ಬೆಂಗಳೂರು
ಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ – ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಉಭಯ ಪಕ್ಷಗಳ ನಾಯಕರು, ಕಾರ್ಯಕರ್ತರು ಬಂಡಾಯ ಎದ್ದಿದ್ದಾರೆ. ಇದೇ ಸಂದರ್ಭದಲ್ಲಿ ಮೈತ್ರಿ ಪಕ್ಷಗಳ ನಾಯಕರನ್ನು ಸೆಳೆಯಲು ಬಿಜೆಪಿ ನಾಯಕರು ತೀವ್ರ ಕಾರ್ಯಾಚರಣೆ ಆರಂಭಿಸಿದ್ದಾರೆ.
ರಾಮನಗರದಲ್ಲಿ ಜೆಡಿಎಸ್ ಜತೆ ಮೈತ್ರಿ ಮಾಡಿಕೊಳ್ಳುತ್ತಿರುವುದನ್ನು ವಿರೋಧಿಸಿರುವ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಪಕ್ಷದ ವಿರುದ್ಧ ಬಂಡಾಯ ಎದ್ದಿದ್ದಾರೆ. ಕಾಂಗ್ರೆಸ್‍ನ ಹಿರಿಯ ಮುಖಂಡ ಹಾಗೂ ಮೇಲ್ಮನೆ ಸದಸ್ಯ ಸಿ.ಎಂ. ಲಿಂಗಪ್ಪ ಅವರ ಪುತ್ರ ಎಲ್. ಚಂದ್ರಶೇಖರ್ ಬಿಜೆಪಿ ಸೇರಿದ್ದಾರೆ. ರಾಮನಗರ ಬಿಡಿಸಲಾಗದ ಕಗ್ಗಂಟಾಗಿ ಪರಿಣಮಿಸಿದೆ. ರಾಮನಗರದಲ್ಲಿ ಬಂಡಾಯದ ಬಾವುಟ ಹಾರಲಾರಂಭಿಸಿದೆ.
ಮಾಜಿ ಶಾಸಕ ಬಾಲಕೃಷ್ಣ ಶೀಘ್ರದಲ್ಲೇ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮಾಡಲು ಮಾಜಿ ಸಚಿವ ಚಲುವರಾಯ ಸ್ವಾಮಿ ಅವರಿಗೆ ಬಿಜೆಪಿ ಗಾಳ ಹಾಕಿದೆ.
ಈ ಮಧ್ಯೆ ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲಿ ಅಸಮಾಧಾನದ ದಳ್ಳುರಿ ಹೆಚ್ಚಾಗುತ್ತಿದೆ. ಇದರಿಂದಾಗಿ ಆಯಾ ಪಕ್ಷದ ಮುಖಂಡರಿಗೆ ಇದು ಸಮಸ್ಯೆಯಾಗಿ ಪರಿಣಮಿಸಿದೆ.
ಶಿವಮೊಗ್ಗ, ಬಳ್ಳಾರಿ, ಮಂಡ್ಯ ಲೋಕಸಭಾಕ್ಷೇತ್ರದ ಕಾಂಗ್ರೆಸ್ ನಾಯಕರು ಮೈತ್ರಿಗೆ ಅಪಸ್ವರ ತೆಗೆದಿದ್ದು, ಏಕಾಂಗಿ ಸ್ಪರ್ಧೆಗೆ ಒಲವು ತೋರಿದ್ದಾರೆ. ಮಂಡ್ಯ ಲೋಕಸಭೆ ಕ್ಷೇತ್ರದಲ್ಲಂತೂ ಜೆಡಿಎಸ್ ಜತೆ ಮೈತ್ರಿಗೆ ವಿರೋಧ ಕಂಡು ಬಂದಿದೆ. ಯಾವುದೇ ಕಾರಣಕ್ಕಾಗಿ ಜೆಡಿಎಸ್ ಜತೆ ಮೈತ್ರಿ ಬೇಡ ಎಂದು ಹೇಳುತ್ತಿದ್ದಾರೆ.
ಬರುವ 2019 ರ ಲೋಕಸಭಾ ಚುನಾವಣೆಯಲ್ಲಿಯೂ ಸಹ ನಾವು ಒಟ್ಟಾಗಿ ಹೋಗುತ್ತೇವೆ ಎಂದು ಕಾಂಗ್ರೆಸ್ ನಾಯಕರು ಘೊಷಣೆ ಮಾಡಿರುವುದು ಅಸಮಾಧಾನಕ್ಕೆ ಕಾರಣವಾಗಿದೆ.
ಬಂಡಾಯ ಬಿಜೆಪಿಯನ್ನೂ ಸಹ ಬಿಟ್ಟಿಲ್ಲ. ಜಮಖಂಡಿ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಪಕ್ಷದ ಮುಖಂಡ ಬಸವರಾಜ ಸಿಂಧೂರ ಅವರಿಗೆ ಟಿಕೆಟ್ ಕೈ ತಪ್ಪಿದ್ದರಿಂದ ಅವರು ಬಂಡಾಯದ ಬಾವುಟ ಹಾರಿಸಲು ಸಜ್ಜಾಗಿದ್ದಾರೆ. ಕಳೆದ ಎರಡು ವರ್ಷಗಳಿಂದಲೂ ಟಿಕೆಟ್‍ಗಾಗಿ ನಾನು ಪ್ರಯತ್ನಿಸುತ್ತಿದ್ದೇನೆ. ಈ ಮುಂಚೆ ನಿನಗೆ ಟಿಕೆಟ್ ನೀಡುತ್ತೇನೆ ಎಂದು ಹೇಳಿದ್ದರು. ಆದರೆ ಈಗ ಶ್ರೀಕಾಂತ ಕುಲಕರ್ಣಿ ಅವರ ಹೆಸರನ್ನು ಘೋಷಿಸಿದ್ದಾರೆ ಎಂದು ಬಹಿರಂಗವಾಗಿ ಅಸಮಾಧಾನ ತೋಡಿಕೊಂಡಿದ್ದಾರೆ.
ರಾಮನಗರ ಕ್ಷೇತ್ರದಲ್ಲಿ ಬಿಜೆಪಿ ಸೂಕ್ತ ಅಭ್ಯರ್ಥಿಗಳಿಗಾಗಿ ಹುಡುಕಾಟ ಆರಂಭಿಸಿದೆ. ವಿಧಾನಪರಿಷತ್ ಸದಸ್ಯ ಸಿ.ಎಂ.ಲಿಂಗಪ್ಪ ಅವರ ಪುತ್ರ ಎಲ್. ಚಂದ್ರಶೇಖರ್ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡಿದೆ. ಮಾಜಿ ಸಚಿವ ಸಿ.ಪಿ.ಯೋಗೀಶ್ವರ ಅವರ ಕಾರ್ಯಾಚರಣೆಯ ಫಲವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಚಂದ್ರಶೇಖರ್ ಬಿಜೆಪಿ ಸೇರಿದರು.
ಯಡಿಯೂರಪ್ಪ ಮಾತನಾಡಿ, ರಾಮನಗರ ಹಾಗೂ ಮಂಡ್ಯ ಲೋಕಸಭಾಕ್ಷೇತ್ರದ ಅಭ್ಯರ್ಥಿಯನ್ನು ಒಂದೆರಡು ದಿನಗಳಲ್ಲಿ ಅಂತಿಮಗೊಳಿಸುವುದಾಗಿ ತಿಳಿಸಿದರು.
ಚಂದ್ರಶೇಖರ್ ಅವರನ್ನೇ ಪಕ್ಷದ ಅಭ್ಯರ್ಥಿಯಾಗಿ ಘೋಷಿಸುವ ಸಾಧ್ಯತೆ ಹೆಚ್ಚಿದೆ. ಇನ್ನು ಮಂಡ್ಯ ಲೋಕಸಭೆ ಉಪಚುನಾವಣೆಗೆ ಸಂಬಂಧಿಸಿದಂತೆ ಸೂಕ್ತ ಅಭ್ಯರ್ಥಿಗಳ ಹುಡುಕಾಟ ನಡೆಸಿರುವ ಬಿಜೆಪಿ ಮಾಜಿ ಸಚಿವ ಚೆಲುವರಾಯಸ್ವಾಮಿ ಹಾಗೂ ಮಾಜಿ ಶಾಸಕ ಎಚ್.ಸಿ.ಬಾಲಕೃಷ್ಣ ಅವರನ್ನು ಸೆಳೆಯಲು ಮುಂದಾಗಿದೆ. ಬಿಜೆಪಿ ಹಿರಿಯ ಮುಖಂಡ ಆರ್.ಅಶೋಕ್, ಚೆಲುವರಾಯಸ್ವಾಮಿ ಅವರ ಜತೆ ಮಾತುಕತೆ ನಡೆಸಿ ಅವರ ಮನವೊಲಿಸಿದ್ದಾರೆ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








