ರಾಮನಗರ
ಬೆಳ್ಳಂಬೆಳಗ್ಗೆ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಾಮನಗರ ತಾಲೂಕಿನ ಕೆಂಪೇಗೌಡನದೊಡ್ಡಿ ಗ್ರಾಮದ ಬಳಿ ಘಟನೆ ನಡೆದಿದೆ. ಬೆಂಗಳೂರಿನ ಪೀಣ್ಯ ಮೂಲದವರಾಗಿರುವ ರಾಜೇಶ್ (42) ಹಾಗೂ ಉಮಾ (35) ಮೃತ ದುರ್ದೈವಿಗಳು.
ಘಟನೆಯಲ್ಲಿ ಓರ್ವ ಮಹಿಳೆಗೆ ಗಂಭೀರ ಗಾಯವಾಗಿದ್ದು, ಮಕ್ಕಳು ಸೇರಿದಂತೆ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
6 ಜನರಿಗೆ ಗಾಯ ಬೆಂಗಳೂರಿನಿಂದ ಮೈಸೂರು ಕಡೆ ಹೋಗುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡಲು ಹೋಗಿ ಒಮಿನಿ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ವೇಗವಾಗಿ ಚಲಿಸುತ್ತಿದ್ದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಲಾರಿ ಹಿಂಬದಿಗೆ ಒಮಿನಿ ಕಾರು ಅಪ್ಪಳಿಸಿದೆ. ಅಪಘಾತದ ಭೀಕರತೆಗೆ ಮಹಿಳೆ ಸೇರಿದಂತೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಉಳಿದವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.
ಗುದ್ದಿದ ರಭಸಕ್ಕೆ ಒಮಿನಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತ ಹಿನ್ನಲೆಯಲ್ಲಿ ಕೆಲಕಾಲ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಆಗಿದ್ದು, ರಾಮನಗರ ಸಂಚಾರಿ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ