ಹಾವೇರಿ
ರಾಯಲ್ ಬುಲೆಟ್ ಮೂಲಕ ಅಧಿಕಾರಿಗಳ ತಂಡದೊಂದಿಗೆ ನಗರಸಂಚಾರ ಕೈಗೊಂಡು ಮತದಾರರ ಗಮನ ಸೆಳೆದ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ.ಜಿಲ್ಲಾ ಸ್ವೀಪ್ ಸಮಿತಿಯಿಂದ ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮತದಾರರ ಜಾಗೃತಿಯ ಬೈಕ್ ರ್ಯಾಲಿಗೆ ಪುರಸಿದ್ದೇಶ್ವರ ದೇವಾಲಯದ ಆವರಣದಲ್ಲಿ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಲೀಲಾವತಿ ಅವರು ಚಾಲನೆ ನೀಡಿದರು.
ರಾಯಲ್ ಎನ್‍ಫಿಲ್ಡ್ ಬೈಕ್ ಸವಾರಿ ಮೂಲಕ ಸಹ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ನಗರದ ಮೇಲಿನ ಪೇಟೆ, ಎಂ.ಜಿ.ರಸ್ತೆ, ಹೈಸ್ಕೂಲ್ ರಸ್ತೆ, ಜಿ.ಎಚ್.ಪಟೇಲ್ ವೃತ್ತದ ಮಾರ್ಗವಾಗಿ ಮುನ್ಸಿಪಲ್ ಹೈಸ್ಕೂಲ್ ಆವರಣದವರೆಗೆ ಸಂಚಾರಮಾಡಿ ಮತದಾನದ ಜಾಗೃತಿ ಮೂಡಿಸಿದರು.
ಇದೇ ಸಂದರ್ಭದಲ್ಲಿ ಬೈಕ್ ರ್ಯಾಲಿಯಲ್ಲಿ ಭಾಗವಹಿಸಿದವರನ್ನು ಉದ್ದೇಶಿಸಿ ಮಾತನಾಡಿ, ಮತದಾನ ಜಾಗೃತಿಗಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸ್ವೀಪ್ ಸಮಿತಿ ವಿಭಿನ್ನ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಈಗಾಗಲೇ ಜಿಲ್ಲಾ ಸ್ವೀಪ್ ಸಮಿತಿಯ ರಾಯಭಾರಿಯಾಗಿ ಸರಿಗಮ ಸಂಗೀತ ಸ್ಪರ್ಧೆಯ ರನ್ನರಅಪ್ ಹನುಮಂತ ಲಮಾಣಿ ಅವರನ್ನು ನೇಮಕ ಮಾಡಿದೆ. ರಾಜ್ಯ ಚುನಾವಣಾ ಆಯೋಗ ಅನುಮೋದನೆ ಸಹ ನೀಡಿದೆ ಎಂದು ತಿಳಿಸಿದರು.
ಈ ಭಾರಿಯ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 75 ರಷ್ಟು ಮತದಾನದ ಗುರಿ ಹೊಂದಲಾಗಿದೆ. ಈ ಹಿನ್ನೆಲೆಯಲ್ಲಿ ಮತದಾರರನ್ನು ಜಾಗೃತಿಗೊಳಿಸುವ ಕಾರ್ಯಕ್ರಮಗಳನ್ನು ಸತತವಾಗಿ ನಡೆಸಲಾಗುತ್ತಿದೆ. ಇದೇ ಎಪ್ರಿಲ್ 23 ರಂದು ನಡೆಯುವ ಚುನಾವಣೆಯಲ್ಲಿ ಈಗಾಗಲೇ ನೋಂದಾಯಿಸಿಕೊಂಡ ಅರ್ಹ ಎಲ್ಲ ಮತದಾರರು ತಪ್ಪದೇ ಮತಚಲಾಯಿಸುವಂತೆ ಮನವಿ ಮಾಡಿಕೊಂಡರು.
ಉದ್ಘಾಟನಾ ಸಮಾರಂಭದಲ್ಲಿ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರಾದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಕೆ.ಲೀಲಾವತಿ, ಉಪವಿಭಾಗಾಧಿಕಾರಿ ತಿಪ್ಪೇಸ್ವಾಮಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಜಮಖಾನೆ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಶ್ರೀಮತಿ ಚೈತ್ರಾ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಂದಾನೆಪ್ಪ ವಡಗೇರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಎಸ್.ರಾಘವೇಂದ್ರಸ್ವಾಮಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಪೀರಜಾದೆ,
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ ಮಾಳಗೇರ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಮಲ್ಲಿಕಾರ್ಜುನ ಮಠದ, ಜಿಲ್ಲಾ ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿ ಎಂ.ಸಿ.ಪಾಟೀಲ,ತಾ.ಪಂ. ಇಓ ಶ್ರೀಮತಿ ಅನ್ನಪೂರ್ಣ ಮುದಕಮ್ಮನವರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು. ನೂರಕ್ಕೂ ಅಧಿಕ ಬೈಕ್ ಸವಾರರು ರ್ಯಾಲಿಯಲ್ಲಿ ಭಾಗವಹಿಸಿದ್ದರು.