ಬೆಂಗಳೂರು
ಪ್ರಧಾನಿ ನರೇಂದ್ರಮೋದಿಯವರು ಸೆ. 7 ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದು, ಈ ವೇಳೆ ರಾಜ್ಯದಲ್ಲಿ ಸಂಭವಿಸಿದ ಪ್ರವಾಹ ಪರಿಹಾರ ಕಾರ್ಯಗಳಿಗೆ ಹೆಚ್ಚಿನ ನೆರವು ನೀಡುವಂತೆ ಮನವಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.
ರಾಜ್ಯದ ನೆರೆ ಪರಿಸ್ಥಿತಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಈಗಾಗಲೇ ಎಲ್ಲ ವಿಚಾರಗಳನ್ನು ದೆಹಲಿಯಲ್ಲಿ ಭೇಟಿ ಮಾಡಿದ ಸಂದರ್ಭದಲ್ಲಿ ತಿಳಿಸಿದ್ದೇನೆ. ಸೆ. 7 ರಂದು ಅವರು ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಆ ಸಂದರ್ಭದಲ್ಲೂ ಪ್ರವಾಹ ಪರಿಸ್ಥಿತಿಯ ಬಗ್ಗೆ ಮತ್ತೊಮ್ಮೆ ಮನವರಿಕೆ ಮಾಡಿ ಹೆಚ್ಚಿನ ಪರಿಹಾರ ನೀಡುವಂತೆ ಕೋರುತ್ತೇನೆ ಎಂದು ಹೇಳಿದರು.
ನಾಡದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಕೆ.ಆರ್.ಎಸ್.ಗೆ ಬಾಗಿನ ಅರ್ಪಿಸಲು ಇಂದು ಮೈಸೂರಿಗೆ ಆಗಮಿಸಿದ ಮುಖ್ಯಮಂತ್ರಿ ಯಡಿಯೂರಪ್ಪನವರು ಲಲಿತ ಮಹಲ್ ಹೆಲಿಪ್ಯಾಡ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನೆರೆ ಪರಿಹಾರ ಕಾರ್ಯಗಳು ಸಮರ್ಪಕವಾಗಿ ನಡೆದಿವೆ. ಕೇಂದ್ರ ಸರ್ಕಾರ ಇನ್ನು ಮೂರ್ನಾಲ್ಕು ದಿನಗಳಲ್ಲಿ ಹೆಚ್ಚಿನ ನೆರವು ನೀಡಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.
ರಾಜ್ಯದ ನೆರೆ ಪ್ರದೇಶಗಳಿಗೆ ಕೇಂದ್ರದ ಅಧ್ಯಯನ ತಂಡ ಈಗಾಗಲೇ ಭೇಟಿ ನೀಡಿ ಕೇಂದ್ರಕ್ಕೆ ವರದಿಯನ್ನು ನೀಡಿದ್ದು, ಕೇಂದ್ರ ಸರ್ಕಾರದಿಂದ ಶೀಘ್ರವೇ ಶುಭ ಸುದ್ದಿ ಬರಲಿದೆ ಎಂದರು. ನೆರೆ ಸಂತ್ರಸ್ಥರಿಗೆ ಸದ್ಯಕ್ಕೆ 10 ಸಾವಿರ ರೂ. ಗಳನ್ನು ರಾಜ್ಯ ಸರ್ಕಾರ ನೀಡಿದೆ. ಮನೆ ನಿರ್ಮಾಣಕ್ಕೆ 5 ಲಕ್ಷ, ಮನೆ ದುರಸ್ಥಿಗೆ 1 ಲಕ್ಷ ರೂ. ನೀಡಲಾಗುತ್ತದೆ. ಕಳೆದ 20-30 ವರ್ಷಗಳಲ್ಲಿ ಆಗದ ದೊಡ್ಡ ಅನಾಹುತ ಈಗ ಆಗಿದೆ.
ಕೇಂದ್ರದಿಂದ ಹೆಚ್ಚಿನ ನೆರವು ಅವಶ್ಯವಿದೆ ಎಂದರು. ಈ ಎಲ್ಲ ವಿಚಾರಗಳ ಬಗ್ಗೆಯೂ ಪ್ರಧಾನಿಗಳು ರಾಜ್ಯ ಭೇಟಿ ನೀಡಿದ ಸಂದರ್ಭದಲ್ಲಿ ರಾಜಭವನದಲ್ಲಿ ಅವರನ್ನು ಭೇಟಿ ಮಾಡಿ ಎಲ್ಲವನ್ನೂ ಹೇಳಿ, ಹೆಚ್ಚಿನ ನೆರವು ಕೋರುತ್ತೇನೆ ಎಂದು ಅವರು ಹೇಳಿದರು.
ನಂತರ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಸಿಎಂ ಗದ್ದುಗೆ ಏರಿದ ಬಳಿಕ ಮೊದಲ ಬಾರಿಗೆ ಚಾಮುಂಡಿ ಬೆಟ್ಟಕ್ಕೆ ಭೆಟಿ ನೀಡಿದ ಯಡಿಯೂರಪ್ಪ ನವರಿಗೆ ಸಚಿವ ಆರ್.ಅಶೋಕ್, ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಸಂಸದ ಪ್ರತಾಪ್ ಸಿಂಹ, ಶಾಸಕ ರಾಮದಾಸ್ ಸೇರಿದಂತೆ ಹಲವರು ಸಾಥ್ ನೀಡಿದರು. 3 ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಬಗ್ಗೆ ಕೇಳಿದ ಪ್ರಶ್ನೆಗೆ ಸಿಡಿಮಿಡಿಗೊಂಡು ಹೊರಟರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








