ಕರ್ನಾಟಕದ 2ನೇ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ ….!

ಬೆಂಗಳೂರು: 

     ಕರ್ನಾಟಕದಲ್ಲಿ ಮೇ 7 ರಂದು ನಡೆಯಲಿರುವ ಎರಡನೇ ಹಂತದ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಭರಾಟೆ ಆರಂಭವಾಗಿದ್ದು, ಗುರುವಾರ ಬಿಜೆಪಿಯ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ಬಿ ವೈ ರಾಘವೇಂದ್ರ ಮತ್ತು ಸಚಿವ ಸತೀಶ್ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಸೇರಿದಂತೆ ಹಲವು ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ.

     ಶಿವಮೊಗ್ಗ ಹಾಲಿ ಸಂಸದ ಬಿವೈ ರಾಘವೇಂದ್ರ ಅವರು ನಾಮಪತ್ರ ಸಲ್ಲಿಕೆಗೂ ಮುನ್ನ, ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ, ಜೆಡಿಎಸ್ ಮುಖಂಡ ಎಚ್ ಡಿ ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ ಸೇರಿದಂತೆ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಹಲವು ಮುಖಂಡರೊಂದಿಗೆ ಬೃಹತ್ ರೋಡ್ ಶೋ ನಡೆಸಿದರು.

    ಬಿಜೆಪಿಯ ಇತರ ಇಬ್ಬರು ಸಂಸದರಾದ ಪಿ ಸಿ ಗದ್ದಿಗೌಡರ್ ಮತ್ತು ಉಮೇಶ್ ಜಾಧವ್ ಅವರು ಕ್ರಮವಾಗಿ ಬಾಗಲಕೋಟೆ ಮತ್ತು ಗುಲ್ಬರ್ಗ ಲೋಕಸಭಾ ಕ್ಷೇತ್ರದಿಂದ ಇಂದು ನಾಮಪತ್ರ ಸಲ್ಲಿಸಿದರು. 2019 ರಲ್ಲಿ ಕಾಂಗ್ರೆಸ್‌ ಅಧ್ಯಕ್ಷ ಎಂ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಿದ್ದ ಜಾಧವ್ ಅವರು, ಈಗ ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ ವಿರುದ್ಧ ಸ್ಪರ್ಧಿಸುತ್ತಿದ್ದಾರೆ.

    ಇನ್ನು ರಾಯಚೂರಿನಲ್ಲಿ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯ್ಕ್ ನಾಮಪತ್ರ ಸಲ್ಲಿಸಿದ್ದು, ಅವರ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ, ನಿವೃತ್ತ ಐಎಎಸ್ ಅಧಿಕಾರಿ ಜಿ ಕುಮಾರ್ ನಾಯ್ಕ್ ಹಾಗೂ ಚಿಕ್ಕೋಡಿ ಕಾಂಗ್ರೆಸ್ ಅಭ್ಯರ್ಥಿ, ಸಚಿವ ಸತೀಶ್ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಕೂಡ ಇಂದು ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.

    ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯುತ್ತಿದ್ದು, ಮೊದಲ ಹಂತದಲ್ಲಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 14 ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮತದಾನ ನಡೆಯಲಿದೆ.

    ಉಳಿದ 14 ಕ್ಷೇತ್ರಗಳಲ್ಲಿ ಮೇ 7 ರಂದು ಎರಡನೇ ಹಂತದಲ್ಲಿ ಮತದಾನ ನಡೆಯಲಿದ್ದು, ಏಪ್ರಿಲ್ 19 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಏಪ್ರಿಲ್ 20 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಏಪ್ರಿಲ್ 22 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap