ಗುಬ್ಬಿ
ಪಕ್ಷವನ್ನು ಸದೃಢಗೊಳಿಸುವುದರ ಜೊತೆಗೆ ಪಟ್ಟಣ ಪಂಚಾಯ್ತಿ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಸಂಘಟಿತರಾಗಿ ಒಗ್ಗಟ್ಟಿನಿಂದ ಕೆಲಸ ನಿರ್ವಹಿಸುವಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಕೆಂಚಮಾರಯ್ಯ ತಿಳಿಸಿದರು. ಪಟ್ಟಣದ ಕಾಂಗ್ರೆಸ್ ಭವನದಲ್ಲಿ ಪಟ್ಟಣ ಪಂಚಾಯತಿ ಚುನಾವಣೆಗೆ ಪಕ್ಷದಿಂದ ಸ್ಪರ್ಧಿಸಿರುವ ಅಭ್ಯರ್ಥಿಗಳಿಗೆ ಬಿ.ಫಾರಂ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿ ಸಮ್ಮಿಶ್ರ ಸರಕಾರವಿದ್ದರೂ ಸಹ ಸ್ಥಳೀಯ ಚುನಾವಣೆಯಲ್ಲಿ ಯಾವುದೇ ಹೊಂದಾಣಿಕೆ ಮಾಡಿಕೊಂಡು ಚುನಾವಣೆ ಮಾಡದೆ, ನಮ್ಮ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿ ಚುನಾವಣೆ ಮಾಡುತ್ತಿದ್ದೇವೆ. ಪಕ್ಷದ ಮುಖಂಡರು ಅಭ್ಯರ್ಥಿಗಳ ಗೆಲುವಿಗೆ ಪ್ರಾಮಾಣಿಕ ಪ್ರಯತ್ನ ಮಾಡಬೇಕಿದೆ ಎಂದು ಕರೆನೀಡಿದರು.
ಕಾಂಗ್ರೆಸ್ ಪಕ್ಷಕ್ಕೆ ತನ್ನದೆ ಆದ ಮಹತ್ವವಿದ್ದು, ಪಕ್ಷದ ಎಲ್ಲಾ ಮುಖಂಡರು ಮತ್ತು ಕಾರ್ಯಕರ್ತರು ಸಂಘಟಿತರಾಗಿ ಹೋರಾಟ ಮಾಡಿದರೆ ಪಟ್ಟಣ ಪಂಚಾಯ್ತಿ ಚುನಾವಣೆಯಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವುದರ ಜೊತೆಗೆ, ಪಟ್ಟಣ ಪಂಚಾಯ್ತಿ ಅಧಿಕಾರವನ್ನು ಪಡೆಯಬಹುದಾಗಿದೆ. ಪಕ್ಷದಿಂದ ಸ್ಥಳೀಯರಾದ ಮತ್ತು ಸಮರ್ಥವಾದ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು ಈ ಬಾರಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ತಿಳಿಸಿದರು.
ಕಾಂಗ್ರೆಸ್ ಮುಖಂಡ ಶಂಕರಾನಂದ ಮಾತನಾಡಿ, ಪಟ್ಟಣ ಪಂಚಾಯ್ತಿ ಚುನಾವಣೆಯನ್ನು ಸಮರ್ಥವಾಗಿ ಎದುರಿಸಲು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಸಂಘಟಿತರಾಗಿ ಹೋರಾಟ ಮಾಡುವಂತೆ ಕರೆ ನೀಡಿದ ಅವರು ಸ್ಥಳೀಯರಾದ ಮತ್ತು ಸಮರ್ಥವಾದ ಅಭ್ಯರ್ಥಿಗಳಿಗೆ ಪಕ್ಷದಿಂದ ಟಿಕೆಟ್ ನೀಡಲಾಗಿದ್ದು, ಈ ಬಾರಿ ನಿರೀಕ್ಷೆಗೂ ಮೀರಿ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ತಾಲ್ಲೂಕಿನ ಕೆರೆಗಳಿಗೆ ನೀರನ್ನು ತುಂಬಿಸುವ ಕೆಲಸವನ್ನು ತುರ್ತಾಗಿ ನಮ್ಮ ಪಕ್ಷದ ಎಲ್ಲರೂ ಸಹ ಒಂದಾಗಿ ಮಾಡಬೇಕಾಗಿದೆ. ಸಮ್ಮಿಶ್ರ ಸರಕಾರದಲ್ಲಿ ನಮ್ಮ ಪಾಲು ಸಹ ಇದ್ದು ಇಬ್ಬರೂ ಸೇರಿ ರೈತರ ಜೀವನಾಡಿಯಾಗಿರುವ ಕೆರೆಗಳನ್ನು ತುಂಬಿಸುವ ಕೆಲಸವನ್ನು ಮಾಡುವುದರ ಜೊತೆಗೆ ಪಟ್ಟಣವನ್ನು ಸಮಗ್ರವಾಗಿ ಅಭಿವೃದ್ದಿ ಮಾಡಬೇಕಾಗಿದೆ ಎಂದು ತಿಳಿಸಿದರು.
ಮುಖಂಡ ಜಿ.ಎಸ್.ಪ್ರಸನ್ನಕುಮಾರ್ ಮಾತನಾಡಿ, ಈ ಬಾರಿ ಪಟ್ಟಣ ಪಂಚಾಯತಿ ಚುನಾವಣೆಗೆ ಉತ್ತಮ ಅವಕಾಶವಿದ್ದು, ಎಲ್ಲರೂ ಒಟ್ಟಿಗೆ ಸೇರಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬಂದರೆ, ಮುಂದೆ ಬರುವಂತಹ ಲೋಕಸಭಾ ಚುನಾವಣೆಗೂ ಸಹ ಇದು ಅನುಕೂಲವಾಗುತ್ತದೆ ಎಂದರು.
ಇದೇ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯದರ್ಶಿ ಮತ್ತು ಚುನಾವಣಾ ವೀಕ್ಷಕ ಹನುಮಂತಯ್ಯ, ಜಿಲ್ಲಾ ಮುಖಂಡರಾದ ಸುಜಾತ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರುಗೇನಹಳ್ಳಿ ನರಸಿಂಹಯ್ಯ, ನಿಟ್ಟೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಿಂಬೆಕಟ್ಟೆಜಯಣ್ಣ, ಮುಖಂಡರಾದ ಹೊನ್ನಗಿರಿಗೌಡ, ಬಿ.ಆರ್.ಭರತ್‍ಗೌಡ, ಮಹಮದ್ ಸಾಧಿಕ್, ಅಜಯ್ ಕುಮಾರ್, ಸಲಿಂಪಾಷಾ, ಸಿ.ಆರ್.ಚಿಕ್ಕರಂಗಣ್ಣ, ಸೇರಿದಂತೆ ಪಟ್ಟಣ ಪಂಚಾಯ್ತಿ ಚುನಾವಣೆಗೆ ಸ್ಪರ್ಧಿಸಿರುವ 17 ವಾರ್ಡಿನ ಅಭ್ಯರ್ಥಿಗಳು ಹಾಗೂ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.
