ಕಾರವಾರ
ತರಕಾರಿ ಕೊಂಡೊಯ್ಯುತ್ತಿದ್ದ ಲಾರಿ ಪಲ್ಟಿಯಾಗಿ 10 ಜನರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 63ರ ಗುಳ್ಳಾಪುರ ಘಟ್ಟ ಭಾಗದಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದೆ. 15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ತರಕಾರಿ ತುಂಬಿದ್ದ ಲಾರಿಯಲ್ಲಿ 25 ಜನರು ಪ್ರಯಾಣಿಸುತ್ತಿದ್ದರು. ತರಕಾರಿ ತುಂಬಿದ್ದ ಲಾರಿ ಸವಣೂರಿನಿಂದ ಕುಮಟಾಗೆ ತೆರಳುತ್ತಿತ್ತು.
ಮೃತರು ಹಾವೇರಿ ಜಿಲ್ಲೆ ಸವಣೂರು ಮೂಲದವರೆಂಬ ಮಾಹಿತಿ ದೊರೆತಿದೆ. ನಸುಕಿನ ಜಾವ ರಸ್ತೆಯಲ್ಲಿ ಮಂಜು ಮುಸುಕಿದ್ದರಿಂದ ಲಾರಿ ಪಲ್ಟಿಯಾಗಿದೆ. ಘಟನಾ ಸ್ಥಳಕ್ಕೆ ಯಲ್ಲಾಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕ್ರೇನ್ ಮೂಲಕ ಶವಗಳನ್ನು ಹೊರತೆಗೆಯಲಾಗುತ್ತಿದೆ.
