ಡಿಕೆಶಿ ಅರೆಸ್ಟ್ ಹಿನ್ನೆಲೆ : 2 ಬಸ್ ಗೆ ಬೆಂಕಿ, 15 ಬಸ್ ಗಳ ಮೇಲೆ ಕಲ್ಲು ತೂರಾಟ!!

ಬೆಂಗಳೂರು:

      ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಜಾರಿನಿರ್ದೇಶನಾಲಯ ಬಂಧಿಸಿದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪ್ರತಿಭಟನೆಗೆ ಕಾಂಗ್ರೆಸ್ ಕರೆಕೊಟ್ಟಿದ್ದು, ರಾಮನಗರ, ಕನಕಪುರದಲ್ಲಿ ಪರಿಸ್ಥಿತಿ ಉದ್ವಿಘ್ನಗೊಂಡಿದೆ.

       ಡಿಕೆಶಿ ಬೆಂಬಲಿಗರು ಇಲ್ಲಿನ ಹೆದ್ದಾರಿಗಳನ್ನು ಬಂದ್ ಮಾಡಿ ವಾಹನ ಸಂಚಾರಕ್ಕೆ ಅಡ್ಡಿಪಡಿಸುವ ಮೂಲಕ ಆಕ್ರೋಶ ಹೊರಹಾಕುತ್ತಿದ್ದಾರೆ.‌ ರಾಮನಗರದಲ್ಲಿ 144 ನಿಷೇಧಾಜ್ಞೆ ಜಾರಿಗೊಳಿಸಿದ್ದು ಬೆಳಿಗ್ಗೆಯಿಂದ ಸರ್ಕಾರಿ ಬಸ್ ಗಳು ರಸ್ತೆಗಿಳಿಯದೇ ಡಿಪೋದಲ್ಲಿ ಠಿಕಾಣಿ ಹೂಡಿವೆ. ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಜಿಲ್ಲಾಧಿಕಾರಿಗೆ ಗೃಹಸಚಿವ ಬಸವರಾಜಬೊಮ್ಮಾಯಿ ಖಡಕ್ ಸೂಚನೆ ನೀಡಿದ್ದಾರೆ.

       ಕನಕಪುರದಾದ್ಯಂತ ಪ್ರತಿಭಟನೆ ಕಾವು ಹೆಚ್ಚಾಗಿದೆ. ದೊಡ್ಡಆಲಹಳ್ಳಿ, ಕೋಡಿಹಳ್ಳಿ, ಕನಕಪುರ ಟೌನ್​ನಲ್ಲಿ ಟೈರ್​ಗೆ ಬೆಂಕಿ ಹಚ್ಚಿ, ಬೆಂಬಲಿಗರು ಪ್ರತಿಭಟನೆ ಮಾಡುತ್ತಿದ್ದಾರೆ.

      ಕನಕಪುರ ಬಂದ್​​ಗೆ ಕರೆ ನೀಡಲಾಗಿದ್ದು, ಪ್ರತಿಭಟನೆ ಮತ್ತಷ್ಟು ತೀವ್ರವಾಗುವ ಲಕ್ಷಣಗಳು ಕಂಡು ಬಂದಿದೆ. ಮಧ್ಯೆ ಕೆಲ ಕಿಡಿಗೇಡಿಗಳು 15 ಬಸ್​ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದು, ಅಪಾರ ನಷ್ಟ ಉಂಟಾಗಿದೆ ಎನ್ನಲಾಗಿದೆ.

       ಕರ್ನಾಟಕದಾದ್ಯಂತ 15 ಬಸ್​ಗಳು ಜಖಂಗೊಂಡಿದ್ದು, 2 ಬಸ್ ಗಳಿಗೆ ಅಗ್ನಿಸ್ಪರ್ಶ ಮಾಡಲಾಗಿದೆ. ಬಸ್​ ಚಾಲಕ ಹಾಗೂ ನಿರ್ವಾಹನ ಮೇಲೆ ಮೇಲೆ ಹಲ್ಲೆ ನಡೆಸಲಾಗಿದೆ. ಮತ್ತಷ್ಟು ಅಹಿತಕರ ಘಟನೆಗಳು ನಡೆಯುವ ಸಾಧ್ಯತೆ ಇರುವುದರಿಂದ ಮುಂಜಾಗೃತ ಕ್ರಮವಾಗಿ ಕನಕಪುರ, ಸಾತನೂರು, ರಾಮನಗರ ವ್ಯಾಪ್ತಿಯಲ್ಲಿ ಕೆಎಸ್​​ಆರ್​​ಟಿಸಿ ಬಸ್ ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ.

       ಬೆಂಗಳೂರಿನ ಶಾಂತಿನಗರ ಬಿಎಂಟಿಸಿ ಬಸ್ ನಿಲ್ದಾಣದ ಮೇಲ್ಭಾಗ ಇರುವ ಇಡಿ ಕಚೇರಿ ಹಾಗೂ ಡಾಲರ್ಸ್​ ಕಾಲೋನಿಯಲ್ಲಿರುವ ಸಿಎಂ ಬಿಎಸ್​ವೈ ನಿವಾಸದ ಮುಂದೆ ಡಿಕೆಶಿ ಬೆಂಬಲಿಗರು ಪ್ರತಿಭಟನೆ ನಡೆಸುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

      ಶಿವಕುಮಾರ್ ಬಂಧನದಿಂದ ಇಂದು ರಾಜ್ಯದೆಲ್ಲೆಡೆ ಭಾರೀ ಪ್ರತಿಭಟನೆಗಳು ನಡೆಯುವ ಸಾಧ್ಯತೆ ಇದೆ. ಹೀಗಾಗಿ ಪೊಲೀಸ್ ಇಲಾಖೆ ಹೈ ಅಲರ್ಟ್ ಆಗಿದೆ. ರಾಜ್ಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತಿಗೆ ಗೃಹಸಚಿವ ಬಸವರಾಜ ಬೊಮ್ಮಾಯಿ ಅವರು ಡಿಜಿಪಿ ನೀಲಮಣಿ ರಾಜು, ಪೊಲೀಸ್ ಕಮಿಷನರ್ ಬಾಸ್ಕರ್ ರಾವ್ ಗೆ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಎಲ್ಲೂ ಅಹಿತಕರ ಘಟನೆ ನಡೆಯಬಾರದು. ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟ ಉಂಟಾಗದಂತೆ ನೋಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ಕನಕಪುರ, ರಾಮನಗರ, ಬಳ್ಳಾರಿ, ಬೆಂಗಳೂರಿನಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ, ಕೆಲ ಸೂಕ್ಷ್ಮ ಪ್ರದೇಶಗಳಲ್ಲೂ ಕಟ್ಟೆಚ್ಚರಕ್ಕೆ ಸೂಚನೆ ನೀಡಲಾಗಿದೆ.

       ರಾಮನಗರ ಬಂದ್ ಗೆ ಕರೆ ನೀಡಿರುವ ಹಿನ್ನಲೆಯಲ್ಲಿ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ ರಜೆ ಘೋಷಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link