ಬೆಂಗಳೂರು:
ದಕ್ಷಿಣ ಭಾರತದಲ್ಲಿ ಮುಂಗಾರು ಅಬ್ಬರ ಮುಂದುವರೆದಿದ್ದು, ಕೇರಳದಲ್ಲಿ ಅಬ್ಬರಿಸುತ್ತಿರುವ ಮುಂಗಾರು ಮಳೆ ಕರ್ನಾಟಕದ ಕರಾವಳಿಯಲ್ಲೂ ಅಬ್ಬರಿಸುತ್ತಿದೆ.
ಪರಿಣಾಮ ಕರ್ನಾಟಕದ ನದಿಗಳಲ್ಲಿನ ನೀರಿನ ಪ್ರಮಾಣ ಹೆಚ್ಚಾಗಿದ್ದು, ಪ್ರಮುಖವಾಗಿ ಕಾವೇರಿ ನದಿಯಲ್ಲಿ ಅಪಾರ ಪ್ರಮಾಣದಲ್ಲಿ ನೀರು ಹರಿಯುತ್ತಿದೆ. ಕೊಡಗು, ಭಾಗಮಂಡಲದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕಾವೇರಿ ಉಕ್ಕಿ ಹರಿಯುತ್ತಿದ್ದು, ಶಿವಮೊಗ್ಗ, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ನದಿ ಉಕ್ಕಿ ಹರಿಯುತ್ತಿದೆ.
ಕರ್ನಾಟಕದಲ್ಲಿ ಸುರಿಯುತ್ತಿರುವ ಭಾರಿ ಮಳೆ ಸುರಿಯುತ್ತಿರುವುದರಿಂದ ರಾಜ್ಯದ 14 ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾಸನ, ಕೊಡಗು, ಮೈಸೂರು, ಮಂಡ್ಯ, ದಾವಣಗೆರೆ, ಚಾಮರಾಜನಗರ, ಬೆಳಗಾವಿ, ಹಾವೇರಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಪ್ರಮುಖವಾಗಿ ಮಂಗಳೂರು, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಇಲ್ಲಿನ ಜನಜೀವನ ತೀವ್ರ ಅಸ್ತವ್ಯಸ್ಥಗೊಂಡಿದೆ. ರೈಲು ರಸ್ತೆ ಸಂಚಾರದಲ್ಲಿ ವ್ಯತ್ಯಯಲಾಗಿದ್ದು, ಮಂಗಳೂರು ವಿಮಾನ ನಿಲ್ದಾಣದಲ್ಲಿ ಹಲವು ವಿಮಾನಗಳ ಮಾರ್ಗಗಳನ್ನು ಬದಲಿಸಲಾಗಿದೆ. ಇನ್ನು ಪ್ರವಾಹ ಪರಿಸ್ಥಿತಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 237 ಕೋಟಿ ಹಣವನ್ನು ಮೀಸಲಿಟ್ಟಿದೆ.