ದಾವಣಗೆರೆ:
ವಿದ್ಯಾರ್ಥಿಗಳು ವಿದ್ಯಾರ್ಥಿ ದೆಸೆಯಲ್ಲಿ ಪಡೆದ ಜ್ಞಾನಾರ್ಜನೆಯನ್ನು ಸಮಾಜದ ಒಳಿತಿಗೆ ಮೀಸಲಿಡಬೇಕೆಂದು ರಾಮಕೃಷ್ಣ ಆಶ್ರಮದ ತ್ಯಾಗೀಶ್ವರಾನಂದ ಮಹಾರಾಜ್ ಕರೆ ನೀಡಿದರು.
ನಗರದ ಬಿಐಇಟಿ ಕಾಲೇಜಿನ ಆವರಣದಲ್ಲಿರುವ ಎಸ್.ಎಸ್.ಮಲ್ಲಿಕಾರ್ಜುನ್ ಸಾಂಸ್ಕೃತಿಕ ಭವನದಲ್ಲಿ ಏರ್ಪಡಿಸಿದ್ದ ವಿಜ್ಞಾನ ವೇದಿಕೆಯ ವರ್ಷದ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಹಾಗೂ ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಪ್ರವೇಶ ಮತ್ತು ವಿಕಸನ ಶಿಬಿರ ಸಮಾರೋಪ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಉತ್ತಮ ಚಾರಿತ್ರಿಕ ಪುಸ್ತಕಗಳನ್ನು ಓದುವುದರ ಮೂಲಕ ಜ್ಞಾನಸಂಪಾದಿಸಬೇಕು. ನೀವು ಸಂಪಾದಿಸಿದ ಜ್ಞಾನದಿಂದ ಸಮಾಜದ ಒಳಿತಿಗೆ ಮೀಸಲಿಡಬೇಕು. ವಿದ್ಯಾರ್ಥಿಗಳು ಸಕಾರಾತ್ಮಕ ಚಿಂತನೆಗಳನ್ನು ರೂಢಿಸಿಕೊಳ್ಳಬೇಕು. ಸ್ವಾಮಿ ವಿವೇಕಾನಂದರ ವಾಣಿಯಂತೆ ನೀವು ಕಂಡ ಕನಸನ್ನು ಗುರಿ ಮುಟ್ಟುವವರಿಗೂ ತಲುಪಬೇಕು. ಒಳ್ಳೆಯ ಚಿಂತನೆಗಳನ್ನು ಮೈಗೂಡಿಸಿಕೊಳ್ಳಬೇಕು. ಜೀವನದಲ್ಲಿ ಕೇವಲ ಹಣ ಆಸ್ತಿ ಗಳಿಸಿದರೆ ಸಾಲದು. ಒಳ್ಳೆಯ ವ್ಯಕ್ತಿತ್ವವಿರಬೇಕೆಂದು ಹೇಳಿದರು.
ಕಾಲೇಜಿನ ನಿರ್ದೇಶಕರಾದ ಪ್ರೊ.ವೈ.ವೃಷಬೇಂದ್ರಪ್ಪ ಮಾತನಾಡಿ, ವಿಜ್ಞಾನ-ತಂತ್ರಜ್ಞಾನದ ಮೂಲಕ ಸಮಾಜದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನಿಸಬೇಕು. ಆಗ ನಮ್ಮ ಬದುಕು ಸಾರ್ಥಕವಾಗಲು ಸಾಧ್ಯವಾಗುತ್ತದೆ. ಪ್ರತಿಯೊಬ್ಬರು ಸ್ವಾಮಿವೇಕಾನಂದರ ಚಿಂತನೆಗಳನ್ನು ಮೈಗೂಡಿಸಿಕೊಳ್ಳಬೇಕು ಎಂದರು.
ಪ್ರಾಚಾರ್ಯರಾದ ಡಾ.ಎಸ್.ಸುಬ್ರಮಣ್ಯ ಸ್ವಾಮಿ ಮಾತನಾಡಿ, ವಿದ್ಯಾರ್ಥಿಗಳು ಸವಾಲುಗಳನ್ನು ಧೈರ್ಯವಾಗಿ ಸ್ವೀಕರಿಸುವ ಮನೋಭಾವನೆ ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳು ಸುಸಂಸ್ಕೃತರಾಗಿ ಉತ್ತಮ ವ್ಯಕ್ತಿತ್ವ ಹೊಂದಿರಬೇಕೆಂದರು.
ಕಾರ್ಯಕ್ರಮದಲ್ಲಿ ಶಿಬಿರದ ಆಯೋಜಕರಾದ ಡಾ.ಕೆ.ಎಸ್.ಬಸವರಾಜಪ್ಪ ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ