ಬೆಂಗಳೂರು
ಕರ್ನಾಟಕದಲ್ಲಿ ಮುಂಗಾರು ಆರಂಭಕ್ಕೆ ಮುನ್ನವೇ ರಾಜ್ಯದಲ್ಲಿ ಮಳೆ ಅಬ್ಬರ ಶುರುವಾಗಿದೆ. ಮೇ 21ರವರೆಗೆ ರಾಜ್ಯಾದ್ಯಂತ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ವ್ಯಾಪಕವಾಗಿ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನೂ ಕರ್ನಾಟಕದ ವಿವಿಧ ಭಾಗಗಳಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮಳೆಯಾಗುತ್ತಿದ್ದು, ಕರ್ನಾಟಕದ ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ,ಕೊಡಗು, ಶಿವಮೊಗ್ಗ, ಉತ್ತರ ಒಳನಾಡಿನ ಯಾದಗಿರಿ, ಕಲಬುರಗಿಯಲ್ಲಿ ಇಂದಿನಿಂದ ಮೇ 17ರವರೆಗೆ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಿಗೂ ಹವಾಮಾನ ಇಲಾಖೆ ‘ಹಳದಿ ಎಚ್ಚರಿಕೆ’ ನೀಡಿದೆ.
ಬಿರುಗಾಳಿ, ಗುಡುಗು, ಸಿಡಿಲಿನ ಅಬ್ಬರದೊಂದಿಗೆ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಇತ್ತ ರಾಜ್ಯದ ವಿವಿಧ ಭಾಗದಲ್ಲಿ ಉತ್ತಮ ಮಳೆಯಾಗುತ್ತಿದ್ದು, ರೈತರು ಸಂತಸದಲ್ಲಿದ್ದಾರೆ. ಇನ್ನೂ ಈ ವರ್ಷದಲ್ಲಿ ಇದೇ ಮೊದಲ ಬಾರಿಗೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಒಂದೇ ಬಾರಿ ಹಳದಿ ಎಚ್ಚರಿಕೆಯನ್ನ ಹವಾಮಾನ ಇಲಾಖೆ ನೀಡಿದೆ. ಮೇ17ರವರೆಗೆ ದಕ್ಷಿಣ ಒಳನಾಡು, ಉತ್ತರ ಒಳನಾಡು ಮತ್ತು ಕರಾವಳಿ ಭಾಗದ ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ