ಕೂಡ್ಲಿಗಿ:
ಲೋಕಸಭಾ ಚುನಾವಣೆಯ ನಂತರ ಮೈತ್ರಿ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಮೋಳಕಾಲ್ಮೂರು ಶಾಸಕ ಬಿ. ಶ್ರೀರಾಮುಲು ಹೇಳಿದರು. ಅವರು ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ತಾಲ್ಲೂಕಿನ ಗುಡೇಕೋಟೆ ಗ್ರಾಮದಲ್ಲಿ ಸೋಮವಾರ ಬಿಜೆಪಿ ಅಭ್ಯರ್ಥಿ ವೈ. ದೇವೇಂದ್ರಪ್ಪ ಪರವಾಗಿ ನಡೆದ ರೋಡ್ ಶೋ ನಂತರ ಪ್ರಚಾರ ಸಭೆಯಲ್ಲಿ ಮಾತನಾಡಿದರು.
ರಾಜ್ಯದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದ ಮೈತ್ರಿ ಅಂತ್ಯ ಕಾಣುವ ಹಾದಿಯಲ್ಲಿದೆ. ಲೋಕಸಭಾ ಚುನಾವಣೆಯಲ್ಲಿ ಪರಸ್ಪರ ಕಾಲೆಳೆಯುತ್ತಿದ್ದು, ಲೋಕಸಭಾ ಚುನಾವಣೆಯ ನಂತರ ರಾಜ್ಯದ ಮೈತ್ರಿ ಸರ್ಕಾರ ಬಿದ್ದು ಹೋಗಲಿದೆ. ನಂತರ ಬಿಜೆಪಿ ಪಕ್ಷ ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲಿದ್ದು, ಇದರಲ್ಲಿ ನಿಮ್ಮ ರಾಮುಲು ಉನ್ನತ ಸ್ಥಾನ ಪಡೆಯಲಿದ್ದಾರೆ ಎಂದು ಹೇಳಿದ ಅವರು, ರಾಜ್ಯದಲ್ಲಿ ಬಿಜೆಪಿ ಆಡಳಿತಕ್ಕೆ ಬಂದ ನಂತರ ಜಿಲ್ಲೆಯ ಎಲ್ಲಾ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಜಾರಿ ಮಾಡಲಾಗುವುದು ಎಂದು ಭಾರವಸೆ ನೀಡಿದರು.
ಶಾಸಕ ಎನ್.ವೈ. ಗೋಪಾಲಕೃಷ್ಣ ಮಾತನಾಡಿ, ದೇಶಕ್ಕಾಗಿ ಮೋದಿ ಎನ್ನುವ ಘೋಷಣೆ ಎಲ್ಲಡೆ ಕೇಳಿಬರುತ್ತಿದ್ದು, ಅವರನ್ನು ಮತ್ತೆ ಪ್ರಧಾನಿ ಮಾಡಲು ಈ ಬಾರಿ ಹೆಚ್ಚಿನ ಅಂತರದಲ್ಲಿ ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಹೆಚ್ಚಿನ ಅಂತರದಲ್ಲಿ ಗೆಲ್ಲಿಸಿ ಕಳಿಸಬೇಕಾಗಿದೆ. ಇದಕ್ಕಾಗಿ ಪ್ರತಿಯೊಬ್ಬರು ಬಿಜೆಪಿಗೆ ಮತ ನೀಡಬೇಕು. ವಿಧಾನ ಸಭಾ ಚುನಾವಣೆಯಲ್ಲಿ ಕೂಡ್ಲಿಗಿ ಕ್ಷೇತ್ರದಲ್ಲಿ ಬಿಜೆಪಿಯಿಂದ ನನ್ನನ್ನು ಆಯ್ಕೆ ಮಾಡಿದಂತಯೇ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ದೇವೇಂದ್ರಪ್ಪ ಅವರಿಗೆ ಹೆಚ್ಚಿನ ಮತ ನೀಡುವ ಮೂಲಕ ಕ್ಷೇತ್ರದಲ್ಲಿ ನಮ್ಮ ಘನತೆ ಹೆಚ್ಚಿಸಬೇಕು ಎಂದು ಹೇಳಿದರು.
ಗ್ರಾಮದ ಮುಖಂಡರಾದ ರಾಜಣ್ಣ, ರಾಘವೇಂದ್ರ ಸ್ವಾಮಿ ಮಾತನಾಡಿದರು. ಬಿಜೆಪಿ ಜಿಲ್ಲಾ ಅಧ್ಯಕ್ಷ ಪಿ. ಚನ್ನಬಸವಗೌಡ, ಉಪಾಧ್ಯಕ್ಷ ಕೆ.ಎಂ. ತಿಪ್ಪೇಸ್ವಾಮಿ, ಟಿ.ಜಿ. ಮಲ್ಲಿಕಾರ್ಜುನ ಗೌಡ, ಬಂಗಾರಿ ಹನುಮಂತು, ಎಸ್ಟಿ ಘಟಕದ ಪ್ರಧಾನ ಕಾರ್ಯದರ್ಶಿ ಸೂರ್ಯಪಾಪಣ್ಣ, ಕೂಡ್ಲಿಗಿ ಮಂಡಲ ಅಧ್ಯಕ್ಷ ಕೆ.ಎಚ್. ವೀರನಗೌಡ, ಪ್ರಧಾನ ಕಾರ್ಯದರ್ಶಿ ಪಿ. ಮಂಜುನಾಥ ನಾಯಕ ಚುನಾವಣಾ ಉಸ್ತುವಾರಿ ರಾಮಲಿಂಗಪ್ಪ, ಎಸ್.ಪಿ. ಪ್ರಕಾಶ ಇದ್ದರು. ಇದಕ್ಕೂ ಮೊದಲು ಗ್ರಾಮದ ಸರ್ಕಾರಿ ಆಸ್ಪತ್ರೆಯಿಂದ ಸಂತೆ ಮೈದಾನದವರೆಗೂ ತೆರೆದ ವಾಹನದಲ್ಲಿ ರೋಡ್ ಶೋ ನಡೆಸಲಾಯಿತು.