ಬೆಂಗಳೂರು:
ಬೆಂಗಳೂರು– ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿ ನಿರ್ಮಾಣ ಆಗಿರುವುದರಿಂದ ನೈಸ್ ರಸ್ತೆಯ ಅಗತ್ಯವಿಲ್ಲ. ಹೀಗಾಗಿ ನೈಸ್ ಯೋಜನೆಯನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು’ ಎಂದು ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ. ಜಯಚಂದ್ರ ಹೇಳಿದ್ದಾರೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2016ರಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರವಿದ್ದಾಗ ನೈಸ್ ಯೋಜನೆಗೆ ಸಂಬಂಧಿಸಿದಂತೆ ನಾನೇ ಸದನ ಸಮಿತಿ ವರದಿ ಕೊಟ್ಟಿದ್ದೇನೆ. ಇದರ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು ಹಾಗೂ ಹೆಚ್ಚುವರಿ ಭೂಮಿಯನ್ನು ಹಿಂಪಡೆಯಬೇಕು ಎಂದು ವರದಿಯಲ್ಲಿ ಶಿಫಾರಸು ಮಾಡಲಾಗಿದೆ.
ಮುಖ್ಯಮಂತ್ರಿ ಅವರು ಶಿಫಾರಸುಗಳ ಅನುಸಾರ ಕ್ರಮ ವಹಿಸಬೇಕು ಎಂದು ಮನವಿ ಮಾಡಿದರು. ಇದೇ ವೇಳೆ ನೈಸ್ ಯೋಜನೆಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಹಾಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡುವಿನ ಆರೋಪ-ಪ್ರತ್ಯಾರೋಪಗಳ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಲು ನಿರಾಕರಿಸಿದರು.
ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸಹೋದರ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಸದಸ್ಯ ಡಿ ಕೆ ಸುರೇಶ್ ರೈತರ ಜಮೀನು ಕಬಳಿಸಲು ನೈಸ್ ಸಂಸ್ಥೆಯೊಂದಿಗೆ ಶಾಮೀಲಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಆರೋಪಿಸಿದ ಬೆನ್ನಲ್ಲೇ ಜಯಚಂದ್ರ ಹೇಳಿಕೆ ನೀಡಿದ್ದಾರೆ.
ಮಾಜಿ ಶಾಸಕ ಹಾಗೂ ನೈಸ್ ವ್ಯವಸ್ಥಾಪಕ ನಿರ್ದೇಶಕ ಅಶೋಕ್ ಖೇಣಿ ಯೋಜನೆಯಲ್ಲಿ ಮಾಡಿರುವ ಅಕ್ರಮಗಳ ಬಗ್ಗೆ ಚರ್ಚಿಸಲು ಮತ್ತು ದಾಖಲೆಗಳನ್ನು ಸಲ್ಲಿಸಲು ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಅಪಾಯಿಂಟ್‌ಮೆಂಟ್ ಕೇಳಿದ್ದನ್ನು ಸಹ ಸ್ಮರಿಸಬಹುದು.
ಕಾವೇರಿ ನದಿ ನೀರು ಹಂಚಿಕೆ ಸಂಬಂಧ ರಾಜ್ಯ ಸರ್ಕಾರ ಬುಧವಾರ ಸರ್ವಪಕ್ಷ ಸಭೆ ಕರೆದಿದ್ದು, ಅಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು. ಭದ್ರಾ ಮೇಲ್ದಂಡೆ ಯೋಜನೆಯನ್ವಯ ರಾಷ್ಟ್ರೀಯ ಯೋಜನೆ ಎಂದು ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಘೋಷಿಸಿ, ಹಣ ಮೀಸಲಿಟ್ಟಿದೆ. ಆದರೆ, ಈಗ ಈ ಯೋಜನೆಗೆ ಬೇರೆ ಯೋಜನೆಯಡಿ ಹಣ ನೀಡಲು ಮುಂದಾಗಿದೆ. ಯೋಜನೆಯನ್ನು ಕೇಂದ್ರ ಸರ್ಕಾರ ಯಾವುದೇ ಮಾನದಂಡದಲ್ಲಿ ಗುರುತಿಸಲಿ. ಆದರೆ, ಯಾವುದೇ ಕಗ್ಗಂಟಿಲ್ಲದೆ ಹಣ ಬಿಡುಗಡೆ ಮಾಡಲಿ’ ಎಂದು ಆಗ್ರಹಿಸಿದ ಜಯಚಂದ್ರ, ಈ ಯೋಜನೆಗೆ ರಾಜ್ಯ ಸರ್ಕಾರ 20 ಸಾವಿರ ಕೋಟಿ ವೆಚ್ಚ ಮಾಡುತ್ತಿದೆ ಎಂದರು.