ತುಮಕೂರು:
ಗುಬ್ಬಿ ತಾಲ್ಲೂಕು ಬಿದರೆಹಳ್ಳ ಕಾವಲ್‍ನಲ್ಲಿ ನೂತನವಾಗಿ ನಿರ್ಮಾಣವಾಗಿರುವ ಹೆಚ್‍ಎಎಲ್ ಹೆಲಿಕಾಪ್ಟರ್ ತಯಾರಿಕಾ ಘಟಕವನ್ನು ಫೆ. 6 ರಂದು ಮಧ್ಯಾಹ್ನ 3.30ಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಲೋಕಾರ್ಪಣೆ ಮಾಡಿ ಎಲ್‍ಯುಹೆಚ್ ಹೆಲಿಕಾಪ್ಟರ್‍ನ್ನು ಉದ್ಘಾಟಿಸುವರು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ತಿಳಿಸಿದರು.
ಗುಬ್ಬಿ ತಾಲ್ಲೂಕು ಬಿದರೆಹಳ್ಳಿ ಕಾವಲ್ ಸಮೀಪ ನೂತನವಾಗಿ ನಿರ್ಮಾಣವಾಗಿರುವ ಹೆಚ್‍ಎಎಲ್ ಘಟಕದ ಮುಂಭಾಗ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್‍ಎಎಲ್ ಹೆಲಿಕಾಪ್ಟರ್ ತಯಾರಿಕಾ ಕಾರ್ಖಾನೆ ನಿರ್ಮಾಣಕ್ಕೆ 615 ಎಕರೆ ಜಮೀನನ್ನು ಕೊಡಲಾಗಿತ್ತು. 2016 ಜನವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭೂಮಿ ಪೂಜೆ ನೆರವೇರಿಸಿದ್ದರು. 6 ವರ್ಷಗಳಲ್ಲಿ ಹೆಲಿಕಾಪ್ಟರ್ ತಯಾರು ಮಾಡುವ ಮಟ್ಟಕ್ಕೆ ಸಿದ್ದಗೊಳಿಸಿ ಲೋಕಾರ್ಪಣೆ ಮಾಡಲಾಗುತ್ತಿದೆ. ಹೆಲಿಕಾಪ್ಟರ್ ಘಟಕದ ಉದ್ಘಾಟನೆ ಬಳಿಕ ಪ್ರಧಾನಿ ನರೇಂದ್ರ ಮೋದಿಯವರು ಸಾರ್ವಜನಿಕ ಸಮಾರಂಭವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದರು.
ಈ ಅಭೂತ ಪೂರ್ವ ಸಮಾರಂಭದಲ್ಲಿ ಕೇಂದ್ರ ರಕ್ಷಣಾ ಸಚಿವರು, ಸಹಾಯಕ ರಕ್ಷಣಾ ಸಚಿವರು,. ರಾಜ್ಯ ರಕ್ಷಣಾ ಸಚಿವರು, ರಾಜ್ಯಪಾಲರು, ಮುಖ್ಯಮಂತ್ರಿಗಳು, ಸಚಿವರುಗಳು, ಶಾಸಕರು, ವಿಧಾನ ಪರಿಷತ್ ಸದಸ್ಯರುಗಳು ಸೇರಿದಂತೆ ಸುಮಾರು 1500ಕ್ಕೂ ಹೆಚ್ಚು ಮಂದಿ ಗಣ್ಯರು ಆಗಮಿಸುವ ನಿರೀಕ್ಷೆ ಇದೆ ಎಂದು ಹೇಳಿದರು.
ಕಾರ್ಯಕ್ರಮಕ್ಕೆ ಬರುವ ಸಾರ್ವಜನಿಕರಿಗೆ ಊಟದ ವ್ಯವಸ್ಥೆ, ಬಸ್ ವ್ಯವಸ್ಛೆ, ಪಾರ್ಕಿಂಗ್ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಲಾಗಿದೆ. ಯಾವುದೇ ರೀತಿಯ ಅಡಚಣೆಗಳು ಉಂಟಾಗದಂತೆ ಪೆÇಲೀಸ್ ಇಲಾಖೆ ಮತ್ತು ಜಿಲ್ಲಾಡಳಿತದ ವತಿಯಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.
ಫೆ. 6 ರಂದು ಬೆಳಿಗ್ಗೆಯಿಂದ ಸಂಜೆ ವರೆಗೆ 206 ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರದ ಮಾರ್ಗವನ್ನು ಬದಲಾವಣೆ ಮಾಡಲಾಗಿದೆ. ವಾಹನ ಚಾಲಕರು, ಸಾರ್ವಜನಿಕರು ಮಾರ್ಗ ಬದಲಾವಣೆ ಬಗ್ಗೆ ಗಮನ ಹರಿಸಿ ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.
ಜಿಲ್ಲೆಗೆ ಪ್ರಧಾನಿಗಳು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ಐದಾರು ಬಾರಿ ಅಧಿಕಾರಿಗಳ ಸಭೆ ನಡೆಸಿ ಅಗತ್ಯ ಸೂಚನೆಗಳನ್ನು ಕೊಡಲಾಗಿದೆ. ಹೆಚ್‍ಎಎಲ್ ಅಧಿಕಾರಿಗಳು ಸಹ ಎಲ್ಲ ಸಿದ್ದತೆ ಕೈಗೊಂಡಿದ್ದಾರೆ ಎಂದು ಅವರು ಹೇಳಿದರು.ಹೆಚ್‍ಎಎಲ್ ಘಟಕದ ಉದ್ಘಾಟನೆ ಬಳಿಕ ಜಲಜೀವನ್ ಮಿಷನ್ ಯೋಜನೆಯ ಮನೆ ಮನೆ ಗಂಗೆ ಕಾರ್ಯಕ್ರಮಕ್ಕೆ ಪ್ರಧಾನಿಗಳು ಶಂಕುಸ್ಥಾಪನೆಯನ್ನು ನೆರವೇರಿಸುವರು.
ಈ ಕಾರ್ಯಕ್ರಮಗಳನ್ನು ಹೊರತುಪಡಿಸಿ ಬೇರೆ ಯಾವುದೇ ಕಾರ್ಯಕ್ರಮಗಳ ಕುರಿತು ಪ್ರಧಾನಿ ಕಚೇರಿಯಿಂದ ಇದುವರೆಗೂ ಮಾಹಿತಿ ಬಂದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.ಹೆಚ್‍ಎಎಲ್ ನಲ್ಲಿ ದೊಡ್ಡ ಪ್ರಮಾಣದಲ್ಲಿ ಕೆಲಸ ಪ್ರಾರಂಭವಾದಾಗ ರಾಜ್ಯ ಸರ್ಕಾರದಿಂದ ಸ್ಥಳೀಯರಿಗೆ ಉದ್ಯೋಗ ನೀಡುವಂತೆ ಮನವಿ ಮಾಡಲಾಗಿದೆ. ಇದಕ್ಕೆ ಹೆಚ್‍ಎಎಲ್ ಅಧಿಕಾರಿಗಳು ಸಹ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.
ಫೆ. 6 ರಂದು ಮಧ್ಯಾಹ್ನ 1 ಗಂಟೆಯಿಂದ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಜನರನ್ನು ಬಿಡಲು ಪ್ರಾರಂಭ ಮಾಡಲಾಗುತ್ತಿದೆ. 2.30 ರೊಳಗೆ ಎಲ್ಲರೂ ಒಳಗೆ ಸೇರಿರಬೇಕು. ಕಾರ್ಯಕ್ರಮಕ್ಕೆ ಆಗಮಿಸುವವರು ನೀರು, ಬ್ಯಾಗ್‍ಗಳು, ಪ್ಲಾಸ್ಟಿಕ್ ಕವರ್ ಸೇರಿದಂತೆ ಇತರೆ ಯಾವುದೇ ವಸ್ತುಗಳನ್ನು ತರುವಂತಿಲ್ಲ ಎಂದು ಮನವಿ ಮಾಡಿರುವ ಅವರು, ಕಾರ್ಯಕ್ರಮದ ಸ್ಥಳದಲ್ಲೇ ಕುಡಿಯುವ ನೀರು, ಊಟದ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.