ಬೆಂಗಳೂರು : ಯಾವುದೇ ಕಾರಣಕ್ಕೂ ಕೈಗಾರಿಕಾ ಉದ್ದೇಶಗಳಿಗಾಗಿ ರೈತರಿಂದ ಬಲವಂತವಾಗಿ ಜಮೀನನ್ನು ಭೂಸ್ವಾಧೀನ ಮಾಡಿಕೊಳ್ಳಬಾರದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಗುರುವಾರ ಕರ್ನಾಟಕ ಉದ್ಯೋಗ ಮಿತ್ರ ಕಚೇರಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿ ರೈತರ ನಿಯೋಗ ಹಾಗೂ ಜನಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದ ಅವರು, ಕೈಗಾರಿಕಾ ಸ್ಥಾಪನೆಗಳಿಗೆ ರೈತರಿಂದ ಒತ್ತಾಯಪೂರ್ವಕವಾಗಿ ಜಮೀನನ್ನು ಭೂಸ್ವಾಧೀನ ಮಾಡಿಕೊಳ್ಳಬಾರದು, ಇದು ನಮ್ಮ ಸರ್ಕಾರದ ಸ್ಪಷ್ಟ ನಿಲುವು ಎಂದು ಸ್ಪಷ್ಟಪಡಿಸಿದರು.
ಯಾರು ಸ್ವಯಂಪ್ರೇರಿತರಾಗಿ ಮುಂದೆ ಬಂದು ಜಮೀನು ನೀಡುತ್ತಾರೋ ಅದನ್ನು ಮಾತ್ರ ಭೂಸ್ವಾಧೀನ ಮಾಡಿಕೊಳ್ಳಬೇಕು, ಬಲವಂತವಾಗಿ ಇಲ್ಲವೇ ಬೆದರಿಕೆ ಹಾಕಿ ಭೂಮಿಯನ್ನು ವಶಪಡಿಸಿಕೊಳ್ಳಬಾರದು ಹಾಗೊಂದು ವೇಳೆ ರೈತರಿಂದ ದೂರು ಬಂದರೆ ಅಂತಹ ಅಧಿಕಾರಿಗಳ ಮೇಲೆ ಶಿಸ್ತುಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದರು.
ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ಹೋಬಳಿಯಲ್ಲಿ ಕೈಗಾರಿಕಾ ಉದ್ದೇಶಗಳಿಗೆ ಯಾವ ಯಾವ ರೈತರು ಜಮೀನು ನೀಡಲು ಮುಂದೆ ಬರುತ್ತಾರೋ, ತಹಶೀಲ್ದಾರ್, ಎಸಿ ಸೇರಿದಂತೆ ಕೆಐಎಡಿಬಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕೆಂದು ಸಚಿವ ನಿರಾಣಿ ಅವರು ಸೂಚಿಸಿದರು.
ರೈತರು ಜಮೀನು ನೀಡಲು ಸ್ವಇಚ್ಛೆಯಿಂದ ಮುಂದೆ ಬಂದರೆ ಅವರ ಸರ್ವೆ ನಂಬರ್ ಗಳನ್ನು ಪಡೆದುಕೊಂಡು ಮಾರುಕಟ್ಟೆ ದರದಂತೆ ಪರಿಹಾರ ನೀಡಬೇಕು, ಒಂದು ವೇಳೆ ಒಪ್ಪಿಗೆ ಇಲ್ಲದಿದ್ದರೆ ಆ ಜಮೀನನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡಬೇಕೆಂದು ನಿರ್ದೇಶನ ನೀಡಿದರು.
ಕೈಗಾರಿಕೆಗಳು ಸ್ಥಾಪನೆಯಾಗಬೇಕು ಇದರಿಂದ ರಾಜ್ಯದ ಆರ್ಥಿಕಾಭಿವೃದ್ಧಿ ಸ್ಥಾಪನೆಯಾಗುತ್ತದೆ, ಜೊತೆಗೆ ಉದ್ಯೋಗವೂ ಸೃಷ್ಟಿಯಾಗಲಿದೆ, ಒಂದನ್ನು ಪಡೆಯಬೇಕಾದರೆ ಮತ್ತೊಂದನ್ನು ತ್ಯಾಗ ಮಾಡಬೇಕಾಗುತ್ತದೆ. ನಮ್ಮ ರಾಜ್ಯದಲ್ಲೂ ಕೈಗಾರಿಕೆಗಳ ಬೆಳವಣಿಗೆಗೆ ಭೂಸ್ವಾಧೀನ ಮಾಡಿಕೊಳ್ಳುವುದು ಅನಿವಾರ್ಯ. ಆದರೆ ನಾವು ಅದಕ್ಕಾಗಿ ರೈತರನ್ನು ಒಕ್ಕಲೈಬ್ಬಿಸುವುದಿಲ್ಲ ಎಂದು ಪುನರುಚ್ಚರಿಸಿದರು. ನೀವು ಸಂತೋಷವಾಗಿ ನಿಮ್ಮ ನಿಮ್ಮ ಗ್ರಾಮಗಳಿಗೆ ತೆರಳಿ, ಮೊದಲು ಧರಣಿಯನ್ನು ಕೈ ಬಿಡಿ ಎಂದು ಸಚಿವರು ಮನವಿ ಮಾಡಿಕೊಂಡರು.
ಚನ್ನರಾಯಪಟ್ಟಣದಲ್ಲಿ 1777 ಎಕರೆ ಜಮೀನನ್ನು ಕೈಗಾರಿಕಾ ಉದ್ದೇಶಕ್ಕೆ ಗುರುತು ಮಾಡಲಾಗಿದೆ, ಇದಕ್ಕೆ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿದೆ. ರೈತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಭೂಸ್ವಾಧೀನ ಮಾಡಿಕೊಳ್ಳುತ್ತೇವೆ, ಇದಕ್ಕೆ ನಿಮ್ಮ ಒಪ್ಪಿಗೆ ಇಲ್ಲದೆ ಏನು ಮಾಡುವುದಿಲ್ಲ ಎಂದು ಸಚಿವ ನಿರಾಣಿ ಅವರು ಹೇಳಿದರು.
ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಅವರೊಂದಿಗೆ ಇನ್ನೊಂದು ಬಾರಿ ರೈತ ನಿಯೋಗ ಹಾಗೂ ಜನಪ್ರತಿನಿಗಳ ಸಭೆ ನಡೆಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದೇವೆ, ರೈತರು ಗಾಬರಿಪಡುವ ಅಗತ್ಯವಿಲ್ಲ, ಅಥವಾ ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ, ನಿಮ್ಮ ಹಿತ ಕಾಪಾಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುರುಗೇಶ್ ನಿರಾಣಿ ಹೇಳಿದರು.
ಸಭೆಯಲ್ಲಿ ಸಣ್ಣ ಕೈಗಾರಿಕೆಗಳ ಸಚಿವ ಎಂಟಿಬಿ ನಾಗರಾಜ್, ಚಿಕ್ಕಬಳ್ಳಾಪುರ ಸಂಸದ ಬಿ.ಎನ್.ಬಚ್ಚೇಗೌಡ, ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ.ರಮಣರೆಡ್ಡಿ, ಕೆಐಎಡಿಬಿ ಸಿಇಒ ಶಿವಶಂಕರ್ ರೈತ ಮುಖಂಡರು ಮತ್ತಿತರರು ಉಪಸ್ಥಿತರಿದ್ದರು.
ಪ್ರಮುಖ ಅಂಶಗಳು :
- ಕೆಐಎಡಿಬಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ
- ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತ ನಿಯೋಗದಿಂದ ಭೇಟಿ
- ರೈತರಿಂದ ದೂರು ಬಂದರೆ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ
- ಭೂಮಿ ನೀಡುವವರಿಗೆ ಸರ್ಕಾರಿ ಉದ್ಯೋಗ
- ಸ್ವಯಂಪ್ರೇರಿತರಾಗಿ ಜಮೀನು ನೀಡುವವರ ಭೂಮಿ ಸ್ವಾಧೀನ
- ಒಂದನ್ನು ಪಡೆಯಬೇಕಾದರೆ, ಮತ್ತೊಂದನ್ನು ತ್ಯಾಗ ಮಾಡುವುದು ಅನಿವಾರ್ಯ