ಬೆಂಗಳೂರು:
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹುಬ್ಬಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಚಿವ ಬೋಸರಾಜು ಹಾಗೂ ತಿಪ್ಪಣ್ಣ ಕಮಕನೂರು ಅವರು ವಿಧಾನ ಪರಿಷತ್ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ವಿಧಾನ ಪರಿಷತ್ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಕಾಂಗ್ರೆಸ್ ಮೂವರು ಅಭ್ಯರ್ಥಿಗಳಾದ ಜಗದೀಶ್ ಶೆಟ್ಟರ್, ತಿಪ್ಪಣ್ಣ ಕಮಕನೂರು ಹಾಗೂ ಸಚಿವ ಬೋಸರಾಜು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ವಿಶಾಲಾಕ್ಷಿ ಅವರು ಶುಕ್ರವಾರ ಅಧಿಕೃತವಾಗಿ ಘೋಷಿಸಿದ್ದಾರೆ.
ಲಕ್ಷ್ಮಣ ಸವದಿ, ಆರ್ ಶಂಕರ್ ಹಾಗೂ ಬಾಬುರಾವ್ ಚಿಂಚನಸೂರ್ ಅವರ ರಾಜೀನಾಮೆಯಿಂದ ತೆರವಾದ ಈ ಮೂರು ಸ್ಥಾನಗಳಿಗೆ ಚುನಾವಣಾ ಆಯೋಗ ಉಪ ಚುನಾವಣೆ ಘೋಷಿಸಿತ್ತು.
ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆಯಬೇಕಿದ್ದ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು ಜೂನ್ 20 ಕೊನೆಯ ದಿನವಾಗಿತ್ತು. ಆದರೆ ಕಾಂಗ್ರೆಸ್ ಅಭ್ಯರ್ಥಿಗಳ ವಿರುದ್ಧ ಯಾವುದೇ ನಾಮಪತ್ರ ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ಈ ಮೂವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
