ಮಂಗಳೂರು:

ಮುಂದಿನ(ಸೆಪ್ಟೆಂಬರ್) ತಿಂಗಳಿನಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ನಡೆಯಲಿದ್ದು, ಖಾಲಿ ಇರುವ ಎಲ್ಲ ಸ್ಥಾನಗಳನ್ನೂ ಭರ್ತಿ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದರು.
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಇರುವ ಕಾರಣದಿಂದ ಸಂಪುಟ ವಿಸ್ತರಣೆ ವಿಳಂಬವಾಗಿದೆ. ಚುನಾವಣೆ ಮುಗಿದ ತಕ್ಷಣದಲ್ಲೇ ಸಂಪುಟ ವಿಸ್ತರಣೆ ನಡೆಯಲಿದೆ. ನಿಗಮ, ಮಂಡಳಿಗಳ ಸ್ಥಾನಗಳಿಗೂ ನೇಮಕಾತಿ ಆಗಲಿದೆ’ ಎಂದರು.
ಕಾಂಗ್ರೆಸ್ ಪಕ್ಷ ಈಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಗೆಲುವು ಸಾಧಿಸುವ ದಿಸೆಯಲ್ಲಿ ಕೆಲಸ ಮಾಡುತ್ತಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಅತ್ಯಧಿಕ ಸ್ಥಾನಗಳನ್ನು ಗಳಿಸುವ ಮೂಲಕ ಹೆಚ್ಚಿನ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರ ಹಿಡಿಯಲಿದೆ. ಈ ಚುನಾವಣೆ ಬಳಿಕ ಲೋಕಸಭಾ ಚುನಾವಣಾ ತಯಾರಿ ಆರಂಭವಾಗಲಿದೆ. ಇದಕ್ಕಾಗಿ ಸೆಪ್ಟೆಂಬರ್ 1 ಮತ್ತು 2ರಂದು ಬೆಂಗಳೂರಿನಲ್ಲಿ ಪಕ್ಷದ ಹಿರಿಯ ಮುಖಂಡರ ಸಭೆ ನಿಗದಿ ಮಾಡಲಾಗಿದೆ ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








