ಬೆಂಗಳೂರು:
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಸೋಮವಾರ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ವೇಗವಾಗಿ ಬರುತ್ತಿದ್ದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಮತ್ತೊಂದು ಬದಿಯಲ್ಲಿ ಸಾಗುತ್ತಿದ್ದ ಎರಡು ಕಾರುಗಳಿಗೆ ಡಿಕ್ಕಿಯಾಗಿದೆ. ಈ ವೇಳೆ ತೀವ್ರ ಗಾಯಗೊಂಡ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರೆ, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಮದ್ದೂರಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಮಸೂದ್ ಹಾಗೂ ಅಯಾನ್ ಎಂಬವರು ಮೃತಪಟ್ಟಿದ್ದಾರೆ. ಖುಷಿ, ಚಿಕ್ಕು, ಮುಜಾಯಿದ್ ಪಾಷ, ಬಸವರಾಜು, ಪಾರ್ವತಿ ಎಂಬವರು ಗಂಭೀರ ಗಾಯಗೊಂಡಿದ್ದಾರೆಂದು ವರದಿಗಳು ತಿಳಿಸಿವೆ. ಅಪಘಾತದ ಬಳಿಕ ಹೈವೇ ರಸ್ತೆಯನ್ನು ಬಂದ್ ಮಾಡಿ ಸರ್ವಿಸ್ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿತ್ತು.
ಬೆಂಗಳೂರು ನಗರದಲ್ಲೇ ಸಂಭವಿಸಿದ ಮತ್ತೊಂದು ಭೀಕರ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಮೆಯೋಹಾಲ್ ಜಂಕ್ಷನ್‌ನಲ್ಲಿ ನಿಂತಿದ್ದ ಕಾರಿಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದಿದ್ದು, ಪರಿಣಾಮ ಕಾರು ಮುಂದೆ ಇದ್ದ ಬೈಕಿಗೆ ಡಿಕ್ಕಿ ಹೊಡೆದಿದೆ. ಈ ಸಂದರ್ಭದಲ್ಲಿ ಬೈಕ್‌ನಲ್ಲಿದ್ದ ಮಹಿಳೆ ಸಾವನ್ನಪ್ಪಿದ್ದಾರೆ. ಮೃತ ಮಹಿಳೆಯನ್ನು ಅಂಜಲಿ (36) ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಬೈಕ್‌ನಲ್ಲಿದ್ದ ವಿಜಯ್ ಕುಮಾರ್ ಅವರಿಗೆ ಗಂಭೀರವಾಗಿ ಗಾಯವಾಗಿದೆ. ವಿಜಯ್ ಕುಮಾರ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಸಂಬಂಧ ಅಶೋಕನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
