ಲಿಂಗತ್ವ ಅಲ್ಪಸಂಖ್ಯಾತರು ಕಡ್ಡಾಯವಾಗಿ ಮತದಾನ ಮಾಡಬೇಕು: ಮಾಂಕಾಳಪ್ಪ

ತುಮಕೂರು

      ಮತದಾರರ ಪಟ್ಟಿಯಲ್ಲಿರುವ ಲಿಂಗತ್ವ ಅಲ್ಪಸಂಖ್ಯಾತರು ಹಾಗೂ ದಮನಿತ ಮಹಿಳೆಯರು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಮಾಂಕಾಳಪ್ಪ ಕರೆ ನೀಡಿದರು.

        ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಸಹಯೋಗದಲ್ಲಿ ನಗರದ ಬಾಲಭವನದಲ್ಲಿಂದು ಲಿಂಗತ್ವ ಅಲ್ಪಸಂಖ್ಯಾತರು ಹಾಗೂ ದಮನಿತ ಮಹಿಳೆಯರಿಗಾಗಿ ಏರ್ಪಡಿಸಿದ್ದ ಮತದಾನದ ಅರಿವು ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, 18 ವರ್ಷ ಮೇಲ್ಪಟ್ಟ ಎಲ್ಲಾ ಲಿಂಗತ್ವ ಅಲ್ಪಸಂಖ್ಯಾತರು ಹಾಗೂ ದಮನಿತ ಮಹಿಳೆಯರು ಮತಪಟ್ಟಿಯಲ್ಲಿ ತಪ್ಪದೇ ತಮ್ಮ ಹೆಸರನ್ನು ನೋಂದಾಯಿಸಿ ಮತದಾನ ಮಾಡಬೇಕು. ಇದೇ 18ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡುವ ಮೂಲಕ ತಮ್ಮ ಹಕ್ಕುನ್ನು ಚಲಾಯಿಸಬೇಕು ಎಂದು ತಿಳಿಸಿದರು.

       ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಸ್. ನಟರಾಜ್ ಪ್ರಾಸ್ತಾವಿಕವಾಗಿ ಮಾತನಾಡಿ, ಲಿಂಗತ್ವ ಅಲ್ಪಸಂಖ್ಯಾತರು ಹಾಗೂ ದಮನಿತ ಮಹಿಳೆಯರು ತಮ್ಮ ಮತದಾರರ ಗುರುತಿನ ಚೀಟಿಯನ್ನು ಪಡೆಯುವ ವಿಧಾನದ ಮಾಹಿತಿಯನ್ನು ಅಂಗನವಾಡಿ ಕಾರ್ಯಕರ್ತೆಯರು/ ಗ್ರಾಮ ಪಂಚಾಯಿತಿ/ತಾಲ್ಲೂಕು ಪಂಚಾಯಿತಿ/ಜಿಲ್ಲಾ ಪಂಚಾಯಿತಿ ಹಾಗೂ ತಮ್ಮ ಊರಿನ ಶಾಲೆಯ ಮುಖ್ಯೋಪಧ್ಯಾಯರಿಂದ ಪಡೆಯಬಹುದು ಎಂದರು.

       ಸಮಾಜ ಕಲ್ಯಾಣ ಇಲಾಖೆ, ಜಂಟಿ ನಿರ್ದೇಶಕ ದೇವರಾಜ್ ಮಾತನಾಡಿ 18 ವರ್ಷ ಮೇಲ್ಪಟ್ಟ ಲಿಂಗತ್ವ ಅಲ್ಪಸಂಖ್ಯಾತರು ಹಾಗೂ ದಮನಿತ ಮಹಿಳೆಯರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಸೇರಿಸಲು ಇಲಾಖೆ ವತಿಯಿಂದ ಅಗತ್ಯ ಸಹಕಾರವನ್ನು ನೀಡಲಾಗುವುದು ಹಾಗೂ ಈ ಮಾಹಿತಿಯನ್ನು ಬಹಿರಂಗಪಡಿಸದೆ ಗೌಪ್ಯತೆ ಕಾಪಾಡಲಾಗುವುದು ಎಂದು ತಿಳಿಸಿದರಲ್ಲದೆ, ಸಖೀ ಬೂತ್ ಹಾಗೂ ವಿದ್ಯುನ್ಮಾನ ಮತಯಂತ್ರದಲ್ಲಿ ಮತ ಚಲಾಯಿಸುವ ವಿಧಾನವನ್ನು ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಿದರು.

        ಸಹಬಾಳ್ವೆ ಸಂಘದ ಅಧ್ಯಕ್ಷರಾದ ದೀಪಿಕಾ ಮಾತನಾಡಿ, ಲಿಂಗತ್ವ ಅಲ್ಪಸಂಖ್ಯಾತರೆಲ್ಲರೂ ಈಗಾಗಲೇ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿರುತ್ತಾರೆ. ಇವರಲ್ಲಿ ಕೆಲವರು ಮಾತ್ರ ಲಿಂಗತ್ವ ಅಲ್ಪಸಂಖ್ಯಾತರೆಂದು ಗುರುತಿಸಿಕೊಂಡಿದ್ದು, ಇನ್ನೂ ಕೆಲವರು ಮನೆಯವರ ಬಳಿ, ನೆರೆಹೊರೆಯವರೊಂದಿಗೆ ಗೌಪ್ಯತೆಯನ್ನು ಕಾಪಾಡಿಕೊಂಡು ಗಂಡಸರೆಂದೇ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿರುತ್ತಾರೆ. ಮತದಾರರ ಪಟ್ಟಿಗೆ ಲಿಂಗತ್ವ ಅಲ್ಪಸಂಖ್ಯಾತರನ್ನು ಸೇರ್ಪಡೆ ಮಾಡಲು ಸಹಬಾಳ್ವೆ ಸಂಘದ ವತಿಯಿಂದ ಸಂಪೂರ್ಣ ಸಹಕಾರ ಇಲಾಖೆಗೆ ನೀಡುತ್ತೇವೆಂದು ತಿಳಿಸಿದರು.

        ನಿರ್ಮಿತಿ ಕೇಂದ್ರದ ರಾಜಶೇಖರ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ರಾಜಕುಮಾರ್, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಜಿಲ್ಲಾ ಅಭಿವೃದ್ಧಿ ನಿರೀಕ್ಷಕಿ ಜಾಹ್ನವಿ ಎಸ್. ಮತ್ತಿತರರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link