ಮಂಡ್ಯ:
ವೇಗವಾಗಿ ಬಂದ ಕಾರು ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿ ಸ್ಥಳದಲ್ಲಿಯೇ ಮೂವರು ದುರ್ಮರಣ ಹೊಂದಿರುವ ಘಟನೆ ನಾಗಮಂಗಲ ಹಾಗೂ ಪಾಂಡವಪುರ ಹೆದ್ದಾರಿಯ ಶ್ರೀರಾಮನಹಳ್ಳಿ ಬಳಿ ನಡೆದಿದೆ.
ಮೃತರನ್ನು ಚಿತ್ರದುರ್ಗ ಮೂಲದ ಯುವರಾಜ್, ತಿಪ್ಪೇಸ್ವಾಮಿ ಹಾಗೂ ಸಿದ್ದೇಶ್ ಎಂದು ಗುರುತಿಸಲಾಗಿದೆ. ಈ ಮೂವರು ಕಾರಿನಲ್ಲಿ ಬರುತ್ತಿದ್ದಾಗ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಸ್ತೆಯಿಂದ ದೂರಕ್ಕೆ ಸರಿದು ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಮೃತ ದೇಹಗಳನ್ನು ನಾಗಮಂಗಲ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದ್ದು, ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








