ಸೋಲನ್
ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯ ಕಾಸ್ಮೆಟಿಕ್ (ಸೌಂದರ್ಯವರ್ಧಕ) ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿ 31 ಮಂದಿಗೆ ಗಾಯವಾಗಿರುವ ಘಟನೆ ಶುಕ್ರವಾರ ನಡೆದಿದೆ.
ಕೆಮಿಕಲ್ ಫ್ಯಾಕ್ಟರಿಯಲ್ಲಿ ಕಳೆದ ರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದರೆ, 9 ಮಂದಿ ನಾಪತ್ತೆಯಾಗಿದ್ದಾರೆಂದು ವರದಿಗಳು ತಿಳಿಸಿವೆ.
ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿರುವ ಅಗ್ನಿಶಾಮಕ ದಳದ ಅಧಿಕಾರಿಗಳು ಬೆಂಕಿ ನಂದಿಸುವ ಕಾರ್ಯಾಚಾರಣೆ ಆರಂಭಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಅಗ್ನಿಶಾಮಕ ಅಧಿಕಾರಿ ಸಂಜೀವ್ ಅವರು ಮಾತನಾಡಿ “ಬೆಂಕಿ ನಂದಿಸುವ ಕಾರ್ಯ ಇನ್ನೂ ನಡೆಯುತ್ತಿದೆ. 22 ಕ್ಕೂ ಹೆಚ್ಚು ವಾಹನಗಳು ಕಾರ್ಯಾಚರಣೆ ನಡೆಸುತ್ತಿವೆ, ಇದರಲ್ಲಿ ಪಂಜಾಬ್, ಹರಿಯಾಣ ಮತ್ತು ಚಂಡೀಗಢದಿಂದ ಅಗ್ನಿಶಾಮಕ ದಳದ ವಾಹನಗಳು ಮತ್ತು ಹತ್ತಿರದ ಕೈಗಾರಿಕೆಗಳ ಇತರ ವಾಹನಗಳೂ ಇವೆ. ಹೊರಗಿನಿಂದ ಬೆಂಕಿಯನ್ನು ನಂದಿಸಲಾಗುತ್ತಿದೆ. ನಿಖರವಾದ ಸಾವು-ನೋವುಗಳ ಸಂಖ್ಯೆಯನ್ನು ಇನ್ನೂ ತಿಳಿದುಬಂದಿಲ್ಲ ಎಂದು ಹೇಳಿದ್ದಾರೆ.