ಮಾನವ ಸಂಪನ್ಮೂಲ ಅಭಿವೃದ್ಧಿಯಿಂದ ಪ್ರಗತಿ ಹೊಂದಲು ಸಾಧ್ಯ

ಗುಬ್ಬಿ

            ಮಾನವ ಸಂಪನ್ಮೂಲ ಅಭಿವೃದ್ಧಿಯಿಂದ ಮಾತ್ರ ಯಾವುದೇ ರಾಷ್ಟ್ರ ಎಲ್ಲಾ ಕ್ಷೇತ್ರಗಳಲ್ಲಿಯೂ ಪ್ರಗತಿ ಹೊಂದಲು ಸಾಧ್ಯವಿದ್ದು ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಮತ್ತು ಸಂಸ್ಕಾರಗಳನ್ನು ಕಲಿಸುವತ್ತ ಶಿಕ್ಷಕರು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದಾರೆ ಎಂದು ಡಿ.ಪಿ.ಎಂ.ಸಂಸ್ಥೆಯ ಅಧ್ಯಕ್ಷ ದಿಲೀಪ್‍ಕುಮಾರ್ ತಿಳಿಸಿದರು.

            ತಾಲ್ಲೂಕಿನ ಅಮ್ಮನಘಟ್ಟ ಸರ್ಕಾರಿ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಡಿ.ಪಿ.ಎಂ ಸಂಸ್ಥೆ ವತಿಯಿಂದ ವಿದ್ಯಾರ್ಥಿಗಳಿಗೆ ಲೇಖನ ಸಾಮಗ್ರಿಗಳನ್ನು ವಿತರಿಸಿ ಮಾತನಾಡಿದ ಅವರು, ಕಳೆದ ಹಲವು ವರ್ಷಗಳಿಂದಲೂ ಸಂಸ್ಥೆಯು ಹಲವು ಸಮಾಜಮುಖಿ ಸೇವಾ ಕಾರ್ಯಗಳನ್ನು ನಿರಂತರವಾಗಿ ಮಾಡುತ್ತಿದ್ದು, ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಲೇಖನ ಸಾಮಗ್ರಿಗಳನ್ನು ವಿತರಣೆ ಮಾಡುವ ಮೂಲಕ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯನ್ನು ಉತ್ತಮಪಡಿಸಲು ಚಿಂತನೆ ನಡೆಸಿರುವುದಾಗಿ ತಿಳಿಸಿದರು.

            ಶೈಕ್ಷಣಿಕ ಗುಣಮಟ್ಟ ಉತ್ತಮ ಪಡಿಸಲು ಸರ್ಕಾರ ಹಲವು ರೀತಿಯ ಸವಲತ್ತುಗಳನ್ನು ವಿದ್ಯಾರ್ಥಿಗಳಿಗೆ ನೀಡುತ್ತಿದ್ದು ಇದರ ಜೊತೆಗೆ ವಿವಿಧ ಸಂಘ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಹೆಚ್ಚಿನ ನೆರವು ನೀಡಿದರೆ ಶೈಕ್ಷಣಿಕ ಗುಣಮಟ್ಟವನ್ನು ಉತ್ತಮ ಪಡಿಸಲು ಸಾಧ್ಯವಾಗುತ್ತದೆ ಎಂದರು.

            ಮುಖ್ಯ ಶಿಕ್ಷಕ ಎಸ್.ಆರ್.ರುದ್ರೇಶ್ ಮಾತನಾಡಿ ಗ್ರಾಮೀಣ ವಿದ್ಯಾರ್ಥಿಗಳು ಉತ್ತಮ ಗುಣಮಟ್ಟದ ಶಿಕ್ಷಣ ಪಡೆಯುವ ಮೂಲಕ ನಮ್ಮ ಭವ್ಯ ಭಾರತವನ್ನು ಮತ್ತಷ್ಟು ಅಭಿವೃದ್ಧಿಪಥದತ್ತ ಕೊಂಡೊಯ್ಯುವಂತೆ ಕರೆನೀಡಿದ ಅವರು, ಭಾರತ ಸ್ವಾತತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ಸಾಧನೆಗಳನ್ನು ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಸಮಗ್ರವಾಗಿ ಅಧ್ಯಯನ ಮಾಡುವ ಮೂಲಕ ಸದೃಢ ಸಮಾಜ ನಿರ್ಮಾಣ ರೂವಾರಿಗಳಾಗಬೇಕು ಎಂದರು.

             ಗ್ರಾಮ ಪಂಚಾಯ್ತಿ ಅಧ್ಯಕ್ಷ ಬಸವರಾಜು ಮಾತನಾಡಿ ಆಧುನಿಕತೆ ಬೆಳೆದಂತೆ ನಮ್ಮ ಸಾಮಾಜಿಕ ಮೌಲ್ಯಗಳು ಮರೆಯಾಗುತ್ತಿರುವ ಸಂದರ್ಭದಲ್ಲಿ ಇಂದಿನ ವಿದ್ಯಾರ್ಥಿಗಳು ಉತ್ತಮ ಗುಣಮಟ್ಟದ ಶಿಕ್ಷಣ ಪಡೆದು ಆರೋಗ್ಯಕರ ಸಮಾಜ ನಿರ್ಮಾಣ ಮಾಡುವುದರ ಜೊತೆಗೆ ಸಾಮಾಜಿಕ ಮೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಉತ್ತಮ ಸಮಾಜ ನಿರ್ಮಾಣ ಮಾಡುವತ್ತ ಪ್ರಾಮಾಣಿಕ ಪ್ರಯತ್ನ ಮಾಡಬೇಕಿದೆ ಎಂದು ತಿಳಿಸಿದರು.

              ಕನ್ನಡ ಅಧ್ಯಾಪಕ ಬಿ.ಮಹಾಲಿಂಗಯ್ಯ ಮಾತನಾಡಿ ಶೈಕ್ಷಣಿಕ ಪ್ರಗತಿಯಿಂದ ಮಾತ್ರ ನಮ್ಮ ರಾಷ್ಟ್ರ ಅಭಿವೃದ್ಧಿಹೊಂದಲು ಸಾಧ್ಯವಿದ್ದು ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯುವ ಮೂಲಕ ರಾಷ್ಟ್ರದ ಸರ್ವಾಂಗೀಣ ಪ್ರಗತಿಗೆ ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ಕರೆನೀಡಿದರು.

               ಇದೆ ಸಂದರ್ಭದಲ್ಲಿ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಡಿ.ಪಿ.ಎಂ ಸಂಸ್ಥೆ ವತಿಯಿಂದ ವಿದ್ಯಾರ್ಥಿಗಳಿಗೆ ಲೇಖನ ಸಾಮಗ್ರಿಗಳನ್ನು ವಿತರಿಸಲಾಯಿತು ಮತ್ತು ವಿದ್ಯಾರ್ಥಿಗಳಿಂದ ಆಕರ್ಷಕವಾದ ಮನರಂಜನಾ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು.

               ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯ್ತಿ ಸದಸ್ಯೆ ರಾಜೇಶ್ವರಿ ಸಿದ್ದರಾಜು, ಎಸ್.ಡಿ.ಎಂ.ಸಿ.ಅಧ್ಯಕ್ಷ ಶಿವಲಿಂಗಯ್ಯ, ಡಿಪಿಎಂ ಸಂಸ್ಥೆಯ ಮೋಹನ್ ಕುಮಾರ್, ಮಲ್ಲಿಕ್ ಪ್ರಸಾದ್, ಅಧ್ಯಾಪಕರುಗಳಾದ ಎನ್.ಹೆಚ್.ಗಿರಿರಾಜು, ಎನ್.ಆರ್.ನಟರಾಜು, ಸಿ.ರಮೇಶ್, ಸಂಜೀವಯ್ಯ, ಸಿ.ಚೇತನ, ಜಯಶ್ರೀಯಂಡೀಗೇರಿ, ಪ್ರಸನ್ನ, ಜಹೀರ್ ಅಹಮದ್ ಮುಂತಾದವರು ಭಾಗವಹಿಸಿದ್ದರು.

ಪ್ರತಿದಿನದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿಯ facebook page like ಮಾಡಿ   

Recent Articles

spot_img

Related Stories

Share via
Copy link