ಪಂಜಾಬ್
ದರೋಡೆಕೋರರು, ಭಯೋತ್ಪಾದಕರ ನಡುವಿನ ಸಂಪರ್ಕ ಮುರಿಯುವ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆಯುತ್ತಿರುವಂತೆಯೇ, ಗುರುವಾರ 1,159 ದರೋಡೆಕೋರರು ಹಾಗೂ ಅವರ ಸಹಚರರ ಅಡಗುತಾಣಗಳ ಮೇಲೆ ದಾಳಿ ನಡೆಸಲಾಗಿದೆ. ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದ್ದು, 30 ಮಂದಿಯನ್ನು ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಪೊಲೀಸ್ ಮಹಾನಿರ್ದೇಶಕ ಗೌರವ್ ಯಾದವ್ ಅವರ ನಿರ್ದೇಶನದ ಮೇರೆಗೆ ಬೆಳಿಗ್ಗೆ 7 ರಿಂದ ಮಧ್ಯಾಹ್ನ 2 ರವರೆಗೆ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ಇದರಲ್ಲಿ ವಿವಿಧ ದರೋಡೆಕೋರರೊಂದಿಗೆ ಸಂಪರ್ಕ ಹೊಂದಿರುವ ಎಲ್ಲಾ ದರೋಡೆಕೋರರು ಮತ್ತು ಅವರ ಸಂಬಂಧಿಕರು, ಸ್ನೇಹಿತರ ಮನೆಗಳು ಮತ್ತಿತರ ಕಡೆಗಳಲ್ಲಿ ಸಂಪೂರ್ಣವಾಗಿ ಶೋಧಿಸಲಾಗಿದೆ ಎಂದು ಪೊಲೀಸ್ ಇಲಾಖೆಯ ಅಧಿಕೃತ ಹೇಳಿಕೆ ತಿಳಿಸಿದೆ.
ಈ ದಾಳಿ ಕುರಿತು ಮಾತನಾಡಿದ ವಿಶೇಷ ಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಅರ್ಪಿತ್ ಶುಕ್ಲಾ, ಭಾರತ ಮತ್ತು ವಿದೇಶಗಳಲ್ಲಿ ನೆಲೆಸಿರುವ ಭಯೋತ್ಪಾದಕರು, ದರೋಡೆಕೋರರು ಮತ್ತು ಮಾದಕವಸ್ತು ಕಳ್ಳಸಾಗಣೆದಾರರ ನಡುವಿನ ಸಂಬಂಧಕ್ಕೆ ಅಡ್ಡಿಯನ್ನುಂಟು ಮಾಡುವ ಗುರಿಯೊಂದಿಗೆ ಈ ದಾಳಿ ನಡೆಸಲಾಗಿದೆ. ಯಶಸ್ವಿ ದಾಳಿಗಾಗಿ ಸಾಕಷ್ಟು ಸಂಖ್ಯೆಯ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲು ಎಲ್ಲಾ ಪೊಲೀಸ್ ಆಯುಕ್ತರು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಲಾಗಿತ್ತು ಎಂದು ತಿಳಿಸಿದರು.