ಬಳ್ಳಾರಿ:
ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ನೈರ್ಮಲ್ಯತೆಗೆ ಸ್ವಚ್ಛ ಭಾರತ ಅಭಿಯಾನ ಒಂದು ವರದಾನವಾಗಿದ್ದು, ಈ ಯೋಜನೆಯನ್ನು ಸದ್ಬಳಕೆ ಮಾಡುವಲ್ಲಿ ನಾಗರೀಕರ ಪಾತ್ರ ಪ್ರಮುಖವಾಗಿದೆ ಎಂದು ಜಿಪಂ ಅಧ್ಯಕ್ಷೆ ಭಾರತಿ ತಿಮ್ಮಾರೆಡ್ಡಿ ಅವರು ಅಭಿಪ್ರಾಯಪಟ್ಟರು.
ಭಾರತ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಕ್ಷೇತ್ರ ಜನಸಂಪರ್ಕ ಕಾರ್ಯಾಲಯ, ಜಿಪಂ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ತಾಪಂ, ಬೆಳಗಲ್ಲು ಗ್ರಾಪಂ ಇವರ ಸಂಯುಕ್ತ ಆಶ್ರಯದಲ್ಲಿ ಬುಧುವಾರರಂದು ಬೆಳಗಲ್ಲು ಗ್ರಾಮದ ಸಮುದಾಯ ಭವನದಲ್ಲಿ ಏರ್ಪಡಿಸಿದ್ದ ಸ್ವಚ್ಛ ಭಾರತ ಕುರಿತು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಖಾನೆ ಹಾಗೂ ಪ್ಲಾಸ್ಟಿಕ್ ಬಳಕೆಯಿಂದಾಗಿ ಪರಿಸರ ಹಾಗೂ ವಾಯು ಮಾಲಿನ್ಯವಾಗುತ್ತಿದೆ. ಈ ಹಿನ್ನಲೆಯಲ್ಲಿ ಮಹಾತ್ಮಗಾಂಧಿಜೀ ಹಾಗೂ ಪ್ರಧಾನಿ ನರೇಂದ್ರ ಮೋದಿಯವರು ಸ್ವಚ್ಛ ಭಾರತದ ಬಗ್ಗೆ ಕನಸು ಕಂಡಿದ್ದಾರೆ. ಅದನ್ನು ನನಸುಮಾಡುವಲ್ಲಿ ಅಧಿಕಾರಿಗಳ ಜೊತೆಗೆ ಸಾರ್ವಜನಿಕರು ಸಹ ಕೈಜೋಡಿಸಬೇಕೆಂದು ಹೇಳಿದರು.
ಜಿಪಂ ಉಪಾಧ್ಯಕ್ಷೆ ದೀನಾ ಮಂಜುನಾಥ್ ಅವರು ಮಾತನಾಡಿ ಆರೋಗ್ಯವೇ ಮಹಾಭಾಗ್ಯ ಎನ್ನುವ ಗಾಧೆಯಂತೆ ಎಲ್ಲರೂ ಸ್ವಚ್ಛತೆಯ ಕಡೆಗೆ ಗಮನಹರಿಸಿದಲ್ಲಿ ಆರೋಗ್ಯ ಸುಧಾರಿಸುವಲ್ಲಿ ಯಶಸ್ವಿ ಕಾಣಬಹುದು ಎಂದು ಹೇಳಿದ ಅವರು ಮಹಿಳೆಯರು ತಮ್ಮ ಮನೆಯ ಜೊತೆಗೆ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಂಡಲ್ಲಿ ಗ್ರಾಮೀಣ ಜನರ ಆರೋಗ್ಯ ಸುಧಾರಿಸಲಿದೆ ಎಂದರು.
ಕ್ಷೇತ್ರ ಜನ ಸಂಪರ್ಕ ಕಾರ್ಯಾಲಯದ ಉಪನಿರ್ದೇಶಕರಾದ ಜಿ.ಡಿ.ಹಳ್ಳಿಕೇರಿ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕ್ಷೇತ್ರ ಪ್ರಚಾರ ಸಹಾಯಕರಾದ ಎನ್.ರಾಮಕೃಷ್ಣ ರವರು ಸ್ವಾಗತಿಸಿ ವಂದಿಸಿದರು.
ಬೆಳಗಲ್ಲು ಗ್ರಾಪಂ ಅಧ್ಯಕ್ಷೆ ವಸಂತ ಅವರು ಅಧ್ಯಕ್ಷತೆ ವಹಿಸಿದ್ದರು. ಜಿಪಂ ಅಧಿಕಾರಿ ಕೆ.ಆರ್.ಪ್ರಕಾಶ್, ತಾಪಂ ಸಹಾಯಕ ನಿರ್ದೇಶಕ ಬಸವರಾಜ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಸುಶೀಲ, ಮಹಿಳಾ ಆರೋಗ್ಯ ಸಹಾಯಕಿ ಶಾರದ, ಗ್ರಾಪಂ ಅಭಿವೃದ್ಧಿ ಅಧಿಕಾರಿ ಉದ್ದಾನಗೌಡ ಮತ್ತಿತರರು ಇದ್ದರು.
ಜಾಗೃತಿ ಜಾಥಾ:
ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾಗಿದ್ದ ಜಾಗೃತಿ ಜಾಥವನ್ನು ಜಿಪಂ ಉಪಾಧ್ಯಕ್ಷೆ ದೀನಾ ಮಂಜುನಾಥ್ ಅವರು ಚಾಲನೆ ನೀಡಿದರು. ಜಾಥಾವು ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ಶಾಲಾ ಮಕ್ಕಳಿಗಾಗಿ ಏರ್ಪಡಿಸಿದ್ದ, ಚಿತ್ರ ಕಲಾ ಸ್ಪರ್ಧೆ, ಭಾಷಣ ಸ್ಪರ್ಧೆ ಹಾಗೂ ರಸಪ್ರಶ್ನೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.
