತರರು ಪಾಲ್ಗೊಂಡು ಮಾಜಿ ಶಾಸಕರಾದ ಎಸ್. ಷಫಿಅಹಮದ್, ಡಾ. ರಫೀಕ್‍ಅಹಮದ್ ಸೇರಿದಂತೆ ಮುಸ್ಲಿಂ ಬಾಂಧವರಿಗೆ ಶುಭಾಶಯ ಕೋರಿದರು.
ನಗರದ ಕುಣಿಗಲ್ ರಸ್ತೆಯಲ್ಲಿರುವ ಈದ್ಗಾ ಮೊಹಲ್ಲಾದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋ ಬಸ್ತ್ ವ್ಯವಸ್ಥೆ ಮಾಡಲಾಗಿತ್ತು.