ಬೆಂಗಳೂರು
ಬಿಜೆಪಿ ನಾಯಕರು ಪಕ್ಷ ತೊರೆಯುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಮೂರು ದಿನ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ವಿಶೇಷವೆಂದರೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಪ್ರತಿನಿಧಿಸುವ ಧಾರವಾಡ-ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರಕ್ಕೆ ನಡ್ಡಾ ಆಗಮಿಸುತ್ತಿದ್ದು, ಕಾರ್ಯಕರ್ತರೊಂದಿಗೆ ಸಭೆ ನಡೆಸಲಿದ್ದಾರೆ.
ಬುಧವಾರ ಹುಬ್ಬಳ್ಳಿಯ ಮೂರು ಸಾವಿರ ಮಠಕ್ಕೆ ಭೇಟಿ ಕೊಟ್ಟು ಸಿದ್ಧಾರೂಢರ ಆಶೀರ್ವಾದ ಪಡೆಯಲಿದ್ದಾರೆ. ಮೂರು ದಿನಗಳ ಕಾಲ ರಾಜ್ಯದಲ್ಲೇ ವಾಸ್ತವ್ಯ ಹೂಡಲಿರುವ ನಡ್ಡಾ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಉಪಮುಖ್ಯಮಂತ್ರಿ ಲಕ್ಷಣ ಸವದಿ ಸೇರಿದಂತೆ ಅನೇಕರು ಬಿಜೆಪಿ ಬಿಟ್ಟು ಅನ್ಯ ಪಕ್ಷಗಳತ್ತ ಮುಖ ಮಾಡಿರುವುದರಿಂದ ಬಿಜೆಪಿ ತುಸು ಕಂಗೆಟ್ಟಿದೆ. ಟಿಕೆಟ್ ಹಂಚಿಕೆ ನಂತರ ರಾಜ್ಯಾದ್ಯಂತ ಅಸಮಾಧಾನಿತರು ಆಕ್ರೊಶಗೊಂಡಿದ್ದು, ಬಿಜೆಪಿಗೆ ಗುಡ್‌ಬೈ ಹೇಳಿರುವುದು ಬಿಸಿತುಪ್ಪವಾಗಿ ಪರಿಣಮಿಸಿದೆ. ಹೀಗಾಗಿ ಇದೀಗ ಜೆ.ಪಿ.ನಡ್ಡಾ ರಂಗ ಪ್ರವೇಶ ಮಾಡಿದ್ದು, ಟಿಕೆಟ್ ಸಿಗದ ಅಸಮಾಧಾನಿತರು, ಪ್ರಭಾರಿಗಳು, ಕಾರ್ಯಕರ್ತರು, ಪದಾಧಿಕಾರಿಗಳ ಜತೆ ಸಭೆ ನಡೆಸಲಿದ್ದಾರೆ.
ಮೂಲಗಳ ಪ್ರಕಾರ, ನಡ್ಡಾ ಶೆಟ್ಟರ್ ಪ್ರತಿನಿಧಿಸುವ ಕ್ಷೇತ್ರದಲ್ಲಿ ಮತಯಾಚನೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ಶತಾಯ-ಗತಾಯ ಧಾರವಾಡ-ಹುಬ್ಬಳ್ಳಿ ಸೆಂಟ್ರಲ್ ಮತ್ತು ಅಥಣಿ ಕ್ಷೇತ್ರವನ್ನು ಗಂಭೀರವಾಗಿ ತೆಗೆದುಕೊಂಡಿರುವ ವರಿಷ್ಠರು ಇಲ್ಲಿ ಪಕ್ಷ ಬಿಟ್ಟಿರುವ ಇಬ್ಬರನ್ನು ಸೋಲಿಸಿ ಪಾಠ ಕಲಿಸಬೇಕೆಂಬ ತೀರ್ಮಾನಕ್ಕೆ ಬಂದಿದ್ದಾರೆ.
ನಾಮಪತ್ರ ಸಲ್ಲಿಕೆಯಾದ ನಂತರ ಇದೇ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಚಾರಕ್ಕೆ ಅಧಿಕೃತ ಚಾಲನೆ ನೀಡಲಿದ್ದು, ಹುಬ್ಬಳ್ಳಿ, ಬೆಳಗಾವಿ, ಮೈಸೂರು ಸೇರಿದಂತೆ ಮತ್ತಿತರ ಕಡೆ ಬಹಿರಂಗ ಪ್ರಚಾರ ನಡೆಸಲಿದ್ದಾರೆ.
ಇದರ ಬೆನ್ನಲ್ಲೇ ಹಿಂದೂ ಫೈರ್ ಬ್ರ್ಯಾಂಡ್ ಖ್ಯಾತಿಯ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೇಂದ್ರ ಗೃಹ ಸಚಿವ ಅಮಿತ್ ಷಾ ಸೇರಿದಂತೆ ಘಟಾನುಘಟಿ ಬಿಜೆಪಿ ನಾಯಕರು ರಾಜ್ಯಕ್ಕೆ ದಾಂಗುಡಿ ಇಟ್ಟಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ