ಸಾಮಾಜಿಕ ಸಾಮರಸ್ಯ ಕದಡದಂತೆ ಕಟ್ಟೆಚ್ಚರ ವಹಿಸಿ :ಸಿಎಂ ಸಿದ್ದರಾಮಯ್ಯ

ಬೆಂಗಳೂರು :

     ಸಾಮಾಜಿಕ ಜಾಲತಾಣಗಳಲ್ಲಿ ಸಾಮರಸ್ಯವನ್ನು ಕದಡುವಂತಹ, ತೇಜೋವಧೆ ಮಾಡುವ, ಪ್ರಚೋದನಕಾರಿ ಪೋಸ್ಟ್ಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದೇಶನ ನೀಡಿದ್ದಾರೆ.

    ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಪೊಲೀಸರು ಬೆಂಗಳೂರು ನಗರದ ಸಂಚಾರ ಸಮಸ್ಯೆ ನಿವಾರಣೆ ಹಾಗೂ ಸೈಬರ್ ಅಪರಾಧಗಳ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಜನ ಬದಲಾವಣೆಯ ನಿರೀಕ್ಷೆಯೊಂದಿಗೆ ಹೊಸ ಸರ್ಕಾರವನ್ನು ಚುನಾಯಿಸಿದ್ದಾರೆ. ಅವರ ಸಮಸ್ಯೆಗಳಿಗೆ ಸ್ಪಂದಿಸಿ ಅಧಿಕಾರಿಗಳು ಕೆಲಸ ಮಾಡಬೇಕು, ಮಾದಕ ವಸ್ತುಗಳ ಹಾವಳಿಯನ್ನು ತಡೆಗಟ್ಟಬೇಕು. ಹೊಯ್ಸಳ ಗಸ್ತುವಾಹನ ಸದಾ ಜಾಗೃತವಾಗಿರುವ ಮೂಲಕ ಅಪರಾಧಗಳನ್ನು ತಡೆಗಟ್ಟಬೇಕು ಎಂದು ಸೂಚಿಸಿದರು.

    ಪೊಲೀಸ್ ಠಾಣೆಗಳಿಗೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಬೇಕು. ಪೊಲೀಸ್ ಠಾಣೆಗೆ ಸಮಸ್ಯೆ ಪರಿಹಾರಕ್ಕಾಗಿ ಬರುವ ಸಾರ್ವಜನಿಕರನ್ನು ಅಪರಾಧಿಗಳಂತೆ ಕಾಣದೆ ಸೌಜನ್ಯದಿಂದ ವರ್ತಿಸಬೇಕು. ಅವರ ಸಮಸ್ಯೆಗಳನ್ನು ಬಗೆಹರಿಸಿ ನ್ಯಾಯ ಒದಗಿಸಬೇಕು ಎಂದು ನಿರ್ದೇಶನ ನೀಡಿದರು.

    ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆಯುವ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಲು ಪೊಲೀಸ್ ಅಧಿಕಾರಿಗಳು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ಗೂಂಡಾಗಿರಿ, ಅನಧಿಕೃತ ಕ್ಲಬ್‌ಗಳ ಚಟುವಟಿಕೆಗಳು, ಡ್ರಗ್ ಮಾಫಿಯಾವನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ. ಇವುಗಳಿಗೆ ಅವಕಾಶ ನೀಡಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.

   ಉತ್ತಮವಾಗಿ ಕೆಲಸ ಮಾಡುವವರಿಗೆ ಶಹಬ್ಬಾಶ್‌ಗಿರಿ ನೀಡುತ್ತೇವೆ. ಕರ್ತವ್ಯಲೋಪ ಎಸಗಿದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಬೆಂಗಳೂರು ನಗರದ ಸಂಚಾರ ದಟ್ಟಣೆ ನಿವಾರಣೆ ಕುರಿತು ಪ್ರತ್ಯೇಕ ಸಭೆ ನಡೆಸಿ ಚರ್ಚಿಸುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.

    ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಕೆ.ಜೆ. ಜಾರ್ಜ್, ಕೆ.ಹೆಚ್. ಮುನಿಯಪ್ಪ, ಬಿ.ಝಡ್. ಜಮೀರ್ ಅಹ್ಮದ್ ಖಾನ್, ಎಂ.ಪಿ. ಪಾಟೀಲ್, ಸತೀಶ್ ಜಾರಕಿಹೊಳಿ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್ ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap