ಹೊನ್ನಾಳಿ:

ರಾಜ್ಯದಲ್ಲಿ ಆ.31ರಂದು ನಡೆಯುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ಸಂಸದ ಜಿ.ಎಂ. ಸಿದ್ಧೇಶ್ವರ ವಿಶ್ವಾಸ ವ್ಯಕ್ತಪಡಿಸಿದರು.
ಅವರು ಪಟ್ಟಣದ ಕೋಟೆ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸಭೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿರುವ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿ ಮಾತನಾಡಿದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಜನ ಮತ ಚಲಾಯಿಸಿ 104 ಸ್ಥಾನಗಳನ್ನು ಗೆಲ್ಲುವಂತೆ ಮಾಡಿದ್ದರು. ಅಲ್ಪ ಸ್ಥಾನಗಳಿಂದ ಬಿಜೆಪಿ ಆಡಳಿತ ಚುಕ್ಕಾಣಿ ಹಿಡಿಯುವುದರಲ್ಲಿ ಹಿನ್ನಡೆಯಾಗಿದೆ. ಮುಂದಿನ ದಿನಗಳಲ್ಲಿ ಬಿಜೆಪಿ ಪುನಃ ಅಧಿಕಾರಕ್ಕೆ ಬರುತ್ತದೆ. ಪಪಂ ಚುನಾವಣೆಯಲ್ಲಿ ಎಲ್ಲಾ 17 ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಕಾರ್ಯಕರ್ತರು ಸಂಘಟಿತರಾಗಿ ಹೋರಾಡಬೇಕು ಎಂದು ತಿಳಿಸಿದರು.
ಶಾಸಕ ಎಂ.ಪಿ. ರೇಣುಕಾಚಾರ್ಯ ಮಾತನಾಡಿ, ಈ ಹಿಂದಿನ ನಮ್ಮ ಸರಕಾರದಲ್ಲಿ ತಾಲೂಕು ಹಾಗೂ ಪಟ್ಟಣದ ಅಭಿವೃದ್ಧಿಗೆ ಶ್ರಮ ಹಾಕಿದ ಪ್ರಯುಕ್ತ ತಾಲೂಕಿನ ಮತದಾರರು ವಿಧಾನಸಭಾ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಿದ್ದಾರೆ. ಇದೇ ರೀತಿ ಪಪಂ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿ ಪಟ್ಟಣದ ಸರ್ವತೋಮುಖ ಅಭಿವೃದ್ಧಿಗೆ ನಾಂದಿ ಹಾಡಬೇಕು ಎಂದು ವಿನಂತಿಸಿದರು.
ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಮಾತನಾಡಿ, ಈಚೆಗೆ ನಡೆದ ಚುನಾವಣೆಯಲ್ಲಿ ವಿಧಾನ ಪರಿಷತ್ತಿಗೆ ಪದವೀಧರ ಕ್ಷೇತ್ರದಿಂದ ನನ್ನನ್ನು, ವಿಧಾನಸಭಾ ಚುನಾವಣೆಯಲ್ಲಿ ಎಂ.ಪಿ. ರೇಣುಕಾಚಾರ್ಯ ಅವರನ್ನು ಆರಿಸಿ ಕಳಿಸಿದ್ದೀರಿ. ಈಗ ಪಪಂ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿ ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








