ಉಡುಪಿ
ಕರಾವಳಿಯಲ್ಲಿ 61 ದಿನಗಳ ಕಾಲ ಮೀನುಗಾರಿಕೆ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಪ್ರತಿ ವರ್ಷವೂ ನೈಋತ್ಯ ಮುಂಗಾರು ಮಳೆ ಆರಂಭಗೊಳ್ಳುವ ಅವಧಿಯಲ್ಲಿ ಮೀನುಗಾರಿಕೆ ನಿಷೇಧಿಸಲಾಗುತ್ತಿದೆ. ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆ ಹಾಗೂ ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿಗಳ ಮತ್ತು 10 ಅಶ್ವಶಕ್ತಿ (ಹೆಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್ಬೋರ್ಡ್ ಅಥವಾ ಔಟ್ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ನಿಷೇಧ ಮಾಡಲಾಗಿದೆ.
ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿಯ ವರೆಗಿನ ಸಾಮರ್ಥ್ಯದ ಮೋಟರೀಕೃತ ದೋಣಿ ಹಾಗೂ ಸಾಂಪ್ರದಾಯಕ/ ನಾಡದೋಣಿಗಳು ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿ ನೀಡಲಾಗಿದೆ.
ಮೀನುಗಾರಿಕೆ ನಿಷೇಧದ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ 1986ರಲ್ಲಿ ವಿಧಿಸಲಾಗಿರುವ ದಂಡನೆಗೆ ಹೊಣೆಯಾಗುವುದಲ್ಲದೇ, ಒಂದು ವರ್ಷದ ಅವಧಿಗೆ ಡೆಲಿವರಿ ಪಾಯಿಂಟ್‌ನಲ್ಲಿ ರಾಜ್ಯ ಮಾರಾಟಕರ ರಹಿತ ಡೀಸೆಲ್ ಪಡೆಯಲು ಅನರ್ಹರಾಗುತ್ತಾರೆ. ಕರಾವಳಿ ಪ್ರದೇಶದ ಎಲ್ಲಾ ಮೀನುಗಾರರು ಈ ಆದೇಶವನ್ನು ಪಾಲಿಸಿ ಸರಕಾರದೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಲಾಗಿದೆ.
ನೈಋತ್ಯ ಮುಂಗಾರು ಆರಂಭದ ಅವಧಿಯಲ್ಲಿ ಮೀನುಗಳ ಸಂತಾನೋತ್ಪತ್ತಿ ಪ್ರಕ್ರಿಯೆ ತೀವ್ರಗೊಳ್ಳಲಿದೆ. ಈ ಸಂದರ್ಭಲ್ಲಿ ಮರಿಗಳು ಮತ್ತು ಮೊಟ್ಟೆಗಳು ನಾಶವಾಗಬಾರದು ಎಂಬ ಕಾರಣಕ್ಕೆ ಪ್ರತಿವರ್ಷ ರಾಜ್ಯದ ಕರಾವಳಿ ಭಾಗದಲ್ಲಿ ಜೂನ್ 1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆಗೆ ನಿಷೇಧ ಹೇರಲಾಗುತ್ತದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೀನುಗಾರಿಕೆ ನಿಷೇಧ ಮಾಡಲಾಗುತ್ತದೆ. ಪಕ್ಕದ ಕೇರಳ ರಾಜ್ಯದಲ್ಲಿಯೂ ಸಹ ಯಾಂತ್ರೀಕೃತ ಮೀನುಗಾರಿಕೆಗೆ ನಿಷೇಧಿಸಲಾಗುತ್ತದೆ. ಈ ಅವಧಿಯಲ್ಲಿ ಸಾಂಪ್ರದಾಯಿಕ ನಾಡದೋಣಿಗಳಲ್ಲಿ ಮೀನುಗಾರಿಕೆ ನಡೆಸಬಹುದು.
ಅಲ್ಲದೇ ಮಳೆಗಾಲದಲ್ಲಿ ಸಮುದ್ರದಲ್ಲಿ ಭಾರೀ ಗಾತ್ರದ ಅಲೆ ಏಳುತ್ತದೆ. ಭಾರೀ ಗಾಳಿ ಬೀಸುತ್ತದೆ. ಈ ಅವಧಿಯಲ್ಲಿ ಸಮುದ್ರದ ನಡುವೆ ಮೀನುಗಾರಿಕೆಗೆ ತೆರಳಿ ಸಿಕ್ಕಿಹಾಕಿಕೊಳ್ಳಬಾರದು ಎಂಬ ಕಾರಣಕ್ಕೆ 61 ದಿನ ಮೀನುಗಾರಿಕೆ ನಿಷೇಧಿಸಲಾಗುತ್ತದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ