ಬೆಂಗಳೂರು:
ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆ ಘೋಷಣೆಯಾಗಿದ್ದು, ಅಭ್ಯರ್ಥಿಗಳ ಆಯ್ಕೆ ಕುರಿತು ಶನಿವಾರ ನಡೆಯಲಿರುವ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಿ ನಿರ್ಧರಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಆರ್.ಟಿ.ನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಬಿಜೆಪಿ ಕೋರ್ ಕಮಿಟಿ ಸಭೆ ಇದೆ. ಕೋರ್ ಕಮಿಟಿ ಸಭೆಯಲ್ಲಿ ಎಲ್ಲವನ್ನೂ ತೀರ್ಮಾನ ಮಾಡುತ್ತೇವೆ. ಸಂಭಾವ್ಯ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿ ಹೈಕಮಾಂಡ್ಗೆ ಕಳುಹಿಸಿಕೊಡಲಾಗುತ್ತದೆ ಎಂದರು.
ಈಗಾಗಲೇ ಒಬಿಸಿ ಮೀಸಲಾತಿ ಬಗ್ಗೆ ಕಾನೂನು ಸಚಿವರು ಹೇಳಿದ್ದಾರೆ. ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದ ಕೇಸ್ ಒಂದು ಸುಪ್ರೀಂಕೋರ್ಟ್ನಲ್ಲಿ ಪೆಂಡಿಂಗ್ ಇದೆ, ಜಿ.ಪಂ ಮತ್ತು ತಾ.ಪಂಗೆ ಒಬಿಸಿ ಮೀಸಲಾತಿ ಬೇಕು. ಕಾನೂನಾತ್ಮಕವಾಗಿ, ಸಂವಿಧಾನಾತ್ಮಕವಾಗಿ ಮೀಸಲಾತಿ ಕಲ್ಪಿಸಲು ಅವಕಾಶ ಕೇಳುತ್ತೇವೆ. ಈಗ ನಾವು ಏನು ಮೀಸಲಾತಿ ಮಾಡಿದ್ದೇವೆಯೋ ಅದಕ್ಕೆ ಸ್ವಲ್ಪ ಸಮಯಾವಕಾಶ ಕೊಡಿ ಅಥವಾ ಈ ಹಿಂದೆ ಒಬಿಸಿ ಮೀಸಲಾತಿ ಏನು ಇದೆಯೋ ಅದರಂತೆ ಚುನಾವಣೆ ನಡೆಸಲು ಅವಕಾಶ ಕೊಡಿ ಎಂದು ಕೇಳಿದ್ದೇವೆ. ಬಹುತೇಕವಾಗಿ ನಮಗೆ ಒಬಿಸಿ ಮೀಸಲಾತಿ ಕಲ್ಪಿಸಿಯೇ ಚುನಾವಣೆ ನಡೆಸಲು ಅವಕಾಶ ಸಿಗುವ ವಿಶ್ವಾಸ ಇದೆ ಎಂದು ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ