ಕುವೈತ್‌ ಅಗ್ನಿ ದುರಂತ : 40 ಜನ ಭಾರತೀಯರ ಸಾವು…!

ನವದೆಹಲಿ:

     ಕುವೈತ್‌ನ ಕಾರ್ಮಿಕರ ಶಿಬಿರದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ 49 ಜನ ಸಜೀವ ದಹನವಾಗಿದ್ದು, ಇವರಲ್ಲಿ ಬಹುತೇಕರು ಭಾರತೀಯರಾಗಿದ್ದಾರೆ ಮತ್ತು 50 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ಮತ್ತು ಗಲ್ಫ್ ಮಾಧ್ಯಮ ವರದಿ ಮಾಡಿದೆ.

    ಕುವೈತ್ ಅಗ್ನಿ ದುರಂತದಲ್ಲಿ ಕನಿಷ್ಠ 40 ಮಂದಿ ಭಾರತೀಯರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ರಾತ್ರಿ ತುರ್ತು ಸಭೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಸಾಧ್ಯವಿರುವ ಎಲ್ಲ ನೆರವು ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

    ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ಅವರು ಪರಿಹಾರ ಕ್ರಮಗಳ ಮೇಲ್ವಿಚಾರಣೆ ಮಾಡಲು ಮತ್ತು ಮೃತ ದೇಹಗಳನ್ನು ತ್ವರಿತವಾಗಿ ಸ್ವದೇಶಕ್ಕೆ ತರಲು ಕುವೈತ್‌ಗೆ ಧಾವಿಸುತ್ತಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

    ಘಟನೆಗೆ ತೀವ್ರ ದುಃಖ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ, ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. ಅಲ್ಲದೆ ಮೃತ ಭಾರತೀಯ ಪ್ರಜೆಗಳ ಕುಟುಂಬಕ್ಕೆ ಪ್ರಧಾನಮಂತ್ರಿ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಪರಿಹಾರವನ್ನು ಪ್ರಧಾನಿ ಮೋದಿ ಘೋಷಿಸಿದ್ದಾರೆ.

   ಸಭೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್, ಕೀರ್ತಿ ವರ್ಧನ್ ಸಿಂಗ್, ಪ್ರಧಾನಿ ಪ್ರಧಾನ ಕಾರ್ಯದರ್ಶಿ ಪ್ರಮೋದ್ ಕುಮಾರ್ ಮಿಶ್ರಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ವಿದೇಶಾಂಗ ಕಾರ್ಯದರ್ಶಿ ವಿನಯ್ ಕ್ವಾತ್ರಾ ಉಪಸ್ಥಿತರಿದ್ದರು ಎಂದು ಪ್ರಕಟಣೆ ತಿಳಿಸಿದೆ.

    ಮಲಯಾಳಿ ಉದ್ಯಮಿಗೆ ಸೇರಿದ ಕುವೈತ್​ನ ದಕ್ಷಿಣ ಅಹ್ಮದಿ ಗವರ್ನರೇಟ್‌ನಲ್ಲಿರುವ ಮಂಗಾಫ್ ಪ್ರದೇಶದಲ್ಲಿರುವ ಕಟ್ಟಡದ ಅಡುಗೆ ಕೋಣೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 6 ಅಂತಸ್ತಿನ ಈ ಕಟ್ಟಡದಲ್ಲಿ 160ಕ್ಕೂ ಹೆಚ್ಚು ಕಾರ್ಮಿಕರು ಇದ್ದರು ಎನ್ನಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap